ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಸರ್ಕಾರಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ.
ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈಗಾಗಲೇ ಅನೇಕ ಕಠಿಣ ಮುಂಜಾಗ್ರತಾ ಕ್ರಮಗಳನ್ನು, ಮಾರ್ಗಸೂಚಿ ಹೊರಡಿಸಿದ್ದರೂ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವುದು ಸರ್ಕಾರವನ್ನು ಆತಂಕಕ್ಕೀಡು ಮಾಡಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಕ್ಯಾಬಿನೆಟ್ ಸದಸ್ಯರು, ಆರೋಗ್ಯ ಇಲಾಖೆಯ ಮುಖ್ಯಸ್ಥರು, ಬಿಬಿಎಂಪಿ ಮುಖ್ಯಸ್ಥರ ಜೊತೆಗೆ ಚರ್ಚೆ ನಡೆಸಿದ್ದಾರೆ.
ಸಭೆಯಲ್ಲಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಲಾಗಿದ್ದು, ಹಲವೊಂದು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಕೊರೋನಾ ಸಂದರ್ಭವನ್ನು ಸಮರ್ಥವಾಗಿ ನಿಭಾಯಿಸುವಂತೆ ಖಡಕ್ ಸೂಚನೆ ನೀಡಲಾಗಿದೆ. ಜೊತೆಗೆ ಬೆಂಗಳೂರು ನಗರದಲ್ಲಿನ ಕೊರೋನಾ ಪರಿಸ್ಥಿತಿಗಳ ಬಗ್ಗೆ ಕೋವಿಡ್ ಸಲಹಾ ಸಮಿತಿಯಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಹಾಗೆಯೇ ಕೊರೋನಾ ಲಾಕ್ಡೌನ್, ನೈಟ್ ಕರ್ಫ್ಯೂ ಬಗ್ಗೆಯೂ ಯಾವುದೇ ರೀತಿಯ ಹೇಳಿಕೆ ನೀಡದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಖ್ಯಮಂತ್ರಿ ಆದೇಶವಿಲ್ಲದೆ ಯಾವುದೇ ಸೂಚನೆ ನೀಡದಂತೆ ತಿಳಿಸಿದ್ದಾರೆ.
ಬೆಂಗಳೂರಿನ 8 ಬಿಬಿಎಂಪಿ ವಲಯಗಳಿಗೆ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಅವರಿಗೆ ಕೊರೋನಾ ನಿರ್ವಹಣೆ, ನಿಯಂತ್ರಣದ ಜವಾಬ್ದಾರಿ ವಹಿಸಲಾಗಿದೆ. ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಯಾರೇ ಮಾಸ್ಕ್ ಧರಿಸದಿದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ. ಕಲ್ಯಾಣ ಮಂಟಪಗಳಲ್ಲಿ ಸಹ ಕೊರೋನಾ ಮುನ್ನೆಚ್ಚರಿಕಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಅವರು ಸೂಚಿಸಿದ್ದಾರೆ. ನಿಯಮ ಉಲ್ಲಂಘಿಸಿದಲ್ಲಿ 6 ತಿಂಗಳು ಛತ್ರಗಳಿಗೆ ನಿರ್ಬಂಧ ಹೇರಲಾಗಿದೆ ಎಂದಿದ್ದಾರೆ. ಶಾಲಾ ಕಾಲೇಜುಗಳಿಗೆ ಯಾವುದೇ ರೀತಿಯ ನಿರ್ಬಂಧ ಹೇರಲಾಗಿಲ್ಲ ಎಂದು ಸಿಎಂ ಹೇಳಿದ್ದಾರೆ. ಹಾಗೆಯೇ 1-9 ನೇ ತರಗತಿಯವರೆಗೆ ಪರೀಕ್ಷೆ ನಡೆಸದೆಯೇ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಿಲ್ಲ ಎಂಬುದನ್ನೂ ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಯಾವುದೇ ಲಾಕ್ಡೌನ್ ಇಲ್ಲ. ಅದರ ಬದಲಾಗಿ ಮುಂದಿನ ಎರಡು ವಾರಗಳ ಕಾಲ ಟಫ್ ರೂಲ್ಸ್ ಜಾರಿ ಮಾಡುವುದಾಗಿ ಸರ್ಕಾರ ತಿಳಿಸಿದೆ. ಈಜುಕೊಳ ಸಂಪೂರ್ಣ ನಿಷೇಧ, ಜಾತ್ರೆ, ಮಹೋತ್ಸವಗಳಿಗೆ 2 ವಾರ ನಿಷೇಧ, ಮೇಳ, ಧಾರ್ಮಿಕ ಕಾರ್ಯಕ್ರಮಗಳಿಗೂ ತಡೆ, ಕ್ಲಬ್ಗಳಲ್ಲಿನ ಹಲವು ಕಾರ್ಯಕ್ರಮಗಳಿಗೆ ನಿರ್ಬಂಧ ಸೇರಿದಂತೆ ಇನ್ನೂ ಅನೇಕ ಕಠಿಣ ಕ್ರಮಗಳನ್ನು ಸೂಚಿಸಲಾಗಿದೆ. ಮುಂದಿನ ಎರಡು ವಾರಗಳ ಕಾಲ ಯಾವುದೇ ತರದ ರ್ಯಾಲಿಗಳಿಗೂ ಅವಕಾಶ ಇಲ್ಲ. ಇಂದಿನಿಂದ 16 ದಿನಗಳವರೆಗೆ ಪ್ರತಿಭಟನೆಗೂ ನಿಷೇಧ ಹೇರಲಾಗಿದೆ. ಅಪಾರ್ಟ್ಮೆಂಟ್ಗಳಲ್ಲಿಯೂ ಪಾರ್ಟಿ ನಡೆಸುವುದನ್ನು ನಿಷೇಧಿಸಿರುವುದಾಗಿ ಸಿಎಂ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ 4 ರಿಂದ 8 ವಾರಗಳ ಕಾಲ ಕಠಿಣ ಕ್ರಮಗಳನ್ನು ಅನುಸರಿಸಿದಲ್ಲಿ ಉತ್ತಮ ಎಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಸಚಿವರು, ಅಧಿಕಾರಿಗಳ ಜೊತೆಗೆ ಮುಖ್ಯಮಂತ್ರಿಗಳು ಸಭೆ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.