ಬೆಂಗಳೂರು: ಕೊರೋನಾ ಸಂಬಂಧ ಇಂದು ರಾಜ್ಯಪಾಲ ವಜೂಭಾಯ್ ವಾಲಾ ಅವರ ಅಧ್ಯಕ್ಷತೆಯಲ್ಲಿ ವರ್ಚುವಲ್ ಮೂಲಕ ಸರ್ವಪಕ್ಷಗಳ ಸಭೆ ನಡೆಯಿತು.
ಸಭೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವ ಡಾ ಕೆ ಸುಧಾಕರ್, ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ನಲಿನ್ ಕುಮಾರ್ ಕಟೀಲ್, ವಿಪಕ್ಷ ನಾಯಕರಾದ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ಕುಮಾರಸ್ವಾಮಿ, ರೇವಣ್ಣ ಸೇರಿದಂತೆ ಇತರ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ರಾಜ್ಯಪಾಲರು ಕೊರೋನಾ ಹಿನ್ನೆಲೆಯಲ್ಲಿ ನಿಯಂತ್ರಣಕ್ಕಾಗಿ ಈ ವರೆಗೆ ಸರ್ಕಾರ ತೆಗೆದುಕೊಂಡ ನಿಯಂತ್ರಣ ಕ್ರಮಗಳು, ಮುಂದೆ ತೆಗೆದುಕೊಳ್ಳಬಹುದಾದ ಕ್ರಮಗಳು, ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತೆಗೆದುಕೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲರು, ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯ ಇದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆಯೂ ಅವರು ತಿಳಿಸಿದ್ದಾರೆ. ಲಸಿಕೆ ಅಭಿಯಾನವನ್ನು ಸರಿಯಾಗಿ ನಡೆಸಿಕೊಂಡು ಹೋಗುವಂತೆಯೂ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.
ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಆಸ್ಪತ್ರೆಗಳನ್ನು ಹೆಚ್ಚಿಸುವುದು, ಅಸ್ಪತ್ರೆಗಳಲ್ಲಿ ಸಿಬ್ಬಂದಿಗಳ ಕೊರತೆಯಾಗದಂತೆ, ಆಕ್ಸಿಜನ್, ಔಷಧಗಳು, ವೆಂಟಿಲೇಟರ್, ಹಾಸಿಗೆಗಳ ಕೊರತೆ ಬಾಧಿಸದಂತೆ ಅಗತು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿಯೂ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಜೊತೆಗೆ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರಿಸಲು ಅನುಕೂಲವಾಗುವಂತೆ ರಸಗೊಬ್ಬರ, ಬಿತ್ತನೆ ಬೀಜಗಳನ್ನು ಒದಗಿಸುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ರಾಜ್ಯದಲ್ಲಿ 144 ಸೆಕ್ಷನ್ ಜಾರಿಗೊಳಿಸುವಂತೆಯೂ ಅವರು ಸರ್ಕಾರಕ್ಕೆ ಆಗ್ರಹಿಸಿದರು.
ರಾಜ್ಯದಲ್ಲಿ ನೈಟ್ ಕರ್ಫ್ಯೂ ಹೇರಿಕೆಯಿಂದ ಉಪಯೋಗವಿಲ್ಲ. ಬದಲಾಗಿ ಲಾಕ್ಡೌನ್ ಮಾಡಿದರೆ ಕೊರೋನಾ ನಿಯಂತ್ರಣ ಸಾಧ್ಯ ಎಂದು ಎಚ್ ಡಿ ಕುಮಾರಸ್ವಾಮಿ ಅವರು ಸಲಹೆ ನೀಡಿದ್ದಾರೆ. ಕೊರೋನಾ ತಡೆಯುವ ನಿಟ್ಟಿನಲ್ಲಿ ಲಾಕ್ಡೌನ್ ಹೆಚ್ಚು ಉಪಯುಕ್ತವಾಗಲಿದೆ. ಈಗ ಅದು ಅಗತ್ಯವಾಗಿದೆ ಎಂಬುದಾಗಿಯೂ ಎಚ್ಡಿಕೆ ಸೂಚಿಸಿದ್ದಾರೆ. 15 ದಿನಗಳ ವರೆಗೆ ಯಾವುದೇ ಮುಲಾಜಿಲ್ಲದೆ ಲಾಕ್ಡೌನ್ ಮಾಡುವಂತೆಯೂ ಅವರು ಸರ್ಕಾರಕ್ಕೆ ತಿಳಿಸಿದ್ದಾರೆ. ಜೊತೆಗೆ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಬಗೆಗೂ ಗಮನ ಹರಿಸುವಂತೆ ಸೂಚಿಸಿದ್ದಾರೆ.
