ಬೆಂಗಳೂರು: ಶಾಲಾ ಕಾಲೇಜುಗಳಿಗೆ ತೆರಳುವ ಹಿನ್ನೆಲೆಯಲ್ಲಿ ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗಳನ್ನು ಗಮನಿಸಿಯೂ, ಬಸ್ಸು ನಿಲ್ಲಿಸಿ ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳದೇ ಹೋದ ಕೆಎಸ್ಆರ್ಟಿಸಿ ಬಸ್ಸಿನ ಚಾಲಕ ಮತ್ತು ನಿರ್ವಾಹಕನನ್ನು ಸಚಿವ ಸುರೇಶ್ ಕುಮಾರ್ ಅವರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
ಕೊರಟಗೆರೆ ಮಾರ್ಗವಾಗಿ ಮಧುಗಿರಿಗೆ ಸಚಿವರು ತೆರಳುವ ಸಂದರ್ಭದಲ್ಲಿ ಡಾಬಸ್ ಪೇಟೆಯ ಸಮೀಪದಲ್ಲಿ ವಿದ್ಯಾರ್ಥಿಗಳು ಬಸ್ಸು ನಿಲ್ಲಿಸುವಂತೆ ಕೈ ತೋರಿಸಿದರೂ, ಚಾಲಕ ಬಸ್ಸು ನಿಲ್ಲಿಸಿ ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡಿಲ್ಲ. ಇದನ್ನು ಗಮನಿಸಿದ ಸಚಿವರು ಕೂಡಲೇ ಬಸ್ಸನ್ನು ತಡೆದು, ಅದರ ಚಾಲಕ ಮತ್ತು ನಿರ್ವಾಹಕರನ್ನು ಈ ಸಂಬಂಧ ವಿಚಾರಿಸಿದ್ದಾರೆ. ಅಲ್ಲದೆ ಮುಂದೆ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸುವಂತೆಯೂ ಎಚ್ಚರಿಕೆ ನೀಡಿದ್ದಾರೆ.
ಕೊರಟಗೆರೆ ತಾಲೂಕಿನ ಕೊಳಾಲ ಹೋಬಳಿ, ನೀಲಗೊಂಡನಹಳ್ಳಿ ಗ್ರಾಮ ಪಂಚಾರತ್ ವ್ಯಾಪ್ತಿಯ ಐ ಕೆ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಸುರೇಶ್ ಕುಮಾರ್ ಅವರು ದೂರ ತರಂಗ ಶಿಕ್ಷಣ ಅಭಿಯಾನ ಸಮಾರಂಭದಲ್ಲಿ ಭಾಗವಹಿಸಲು ಮಧುಗಿರಿಗೆ ತೆರಳುತ್ತಿದ್ದರು. ವಿದ್ಯಾರ್ಥಿಗಳ ಬಸ್ಸಿನ ಸಮಸ್ಯೆಯನ್ನು ಕಣ್ಣಾರೆ ಕಂಡ ಸಚಿವರು ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಗ್ರಾಮೀಣ ಸಾರಿಗೆ ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಸಾರಿಗೆ ಸಚಿವರೊಂದಿಗೆ ಚರ್ಚಿಸಿ ಕ್ರಮ ತೆಗೆದುಕೊಳ್ಳುವುದಾಗಿಯೂ ಭರವಸೆಯನ್ನು ಇದೇ ಸಂದರ್ಭದಲ್ಲಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.