ನವದೆಹಲಿ: ನಿನ್ನೆ ನಿಧನರಾದ ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 84 ವರ್ಷದ ಮುಖರ್ಜಿ ಅವರು ನಿನ್ನೆ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ನಿಧನರಾದರು. ಅವರನ್ನು ಆಗಸ್ಟ್ 10 ರಂದು ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಅವರಿಗೆ ಕೊರೋನಾ ಇರುವುದು ಕೂಡ ಬಳಿಕ ತಿಳಿದು ಬಂದಿತ್ತು.
ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಅನೇಕ ರಾಜ್ಯಗಳು ಏಳು ದಿನಗಳ ಅಧಿಕೃತ ಶೋಕಾಚರಣೆ ಘೋಷಿಸಿವೆ.
ಪ್ರಣಬ್ ಮುಖರ್ಜಿ ಅವರ ಅಂತಿಮ ವಿಧಿಗಳು ಇಂದು ನಡೆಯಲಿದ್ದು, ಅವರ ಶವವನ್ನು ನವದೆಹಲಿಯ ಅವರ ಅಧಿಕೃತ ನಿವಾಸ 10 ರಾಜಾಜಿ ಮಾರ್ಗದಲ್ಲಿ ಇಡಲಾಗುತ್ತಿದೆ. ಅಲ್ಲಿ ಜನರಿಗೆ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಿ ಅವರಿಗೆ ಕೊನೆಯ ಗೌರವ ಸಲ್ಲಿಸಲು ಅವಕಾಶ ನೀಡಲಾಗುತ್ತಿದೆ ಎಂದು ಮುಲಗಳು ತಿಳಿಸಿವೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.
ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಮೂರು ಸೇನೆಗಳ ಮುಖ್ಯಸ್ಥರು ಸಹ ಮಾಜಿ ರಾಷ್ಟ್ರಪತಿಗೆ ಅಂತಿಮ ಗೌರವ ಸಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.