ಇಂತಹ ಕಠಿಣ ಸಂದರ್ಭದಲ್ಲಿ ಜನರಿಗೆ ಧೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕಾಗಿದೆ. ಈ ಸಂಬಂಧ ಎಲ್ಲಾ ಜಿಲ್ಲೆಗಳನ್ನೂ ಗಮನದಲ್ಲಿಟ್ಟುಕೊಂಡು ಚರ್ಚೆ ನಡೆಸಬೇಕಾಗಿದೆ ಎಂದು ಪ್ರತಿಪಕ್ಷ ನಾಯಕರು ಸರ್ಕಾರಕ್ಕೆ ತಿಳಿಸಿದರು. ರಾಜ್ಯದಲ್ಲಿನ ಅಭಿವೃದ್ಧಿ ಕೆಲಸಗಳನ್ನು ಸ್ಥಗಿತಗೊಳಿಸಿ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅದ್ಯತೆ ನೀಡಿ ಎಂದು ಸರ್ಕಾರಕ್ಕೆ ಡಿ ಕೆ ಶಿವಕುಮಾರ್ ಸೂಚಿಸಿದರು. ಕೊರೋನಾ ನಿಯಂತ್ರಣ ವಿಚಾರದಲ್ಲಿ ಪ್ರತಿಪಕ್ಷಗಳು ಸರ್ಕಾರದ ಜೊತೆಗೆ ಕೈಜೋಡಿಸಲು ಸದಾ ಸಿದ್ಧ ಎಂದು ಡಿಕೆಶಿ ತಿಳಿಸಿದರು.
ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವೆಚ್ಚ ದುಬಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಹಾಗೆಯೇ ಖಾಸಗಿ ಆಸ್ಪತ್ರೆಗಳಿಗೂ ಈ ಸಂಬಂಧ ಎಚ್ಚರಿಕೆ ನೀಡುವಂತೆ ಸರ್ಕಾರಕ್ಕೆ ಸಲಹೆ ನೀಡಲಾಗಿದೆ. ರಾಜ್ಯದಲ್ಲಿ ಲಾಕ್ಡೌನ್ ಕ್ರಮ ಜಾರಿಗೆ ತಂದಲ್ಲಿ ಬಡಜನರು ತೊಂದರೆ ಅನುಭವಿಸಬೇಕಾಗುತ್ತದೆ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಯಿತು. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಒಂದು ಮಾರ್ಗಸೂಚಿ, ಸಂಪೂರ್ಣ ರಾಜ್ಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಾರ್ಗಸೂಚಿ ಹೊರಡಿಸುವಂತೆಯೂ ಸಲಹೆ ವ್ಯಕ್ತವಾಯಿತು. ಈಗ ಕೊರೋನಾ ಸಂಬಂಧ ಚಿಕಿತ್ಸೆಗೆ ಬಳಕೆ ಮಾಡುವ ಔಷಧಗಳನ್ನು ತಯಾರಿಸುವ ಕಂಪನಿಗಳ ಜೊತೆಗೆ ಇತರ ಕಂಪೆನಿಗಳಿಗೂ ಔಷಧ ತಯಾರಿಗೆ ಅನುಮತಿ ನೀಡುವಂತೆ ಸರ್ವಪಕ್ಷಗಳ ನಾಯಕರು ಸರ್ಕಾರಕ್ಕೆ ಸೂಚಿಸಿದರು. ಹಾಗೆಯೇ ಅಂತ್ಯಸಂಸ್ಕಾರಕ್ಕೂ ಸರಿಯಾದ ಕ್ರಮಗಳನ್ನು ಅನುಸರಿಸಲು ಸೂಚಿಸುವಂತೆ ಸಲಹೆಗೆಳು ಕೇಳಿಬಂದವು.
