ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ದೇಶದ ಮೂಲೆ ಮೂಲೆಯಲ್ಲೂ ಪಕ್ಷವನ್ನು ಬಲಪಡಿಸುವ ಪ್ರಯತ್ನದ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಡಿಸೆಂಬರ್ನಿಂದ 120 ದಿನಗಳ ಕಾಲ ರಾಷ್ಟ್ರವ್ಯಾಪಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಭಾನುವಾರ ಹೇಳಿದ್ದಾರೆ. ಈ ಪ್ರವಾಸವು ಡಿಸೆಂಬರ್ 5 ರಂದು ಉತ್ತರಾಖಂಡದಿಂದ ಪ್ರಾರಂಭವಾಗುವ ನಿರೀಕ್ಷೆಯಿದೆ.
120 ದಿನಗಳ ಈ ಪ್ರವಾಸದಲ್ಲಿ ನಡ್ಡಾ ಅವರು ದೇಶದ ಪ್ರತಿಯೊಂದು ರಾಜ್ಯಕ್ಕೂ ಭೇಟಿ ನೀಡಲಿದ್ದಾರೆ. ಪ್ರತಿ ರಾಜ್ಯದಲ್ಲೂ ಅವರು 11-14 ಸಭೆಗಳು ಅಥವಾ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ. ತಳಮಟ್ಟದಲ್ಲಿ ಪಕ್ಷವನ್ನು ಉತ್ತೇಜಿಸಲು ಅವರು ಬೂತ್ ಸಮಿತಿ, ಮಂಡಲ್ ಸಮಿತಿ ಮತ್ತು ಜಿಲ್ಲಾ ಮಟ್ಟದ ಸಭೆಗಳನ್ನು ನಡೆಸಲಿದ್ದಾರೆ ಎಂದು ಹೇಳಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿದ್ದ ಕ್ಷೇತ್ರಗಳಿಗೆ ಭೇಟಿ ನೀಡಲು ನಡ್ಡಾ ತಮ್ಮ ಪ್ರವಾಸದ ಸಂದರ್ಭದಲ್ಲಿ ಆದ್ಯತೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.
“ಅವರು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣಾ ಸಿದ್ಧತೆಗಳನ್ನೂ ಸಹ ಪರಿಶೀಲಿಸಲಿದ್ದಾರೆ. ಅವರು ಶಾಸಕರು ಮತ್ತು ಪಕ್ಷದ ಮುಖಂಡರುಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ದೇಶದ ಮೂಲೆ ಮೂಲೆಯಲ್ಲಿ ಪಕ್ಷವನ್ನು ಬಲಪಡಿಸುವುದು ಮತ್ತು ತಳಮಟ್ಟದ ಕಾರ್ಯಕರ್ತರೊಂದಿಗೆ ನೇರ ಸಂಪರ್ಕವನ್ನು ಸ್ಥಾಪಿಸುವುದು ಇದರ ಉದ್ದೇಶ” ಎಂದು ಸಿಂಗ್ ಹೇಳಿದ್ದಾರೆ.
“ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪ್ರಾರಂಭಿಸಿದ ಯೋಜನೆಗಳು ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳುವುದು ಮತ್ತು ಈ ಯೋಜನೆಗಳು ಮತ್ತು ಪ್ರಯೋಜನಗಳ ಬಗ್ಗೆ ಪ್ರಚಾರ ಮಾಡಲು ಪಕ್ಷದ ಕಾರ್ಯಕರ್ತರಿಗೆ ಇನ್ನೂ ಹೆಚ್ಚಿನ ಮಹತ್ವದ ಪಾತ್ರ ವಹಿಸಲು ಈ ಪ್ರವಾಸವು ಉದ್ದೇಶಿಸಿದೆ “ಎಂದು ಅರುಣ್ ಸಿಂಗ್ ಹೇಳಿದ್ದಾರೆ.
ಪ್ರತಿಯೊಂದು ರಾಜ್ಯದ ಪ್ರಖ್ಯಾತ ಮತ್ತು ಪ್ರಮುಖ ನಾಗರಿಕರನ್ನು ನಡ್ಡಾ ಭೇಟಿಯಾಗಲಿದ್ದಾರೆ. ಅವರು ಸಣ್ಣ ರಾಜ್ಯಗಳಲ್ಲಿ ಮೂರು ದಿನ ಮತ್ತು ದೊಡ್ಡ ರಾಜ್ಯಗಳಿಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ ಎಂದಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.