ಬೆಂಗಳೂರು: ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಚುನಾವಣಾ ಆಯೋಗ ಈಗಾಗಲೇ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಕಡೆಗಳಲ್ಲಿ ಸ್ಥಾನಗಳನ್ನು ಹರಾಜು ಹಾಕುವುದು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಚುನಾವಣಾ ನಿಯಮಗಳ ವಿರುದ್ಧ ನಡೆಯುವ ಸ್ಥಾನಗಳ ಆಯ್ಕೆಯನ್ನು ಅನೂರ್ಜಿತಗೊಳಿಸುವ ಎಚ್ಚರಿಕೆಯನ್ನು ಚುನಾವಣಾ ಆಯೋಗ ನೀಡಿದೆ.
ಗ್ರಾಮ ಪಂಚಾಯತ್ ಸ್ಥಾನಗಳನ್ನು ಹರಾಜು ಮಾಡುವುದು, ಹಣ ಪಡೆದು ಸ್ಥಾನ ನೀಡುವುದು ಕಂಡುಬಂದಲ್ಲಿ ಅಂತಹ ಸ್ಥಾನವನ್ನು ಚುನಾವಣಾ ಆಯೋಗ ರದ್ದು ಮಾಡಲಿದೆ. ಜೊತೆಗೆ ಅಂತಹ ಆಯ್ಕೆ ಅನೂರ್ಜಿತಗೊಳಿಸುವ ಅಧಿಕಾರ ಚುನಾವಣಾ ಆಯೋಗಕ್ಕಿದೆ ಎಂದು ತಿಳಿಸಿದೆ.
ಅದರೊಂದಿಗೆ ಇಂತಹ ಅನಧಿಕೃತ ವ್ಯವಹಾರಗಳನ್ನು ನಡೆಸುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದೆ. ಆದರೆ ನಿಯಮಬದ್ಧವಾಗಿ ಆದ ಅವಿರೋಧ ಆಯ್ಕೆಗಳು ಊರ್ಜಿತವಾಗುತ್ತದೆ ಎಂದು ಆಯೋಗ ಮಾಹಿತಿ ನೀಡಿದೆ. ಆದರೆ ಹರಾಜು ಪ್ರಕ್ರಿಯೆಯ ಮೂಲಕ ಸ್ಥಾನಗಳ ಆಯ್ಕೆ ಕಾನೂನು ಬಾಹಿರ ಎಂದು ಆಯೋಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜ್ಯದ ಯಾವುದೇ ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಚುನಾವಣಾ ಆಯೋಗ ಜಿಲ್ಲಾಧಿಕಾರಿಗಳಿಗೂ ಆದೇಶ ನೀಡಿದೆ. ಇಂತಹ ವಿಚಾರಗಳು ನಡೆದಲ್ಲಿ ಪ್ರಜಾ ಪ್ರತಿನಿಧಿ ಕಾಯ್ದೆ, ಗ್ರಾಮ ಸ್ವರಾಜ್ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆಯೂ ಸೂಚಿಸಲಾಗಿದೆ. ಜೊತೆಗೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ಕೈಗೊಳ್ಳುವಂತೆಯೂ ಚುನಾವಣಾ ಆಯೋಗ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.