ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜೆ.ಪಿ ಬಡ್ಡಾ ಅವರು ಬುಧವಾರ ಬಿಜೆಪಿ ಕಾರ್ಯಕರ್ತರಿಗೆ ಪತ್ರವನ್ನು ಬರೆದಿದ್ದಾರೆ. ಹಲವಾರು ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಇತ್ತೀಚಿನ ವಿಜಯವನ್ನು ಶ್ಲಾಘಿಸಿರುವ ಅವರು, ಮುಂದಿನ ದಿನಗಳಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಐತಿಹಾಸಿಕ ಗೆಲುವಿನ ಗುರಿಯನ್ನು ಹೊಂದಿರುವುದಾಗಿ ಹೇಳಿದ್ದಾರೆ.
ಕಳೆದ ವರ್ಷ ಜನವರಿ 20 ರಂದು ಗೃಹ ಸಚಿವ ಅಮಿತ್ ಶಾ ಅವರಿಂದ ಅಧಿಕಾರ ವಹಿಸಿಕೊಂಡ ನಡ್ಡಾ, ಕೋವಿಡ್ -19 ಸಾಂಕ್ರಾಮಿಕ ಸಂದರ್ಭದಲ್ಲಿ ಪಕ್ಷ ನಡೆಸಿದ ಕಲ್ಯಾಣ ಕಾರ್ಯಗಳನ್ನು ಶ್ಲಾಘಿಸಿದರು.
ಪತ್ರದಲ್ಲಿ, ಅವರು ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಸರ್ಕಾರವನ್ನು ಸರ್ವಾಧಿಕಾರಿ ಎಂದು ದೂಷಿಸಿದರು ಮತ್ತು ಕಳೆದ ಕೆಲವು ವರ್ಷಗಳಲ್ಲಿ ಆ ರಾಜ್ಯದಲ್ಲಿ 300 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಹತರಾಗಿದ್ದಾರೆ ಎಂದು ಆರೋಪಿಸಿದರು. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ‘ಕಮಲ’ ರಾಜ್ಯದಲ್ಲಿ ಅರಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಮುಂದಿನ ಸುತ್ತಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು ಖಚಿತಪಡಿಸುವಂತೆ ಪಕ್ಷದ ಕಾರ್ಯಕರ್ತರಿಗೆ ಅವರು ಉತ್ಸಾಹ ತುಂಬಿದರು ಮತ್ತು ಪ್ರಧಾನಮಂತ್ರಿಯ ನೇತೃತ್ವದಲ್ಲಿ ರಾಷ್ಟ್ರದ ವಿಕಾಸ್ ಯಾತ್ರೆಯನ್ನು ಮುಂದುವರಿಸುವಲ್ಲಿ ಪ್ರಮುಖ ಪಾತ್ರ ವಹಿಸುವಂತೆ ಕರೆ ನೀಡಿದರು.
ಮೋದಿಯವರ ನಾಯಕತ್ವದಲ್ಲಿ, ಬಿಜೆಪಿ ಪ್ರತಿ ಚುನಾವಣೆಯಲ್ಲೂ ಜಯ ಸಾಧಿಸಿದೆ ಎಂದ ಅವರು, ಬಿಹಾರ ವಿಧಾನಸಭಾ ಚುನಾವಣೆ ಮತ್ತು ಮಧ್ಯಪ್ರದೇಶ, ಗುಜರಾತ್, ಉತ್ತರ ಪ್ರದೇಶ, ಮಣಿಪುರ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ನಡೆದ ರಾಜ್ಯ ಉಪಚುನಾವಣೆಗಳಲ್ಲಿ ಪಕ್ಷದ ಜಯವನ್ನು ಶ್ಲಾಘಿಸಿದರು. ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಅರುಣಾಚಲ ಪ್ರದೇಶ, ಮಹಾರಾಷ್ಟ್ರ, ಗೋವಾ, ಲಡಾಖ್ ಮತ್ತು ಹೈದರಾಬಾದ್ನಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನೂ ಅವರು ಉಲ್ಲೇಖಿಸಿದ್ದಾರೆ.
ಕೋವಿಡ್ ಸಂದರ್ಭದಲ್ಲಿ 30 ಕೋಟಿಗೂ ಹೆಚ್ಚು ಅಗತ್ಯವಿರುವವರಿಗೆ ಬಿಜೆಪಿ ಕಾರ್ಯಕರ್ತರು ಆಹಾರ ಮತ್ತು ಪಡಿತರವನ್ನು ಒದಗಿಸಿದ್ದಾರೆ ಎಂದ ಅವರು, ಪ್ರಧಾನಿ ಮೋದಿ ನೇತೃತ್ವದಲ್ಲಿ ಭಾರತವು ಸಾಂಕ್ರಾಮಿಕ ರೋಗವನ್ನು ಎದುರಿಸುವಲ್ಲಿ ಜಗತ್ತಿಗೆ ದಾರಿ ತೋರಿಸಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.