ಬೆಂಗಳೂರು: ಸಚಿವ ಸಂಪುಟ ಪುನಾರಚನೆಯ ಪ್ರಸ್ತಾಪವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಯ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರ ಮುಂದಿಟ್ಟು ಒಪ್ಪಿಗೆ ಪಡೆಯುವ ಸಂಬಂಧ ಸಿಎಂ ಯಡಿಯೂರಪ್ಪ ಅವರು ದೆಹಲಿ ಪ್ರವಾಸ ನಡೆಸಿದ್ದಾರೆ.
ಎಲ್ಲವೂ ಅಂದುಕೊಂಡಂತೆಯೇ ನಡೆದರೆ ಸೆ.20 ಭಾನುವಾರದಂದು ಸಂಪುಟ ವಿಸ್ತರಣೆ ಅಥವಾ ಪುನಾರಚನೆಯಾಗುವ ಸಾಧ್ಯತೆಗಳು ಇವೆ ಎಂದು ಮೂಲಗಳು ತಿಳಿಸಿವೆ. ಸಚಿವ ಸಂಪುಟಕ್ಕೆ ಸೇರಿಸಬಹುದಾದ ಮತ್ತು ಸಂಪುಟದಿಂದ ಕೈ ಬಿಡಬಹುದಾದ ಎರಡೂ ಪಟ್ಟಿಗಳನ್ನು ಈ ಸಂದರ್ಭದಲ್ಲಿ ಅವರು ತಮ್ಮೊಂದಿಗೆ ಒಯ್ದಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬಂಧ ಅವರು ಇಂದು ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಗೃಹ ಸಚಿವ ಅಮಿತ್ ಶಾ ಅವರು ನಿನ್ನೆಯಷ್ಟೇ ಡಿಸ್ಚಾರ್ಜ್ ಆಗಿದ್ದಾರೆ. ಈ ಸಂದರ್ಭದಲ್ಲಿ ಶಾ ಅವರ ಭೇಟಿಗೂ ಯಡಿಯೂರಪ್ಪ ಪ್ರಯತ್ನ ಪಡುತ್ತಿದ್ದಾರೆ. ಒಂದು ವೇಳೆ ಶಾ ಅವರೊಂದಿಗೆ ಭೇಟಿ ಸಾಧ್ಯವಾಗದ ಪಕ್ಷದಲ್ಲಿ ಸಂಪುಟ ಸಂಬಂಧಿತ ವಿಚಾರಗಳನ್ನು ನಡ್ಡಾ ಅವರೊಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಮಧ್ಯಸ್ಥಿಕೆಯಲ್ಲಿ ಮಾತನಾಡಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದೂ ಹೇಳಲಾಗುತ್ತಿದೆ.
ಈ ಸಂಬಂಧ ದೆಹಲಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಯಡಿಯೂರಪ್ಪ, ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಸಂಬಂಧಿಸಿದಂತೆ ನಡ್ಡಾ ಅವರೊಂದಿಗೆ ಚರ್ಚೆ ನಡೆಸಲಾಗುತ್ತದೆ. ಪಕ್ಷದ ವರಿಷ್ಠರ ತೀರ್ಮಾನದಂತೆ ಮುಂದಿನ ನಡೆ ಇರಲಿದೆ ಎಂದು ಹೇಳಿದ್ದಾರೆ. ಜೊತೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಭೇಟಿ ಮಾಡಿದ್ದು, ರಾಜ್ಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿರುವುದಾಗಿಯೂ ತಿಳಿಸಿದ್ದಾರೆ.
ಇಂದು ಬೆಳಗ್ಗೆ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವುದಕ್ಕೆ ಸಮಯ ನಿಗದಿಯಾಗಿದ್ದು, ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಕೋರಿ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.