ಬೆಂಗಳೂರು: ರಾಜ್ಯದಲ್ಲಿನ ಐತಿಹಾಸಿಕ ಸ್ಮಾರಕಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಅಗತ್ಯ ಅನುದಾನ ಒದಗಿಸುತ್ತಿದೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಲ್ಹಾದ್ ಸಿಂಗ್ ಪಟೇಲ್ ಲೋಕಸಭೆಯಲ್ಲಿ ನಿನ್ನೆ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ನ ಪ್ರಜ್ವಲ್ ರೇವಣ್ಣ ಈ ವಿಷಯ ಪ್ರಸ್ತಾಪಿಸಿ, ಹಂಪಿ ಹೊರತುಪಡಿಸಿ, ಶ್ರವಣ ಬೆಳಗೊಳ, ಬೇಲೂರು, ಹಳೇಬೀಡು ಮತ್ತು ಇತರ ಪ್ರಮುಖ ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಅನುದಾನ ಒದಗಿಸುತ್ತಿಲ್ಲ ಎಂದರು.
ಬಿಜೆಪಿ ಸದಸ್ಯ ಡಾ. ಉಮೇಶ್ ಜಾಧವ್ ಸಹ ಇದೇ ವಿಷಯ ಪ್ರಸ್ತಾಪಿಸಿ, ತೆಲಂಗಾಣ ಗಡಿಯಲ್ಲಿರುವ ಕೊಂಚಾ ರಮ್ ಜಲಪಾತ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪ್ರಲ್ಹಾದ್ ಸಿಂಗ್ ಪಟೇಲ್, ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳ ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ಅಗತ್ಯ ಅನುದಾನವನ್ನು ಒದಗಿಸುತ್ತಿದೆ. ಕೆಲ ರಾಜ್ಯಗಳು ಇದನ್ನು ಪೂರ್ಣವಾಗಿ ಬಳಸಿಕೊಳ್ಳದಿರುವುದರಿಂದ, ಎರಡನೇ ಕಂತನ್ನು ಬಿಡುಗಡೆ ಮಾಡುವಲ್ಲಿ ವಿಳಂಬವಾಗುತ್ತಿದೆ. ಸರ್ಕಾರ, ಎಲ್ಲ ಐತಿಹಾಸಿಕ ಸ್ಮಾರಕಗಳ ಅಭಿವೃದ್ಧಿಗೆ ಬದ್ಧವಾಗಿದೆ ಎಂದರು.
ಬೀದರ್ ಸಂಸದ ಭಗವಂತ್ ಖೂಬಾ, ಆರ್ಥಿಕವಾಗಿ ಹಿಂದುಳಿದವರಿಗೆ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ನೀಡಬೇಕು. ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಕೇಂದ್ರಗಳನ್ನು ಬಲಪಡಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಕೌಶಲ್ಯ ಅಭಿವೃದ್ಧಿ ಸಚಿವ ಮಹೇಂದ್ರನಾಥ್ ಪಾಂಡೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ಕೋವಿಡ್ ನಂತರದ ದಿನಗಳಲ್ಲಿ ಕೌಶಲ್ಯ ತರಬೇತಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದರು.
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ, ಕೌಶಲ್ಯಾಭಿವೃದ್ಧಿಗೆ ಪ್ರಾಮುಖ್ಯತೆ ನೀಡಲಾಗಿದೆ . ಪ್ರಸಕ್ತ ಸಾಲಿನ ಬಜೆಟ್ನಲ್ಲೂ ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.