ಬೆಂಗಳೂರು: ಕೇಂದ್ರ ಸರ್ಕಾರ ಈಗಾಗಲೇ ಸೂಚನೆ ನೀಡಿರುವಂತೆ, ರಾಜ್ಯದಲ್ಲಿ ಕೊರೋನಾ ಲಸಿಕೆ ಪೂರೈಕೆ, ವಿತರಣೆ ಮತ್ತು ಆಡಳಿತ ನಿರ್ವಹಣೆಗೆ ಸಂಬಂಧಿಸಿದಂತೆ ಅಗತ್ಯ ತಯಾರಿಯನ್ನು ಮಾಡಲಾಗುತ್ತಿದೆ ಎಂದು ರಾಜ್ಯದ ಆರೋಗ್ಯ ಇಲಾಖೆ ತಿಳಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಸಂಪುಟ ಕಾರ್ಯದರ್ಶಿಗಳು, ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಕೇಂದ್ರಾಡಳಿತ ಪ್ರದೇಶದ ಮುಖ್ಯಸ್ಥರ ನಡುವೆ ಮಾತುಕತೆ ನಡೆದಿತ್ತು. ಅದಾದ ಬಳಿಕ ರಾಜ್ಯ ಸರ್ಕಾರ ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ, ರಾಜ್ಯ ಸ್ಟೀರಿಂಗ್ ಸಮಿತಿ ಮತ್ತು ರಾಜ್ಯ ಕಾರ್ಯಪಡೆ ಲಸಿಕೆ ಸಂಗ್ರಹ ಹಾಗೂ ಪೂರೈಕೆಗೆ ಸಂಬಂಧಿಸಿದಂತೆ ಸಭೆ ನಡೆಸಿದೆ.
ಸಭೆಯ ಬಳಿಕ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಇಲಾಖೆ ಪತ್ರ ಬರೆದಿದ್ದು, ಈ ಪತ್ರದಲ್ಲಿ ಬ್ಲಾಕ್ ಕಾರ್ಯಪಡೆಗಳ ಜೊತೆಗೆ ಸಭೆ ನಡೆಸುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿ ಈವರೆಗೆ 2,24,083 ಸರ್ಕಾರಿ ಆರೋಗ್ಯ ಸೇವಾ ಸಿಬ್ಬಂದಿ, 2,45,773 ಮಂದಿ ಖಾಸಗಿ ಆರೋಗ್ಯ ಸೇವಾ ಸಿಬ್ಬಂದಿಗಳು ಲಸಿಕೆಗಾಗಿ ನೋಂದಾಯಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರ ಲಸಿಕೆ ಪೂರೈಕೆ, ವಿತರಣೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ 30 ಸಾವಿರಕ್ಕೂ ಅಧಿಕ ಲಸಿಕಾ ಕೇಂದ್ರಗಳನ್ನು ಗುರುತು ಮಾಡಿದ್ದು, ಸರ್ಕಾರಿ ಸ್ಥಾಪನೆಯಲ್ಲಿ ಹತ್ತು ಸಾವಿರಕ್ಕೂ ಅಧಿಕ ಲಸಿಕಾ ಕೇಂದ್ರಗಳನ್ನು ಗುರುತಿಸಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ಖಾಸಗಿ ಸೌಲಭ್ಯಗಳನ್ನು ಬಳಸಿ ಲಸಿಕೆ ಹಾಕುತ್ತಿರುವವರನ್ನು ಗುರುತಿಸಲಾಗುತ್ತಿದೆ ಎಂದು ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರದ ಅಣತಿಯಂತೆ 68,317ಸರ್ಕಾರಿ, 35,310 ಖಾಸಗಿ ಸಂಭಾವ್ಯ ವ್ಯಾಕ್ಸಿನೇಟರ್ಗಳನ್ನು ಗುರುತಿಸಲಾಗಿದೆ. ಕೇಂದ್ರ ಸರ್ಕಾರ ಸರಬರಾಜು ಮಾಡುವ ಕೋಲ್ಡ್ ಚೈನ್ ಉಪಕರಣಗಳ ಸ್ಥಾಪನೆಗಾಗಿ ಸರಕುಗಳ ಪಟ್ಟಿಯನ್ನು ಹಂಚಿಕೊಳ್ಳಲಾಗಿದೆ. ಅವುಗಳ ಸ್ಥಾಪನೆಗೆ ಸಂಬಂಧಿಸಿದಂತೆಯೂ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಹಾಗೆಯೇ ರಾಜ್ಯದಲ್ಲಿ ಲಭ್ಯವಿರುವ ಕೋಲ್ಡ್ ಸ್ಟೋರೇಜ್ ಲಭ್ಯತೆಗೆ ಸಂಬಂಧಿಸಿದಂತೆಯೂ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.