ಮೈಸೂರು: ಅ. 19 ರಂದು ಮೈಸೂರು ವಿವಿಯ 100 ನೇ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 11.15-11.45 ರ ವರೆಗೆ ವರ್ಚುವಲ್ ಭಾಷಣ ನಡೆಸಲಿದ್ದಾರೆ ಎಂದು ವಿವಿಯ ಮೂಲಗಳು ತಿಳಿಸಿವೆ.
ಈ ಸಂಬಂಧ ಮಾತನಾಡಿರುವ ವಿವಿಯ ಕುಲಪತಿ ಪ್ರೊ. ಹೇಮಂತ್ ಕುಮಾರ್ ದೇಶದ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ವಿವಿಯ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡುತ್ತಿರುವುದಾಗಿದೆ ಎಂದು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಅವರು ಭಾಗವಹಿಸಲಿದ್ದಾರೆ ಎಂದೂ ಮಾಹಿತಿ ನೀಡಿದ್ದಾರೆ. ಘಟಿಕೋತ್ಸವ ಕಾರ್ಯಕ್ರಮದಲ್ಲಿ ಕೇವಲ 100 ಮಂದಿಗಷ್ಟೇ ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸಮಾರಂಭದಲ್ಲಿ 29,018 ವಿದ್ಯಾರ್ಥಿಗಳಿಗೆ ಪದವಿ, 654 ಜನರಿಗೆ ಪಿಎಚ್ಡಿ, 7971 ಜನರಿಗೆ ಸ್ನಾತಕೋತ್ತರ ಪದವಿ ಪ್ರದಾನಿಸಲಾಗುವುದು ಎಂದು ಹೇಮಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಒಟ್ಟು 392 ಪದಕಗಳು, 198 ಬಹುಮಾನಗಳನ್ನು 230 ಅಭ್ಯರ್ಥಿಗಳು ಪಡೆದುಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಹೆಚ್ಚು ಚಿನ್ನದ ಪದಕ ಪಡೆದ 30 ಮಂದಿಗೆ ಬೆಳಗ್ಗಿನ ಕಾರ್ಯಕ್ರಮಕ್ಕೆ ಅವಕಾಶ ನೀಡಲಾಗಿದೆ. ಅಪರಾಹ್ನ 2.30 ರಿಂದ ನಡೆಯುವ ಕಾರ್ಯಕ್ರಮದಲ್ಲಿ ಆಂಧ್ರಪ್ರದೇಶದ ಕೇಂದ್ರ ವಿವಿಯ ಕುಲಪತಿ ಪ್ರೊ. ಎಸ್ ಎ ಕೋರಿ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ವೇಳೆ ಎಲ್ಲಾ ನಿಕಾಯದ ವಿದ್ಯಾರ್ಥಿಗಳಿಗೆ 25 ಮಂದಿಯಂತೆ ಪ್ರವೇಶ ನೀಡುವುದಾಗಿಯೂ ತಿಳಿಸಿದ್ದಾರೆ.
ಈ ಕಾರ್ಯಕ್ರಮವನ್ನು ಫೇಸ್ಬುಕ್ ಪೇಜ್, ಯೂಟ್ಯೂಬ್ ಚಾನೆಲ್ ಮೂಲಕ ನೇರ ಪ್ರಸಾರ ಮಾಡಲಾಗುವುದು ಎಂದೂ ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.