ಮಂಗಳೂರು: ನಗರದ ಟಿ ವಿ ರಮಣ್ ಪೈ ಸಭಾಂಗಣದಲ್ಲಿ ಇಂದು ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ದೇಶದಲ್ಲಿಯೇ ಮಾದರಿ ರಾಜ್ಯ ಎಂದು ಗುರುತಿಸಿಕೊಳ್ಳುತ್ತಿದೆ. ಡ್ರಗ್ಸ್ ಮಾಫಿಯಾವನ್ನು ಹೆಡೆಮುರಿ ಕಟ್ಟುವ ಪ್ರಯತ್ನದಲ್ಲಿ ಸಹ ರಾಜ್ಯ ಸರ್ಕಾರ ತೊಡಗಿಸಿಕೊಂಡಿದೆ ಎಂದು ಯಡಿಯೂರಪ್ಪ ತಿಳಿಸಿದರು. ಅಲ್ಲದೆ ರಾಜ್ಯದಲ್ಲಿ ಪ್ರೀತಿ, ಪ್ರೇಮ, ಆಮಿಷಗಳ ಮೂಲಕ ನಡೆಯುತ್ತಿರುವ ಮತಾಂತರ, ಲವ್ ಜಿಹಾದ್ ಮೊದಲಾದ ವಿಚಾರಗಳನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಭರವಸೆಯನ್ನು ಅವರು ನೀಡಿದರು.
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ರಾಜ್ಯದಲ್ಲಿ ಅಧಿಕಾರ ಪಡೆಯುತ್ತದೆ. ಪ್ರಸ್ತುತ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಉತ್ತಮ ಆಡಳಿತವೂ ನಡೆಯುತ್ತಿದೆ. ಬಿಜೆಪಿಯನ್ನು ಬಲಗೊಳಿಸುವುದೇ ನಮ್ಮೆಲ್ಲರ ಗುರಿಯಾಗಿದೆ. ಯಾವ ಚುನಾವಣೆಯನ್ನು ಸಹ ಲಘುವಾಗಿ ತೆಗೆದುಕೊಳ್ಳುವುದಿಲ್ಲ. ಚುನಾವಣೆಯಲ್ಲಿ ಜಯಗಳಿಸಿ, ಜನ ಸೇವೆ ಮಾಡುವ, ಅಭಿವೃದ್ಧಿ ಮಾಡುವ ಗುರಿ ಪಕ್ಷಕ್ಕಿದೆ ಎಂದು ಯಡಿಯೂರಪ್ಪ ತಿಳಿಸಿದರು.
ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ 10 ಪಾಲಿಕೆಗಳಿಗೆ ತಲಾ 50 ಕೋಟಿ ರೂ. ಗಳಂತೆ ಮಂಜೂರು ಮಾಡಲಾಗುವುದು. ಸಮುದ್ರದ ಅಲೆಗಳನ್ನು ಬಳಸಿ ವಿದ್ಯುತ್ ತಯಾರಿಕೆಗೆ ಸಂಬಂಧಿಸಿದಂತೆಯೂ ಆದ್ಯತೆ ನೀಡಲಾಗುವುದು. ಉದ್ಯೋಗಾವಕಾಶವನ್ನು ಸೃಷ್ಟಿಸಲು ಪೂರಕವಾಗುವಂತೆ ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿಯೂ ಚಿಂತನೆ ನಡೆಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಹಿಸಿದ್ದರು.
ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸಚಿವ ಕೆ.ಎಸ್. ಈಶ್ವರಪ್ಪ, ಕಂದಾಯ ಸಚಿವ ಆರ್. ಅಶೋಕ್, ಪಕ್ಷದ ಮುಖಂಡ ಅರವಿಂದ ಲಿಂಬಾವಳಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ವಾಗತಿಸಿದರು.
ಸಭೆಯಲ್ಲಿ ಬಳಸಲಾದ ತಾಮ್ರದ ಲೋಟ ಮತ್ತು ಜಗ್ಗ್ ಎಲ್ಲರ ಗಮನ ಸೆಳೆಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.