ಈ ಎಲ್ಲಾ ಸಲಹೆ – ಸೂಚನೆಗಳನ್ನು ಆಲಿಸಿದ ಸಿಎಂ ಯಡಿಯೂರಪ್ಪ, ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿವೆ. ಕೊರೋನಾ ಕಂಟ್ರೋಲ್ಗೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಹಲವು ಕಡೆ ನಾನ್ ಕೋವಿಡ್ ರೋಗಿಗಳ ಚಿಕಿತ್ಸೆಗೂ ವ್ಯವಸ್ಥೆ ಮಾಡಲಾಗಿದೆ. ರಾಜ್ಯದಲ್ಲಿ ಐಸಿಯು ಹೆಚ್ಚಿಸಲು ಕ್ರಮ, ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಗಳ ನೇಮಕ, ಆಕ್ಸಿಜನ್ ಕೊರತೆ ನೀಗಲು ಉತ್ಪಾದಕರ ಜೊತೆಗೆ ಸಭೆ ನಡೆಸುವುದಾಗಿಯೂ ಸಿಎಂ ಹೇಳಿದ್ದಾರೆ. ಅಂತ್ಯಸಂಸ್ಕಾರಕ್ಕೂ ಸರಿಯಾದ ಕ್ರಮ ಕೈಗೊಳ್ಳಲಾಗುತ್ತದೆ. ಇದಕ್ಕಾಗಿ ನಾಲ್ಕು ಸ್ಮಶಾನಗಳನ್ನು ಮೀಸಲಿಡಲಾಗಿದೆ ಎಂದು ಸಿ ಎಂ ತಿಳಿಸಿದ್ದಾರೆ. ಪ್ರತಿಪಕ್ಷ ನಾಯಕರ ಸಲಹೆಗಳನ್ನು ಪರಿಗಣಿಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಲಾಕ್ಡೌನ್ ಸಂಬಂಧ ವಿಚಾರ ಮಾಡುವುದಾಗಿಯೂ ಅವರು ತಿಳಿಸಿದ್ದಾರೆ.
ರಾಜ್ಯಪಾಲರು ಮಾತನಾಡಿ, ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಲಾಕ್ಡೌನ್ ಮಾಡುವುದಾದರೂ ಮಾಡಬಹುದು. ಜೊತೆಗೆ ಕಠಿಣ ಕ್ರಮ ಕೈಗೊಳ್ಳುವಂತೆಯೂ ಅವರು ಸೂಚಿಸಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವಂತೆಯೂ ಅವರು ಹೇಳಿದ್ದಾರೆ.
ಎಲ್ಲರೂ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಇನ್ನಿತರ ಎಲ್ಲಾ ಕೊರೋನಾ ನಿಯಂತ್ರಣ ನಿಯಮಗಳನ್ನು ಅನುಸರಿಸುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ. ತಜ್ಞರ ಅಭಿಪ್ರಾಯದಂತೆ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆಯೂ ಈ ಸಭೆಯಲ್ಲಿ ಸರ್ಕಾರಕ್ಕೆ ವಿಪಕ್ಷ ನಾಯಕರು ಸೂಚಿಸಿದ್ದಾರೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯನ್ನು ಮುಂದೂಡುವಂತೆಯೂ ಈ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಬೇರೆ ರಾಜ್ಯಗಳಿಂದ ರಾಜ್ಯಕ್ಕೆ ಬರುವ ವಿಮಾನ, ಜನರನ್ನು ನಿಯಂತ್ರಿಸುವಂತೆಯೂ ಸಭೆಯಲ್ಲಿ ಸೂಚನೆಗಳು ಕೇಳಿ ಬಂದಿವೆ.
ಕೊರೋನಾ ಸಂಕಷ್ಟದ ಈ ಅವಧಿಯನ್ನು ಹೆಲ್ತ್ ಎಮರ್ಜೆನ್ಸಿ ಎಂದು ಘೋಷಣೆ ಮಾಡಲು, ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡುವಂತೆಯೂ ಸಲಹೆಗಳು ಕೇಳಿ ಬಂದಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.