ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಗೋ ಹತ್ಯೆ ನಿಷೇಧ ಕಾಯ್ದೆಯ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿದ್ದಾರೆ.
ರಾಜ್ಯದಲ್ಲಿ ಡಿ. 7 ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಮಂಡನೆ ಮಾಡಲು ಸರ್ಕಾರ ಚಿಂತನೆ ನಡೆಸಿದ್ದು, ಅದಕ್ಕನುಗುಣವಾಗಿ ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಈಗಾಗಲೇ ಉತ್ತರ ಪ್ರದೇಶದಲ್ಲಿ ಮತ್ತು ಗುಜರಾತ್ ನಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದ್ದು, ಇದರ ಬಗ್ಗೆ ಅಧ್ಯಯನ ನಡೆಸಲು ಸಾಧಕ-ಬಾಧಕಗಳ ಬಗ್ಗೆ ಪರಿಶೀಲನೆ ನಡೆಸಲು ಚೌಹಾಣ್ ತೆರಳಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅವರನ್ನು ನಿನ್ನೆ ಪ್ರಭು ಚೌಹಾಣ್ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಉತ್ತರ ಪ್ರದೇಶದಲ್ಲಿ ಗೋ ಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ಅತ್ಯಂತ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈ ಕಾಯ್ದೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಕರ್ನಾಟಕ ಸರ್ಕಾರ ಸಹ ಈ ರೀತಿಯ ಕಠಿಣ ಕಾನೂನು ಜಾರಿಗೆ ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಯೋಗಿ ಅವರೂ ಸಂತಸ ವ್ಯಕ್ತಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶದ ಅಧಿಕಾರಿಗಳ ಜೊತೆಗೂ ಚೌಹಾಣ್ ಗೋ ಹತ್ಯೆ ನಿಷೇಧ ಕಾಯ್ದೆ ಬಗ್ಗೆ ಮಾತುಕತೆ ನಡೆಸಿದರು. ಜೊತೆಗೆ ಗೋ ಶಾಲೆಗಳ ನಿರ್ವಹಣೆ, ಗೋವುಗಳ ಪಾಲನೆ, ಪೋಷಣೆಗೆ ಸಂಬಂಧಿಸಿದಂತೆಯೂ ಮಾಹಿತಿ ಪಡೆದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.