ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ರಾಜ್ಯದ ಸರ್ಕಾರಿ ಪದವಿ, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಮಾರು 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ಲೆಟ್ ವಿತರಣೆ ಮಾಡಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ ಪ್ರದೀಪ್ ಮಾಹಿತಿ ನೀಡಿದ್ದಾರೆ.
ಕೊರೋನಾ ಕಾರಣದಿಂದ ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ, ಜೊತೆಗೆ ಕಲಿಕೆಗೆ ಪೂರಕವಾಗಿ ಅಗತ್ಯವಿರುವ ಗುಣಮಟ್ಟದ ಸೌಕರ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇಂತಹ ಒಂದು ಮಹತ್ವದ ಕೆಲಸಕ್ಕೆ ಮುಂದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಸ್ತುತ ಕೊರೋನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದೆ. ನೇರ ತರಗತಿಗಳು ಆರಂಭವಾಗುವ ವರೆಗೂ ಈ ತಾತ್ಕಾಲಿಕ ವ್ಯವಸ್ಥೆಯ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣದ ವ್ಯವಸ್ಥೆ ಕಲ್ಪಿಸಲಾಗಿದೆ. ಭಾರತದ ವಿದ್ಯಾರ್ಥಿಗಳು ಜಾಗತಿಕವಾಗಿ ಗುರುತಿಸಿಕೊಳ್ಳುವುದಕ್ಕೆ ಪೂರಕವಾಗುವಂತೆ ಬೇಕಾದ ಎಲ್ಲಾ ಅನುಕೂಲಗಳನ್ನು ಸರ್ಕಾರ ಒದಗಿಸಿಕೊಡುವುದಾಗಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಅವರು ಭರವಸೆ ನೀಡಿರುವುದನ್ನು ಸಹ ಅವರು ಈ ಸಂದರ್ಭದಲ್ಲಿ ಸ್ಮರಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ವ್ಯವಸ್ಥೆ ಒದಗಿಸಲು ಸುಮಾರು 155.4 ಕೋಟಿ ರೂ. ಹಣ ವೆಚ್ಚವಾಗಲಿದೆ. ಒಂದು ಟ್ಯಾಬ್ಲೆಟ್ಗೆ ಹತ್ತು ಸಾವಿರ ರೂ. ಗಳಂತೆ ಬೆಲೆ ನಿಗದಿ ಮಾಡಲಾಗಿದೆ. ಈ ಟ್ಯಾಬ್ಲೆಟ್ಗಳು ಕಲಿಕೆಗೆ ಪೂರಕವಾಗಿರದಿದ್ದಲ್ಲಿ ಆಧುನಿಕವಾಗಿ ಎಲ್ಲಾ ವ್ಯವಸ್ಥೆಗಳಿಗೂ ಒಗ್ಗಿಕೊಳ್ಳುವ ಟ್ಯಾಬ್ಲೆಟ್ಗಳ ಖರೀದಿಗೆ ಕಾಲೇಜುಗಳ ಮೂಲಕವೇ ಶಿಕ್ಷಣ ಸಾಲಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಪ್ರದೀಪ್ ಮಾಹಿತಿ ನೀಡಿದ್ದಾರೆ. ಈ ಟ್ಯಾಬ್ಲೆಟ್ಗಳನ್ನು 2020-21 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 430 ಸರ್ಕಾರಿ ಕಾಲೇಜುಗಳ ಪ್ರಥಮ ವರ್ಷದ ವಿದ್ಯಾರ್ಥಿಗಳು, 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಥಮ, ದ್ವಿತೀಯ, ತೃತೀಯ ವರ್ಷದ ವಿದ್ಯಾರ್ಥಿಗಳು, 87 ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.