ಬೆಂಗಳೂರು: ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ಜನ ಪ್ರತಿನಿಧಿಗಳು, ಸಂಘ ಸಂಸ್ಥೆಗಳು ಅಥವಾ ಇನ್ನಾರೇ ಆದರೂ ಅವುಗಳ ಪ್ರಗತಿ ಪರಿಶೀಲನೆಯನ್ನು, ಅಭಿವೃದ್ಧಿ ಕಾರ್ಯಗಳ ಪರಿಶೀಲನೆಯನ್ನು ಮೂರರಿಂದ ನಾಲ್ಕು ತಿಂಗಳಿಗೊಮ್ಮೆಯಾದರೂ ಮಾಡುತ್ತಿರಬೇಕು ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮೊದಲ ಬಾರಿಗೆ ಎಂಬಂತೆ ಚುನಾಯಿತ ಪ್ರತಿನಿಧಿಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳಲು ಮುಂದಾಗಿರುವುದು ಶ್ಲಾಘನೀಯ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶಿಕ್ಷಣ ತಜ್ಞರು, ಸಂಘ ಸಂಸ್ಥೆಗಳು, ಉಪ ಕುಲಪತಿಗಳು, ಧಾರ್ಮಿಕ ಕೇಂದ್ರಗಳ ಮುಖ್ಯಸ್ಥರು ಸೇರಿದಂತೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಿದರೆ ಈ ಕಾರ್ಯ ಯಶಸ್ಸು ಕಾಣುತ್ತದೆ. ಅದರೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಹಿನ್ನೆಲೆಯಲ್ಲಿಯೂ ಇದು ಹೆಚ್ಚು ಮಹತ್ವ ಪಡೆಯುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕೇವಲ ಶಾಲೆಗಳನ್ನು ದತ್ತು ಸ್ವೀಕಾರ ಮಾಡುವುದಲ್ಲ. ಬದಲಿಗೆ ಕಾಲ ಕಾಲಕ್ಕೆ ದತ್ತು ಸ್ವೀಕಾರ ಮಾಡಿಕೊಂಡ ಶಾಲೆಗಳ ಅಭಿವೃದ್ಧಿ ಪರಿಶೀಲನೆಯನ್ನು ಸಹ ಮಾಡಬೇಕು. ಶಿಕ್ಷಣ, ಶಿಕ್ಷಕರು, ವಿದ್ಯಾರ್ಥಿಗಳ ಬಗ್ಗೆಯೂ ಗಮನ ಹರಿಸುವುದು ಅತ್ಯಗತ್ಯ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಹೀಗಾದಲ್ಲಿ ಮಾತ್ರ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ. ಮಕ್ಕಳು ಸಹ ಶೈಕ್ಷಣಿಕ ಪ್ರಗತಿ ಸಾಧಿಸಲು ಸಾಧ್ಯವಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಶಾಲೆಗಳನ್ನು ದತ್ತು ಪಡೆದವರಿಗೆ ಸ್ವೀಕಾರ ಪತ್ರಗಳನ್ನು ವಿತರಣೆ ಮಾಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.