ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಬೀಸುವ ಮುನ್ಸೂಚನೆ ಇದ್ದು, ಈ ಹಿನ್ನೆಲೆಯಲ್ಲಿ ಜನರು ಮುಂಜಾಗ್ರತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದೆ. 2 ನೇ ಅಲೆಯ ಆತಂಕವಿದ್ದರೂ ಜನರು ಮಾತ್ರ ಇದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೊರೋನಾ ಮುಂಜಾಗ್ರತಾ ಕ್ರಮಗಳ ಪಾಲನೆಯನ್ನೂ ಮಾಡುತ್ತಿಲ್ಲ. ಹೀಗೇ ಮುಂದುವರಿದರೆ ಕೊರೋನಾ ಸೋಂಕು ಮತ್ತಷ್ಟು ವ್ಯಾಪಿಸುವ ಸಾಧ್ಯತೆ ಇದೆ. ಹಾಗಾಗಿ ಮತ್ತೆ ಲಾಕ್ಡೌನ್, ನೈಟ್ ಕರ್ಫ್ಯೂ ಹೇರುವ ಪರಿಸ್ಥಿತಿ ಎದುರಾಗಬಹುದು ಎಂದು ಸಚಿವರು ಹೇಳಿದ್ದಾರೆ. ಆದ್ದರಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆಯೂ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಅಧಿಕಾರಿಗಳು ಮತ್ತು ತಜ್ಞರ ಜೊತೆಗೆ ಕೊರೋನಾ ನಿರ್ವಹಣೆ, ನಿಯಂತ್ರಣದ ಬಗ್ಗೆ ಸಭೆ ನಡೆಸಿ, ಸಲಹೆ ಸೂಚನೆಗಳನ್ನು ಪಡೆದುಕೊಂಡಿದ್ದಾರೆ. ಅದರನ್ವಯ ರಾಜ್ಯದಲ್ಲಿ ಅನುಸರಿಸಲಾಗುವ ಕ್ರಮಗಳ ಬಗ್ಗೆಯೂ ಕಟ್ಟುನಿಟ್ಟಾಗಿ ಆದೇಶ ನೀಡಿದ್ದಾರೆ. ಆ ಆದೇಶಗಳನ್ನು ಪಾಲಿಸುವಂತೆಯೂ ಜನರಿಗೆ ತಿಳಿಸಿದ್ದಾರೆ. ಮುಂದಿನ ಒಂದು ವಾರಗಳ ತನಕ ಪರಿಸ್ಥಿತಿ ಅವಲೋಕನ ನಡೆಸಿ ಲಾಕ್ಡೌನ್ ಬಗ್ಗೆ ಯೋಚಿಸುವುದಾಗಿಯೂ ಅವರು ಹೇಳಿದ್ದಾರೆ ಎಂದು ಸುಧಾಕರ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜನತೆ ಮತ್ತಷ್ಟು ಎಚ್ಚರದಿಂದ ವರ್ತಿಸಿದಲ್ಲಿ ಉತ್ತಮ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕರು ಮಾಸ್ಕ್ ಧರಿಸದೇ ಇದ್ದಲ್ಲಿ ದಂಡದ ಮೊತ್ತವನ್ನು ಏರಿಕೆ ಮಾಡುವುದು ಅನಿವಾರ್ಯವಾಗುತ್ತದೆ. ಆದ್ದರಿಂದ ನಿರ್ಲಕ್ಷ್ಯ ತೋರದೆ ಜನರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದನ್ನು ಪಾಲಿಸಿದಲ್ಲಿ ಉತ್ತಮ. ಇದರಿಂದಾಗಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಣ ಮಾಡುವುದು ಸಾಧ್ಯ ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.