ಬೆಂಗಳೂರು: ನಗರದಲ್ಲಿ ಕೊರೋನಾ ಸೋಂಕಿತರ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಳ ಕೊರತೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ಕೇರ್ ಸೆಂಟರ್ಗಳಲ್ಲಿ ಹಾಸಿಗೆಗಳನ್ನು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.
ಸೋಂಕು ಹೆಚ್ಚಳವಾಗುತ್ತಿರುವುದರಿಂದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆ ಎದುರಾಗುತ್ತಿದೆ. ಈ ಹಿಂದೆಯೇ ಖಾಸಗಿ ಆಸ್ಪತ್ರೆಗಳಿಗೆ ಸೋಂಕಿತರ ಚಿಕಿತ್ಸೆಗೆ 50% ಹಾಸಿಗೆಗಳನ್ನು ಒದಗಿಸುವಂತೆಯೂ ಸೂಚನೆ ನೀwlಆಗಿದೆ. ಈ ಆದೇಶವನ್ನು ಪಾಲಿಸದೇ ಹೋದಲ್ಲಿ ಅಂತಹ ಅಸ್ಪತ್ರೆಗಳ ಒಪಿಡಿ ವಿಭಾಗವನ್ನೇ ಬಂದ್ ಮಾಡುವುದಾಗಿಯೂ ನೊಟೀಸ್ ನೀಡಿರುವುದಾಗಿ ಅವರು ಹೇಳಿದ್ದಾರೆ.
ಸೋಂಕಿತರ ಚಿಕಿತ್ಸೆಗೆ ಬೆಡ್ ದೊರೆಯದೇ ಇರುವುದು ಗಂಭೀರ ಸಮಸ್ಯೆಯೇ ಸರಿ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಿಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳನ್ನೂ ನೇಮಕ ಮಾಡಲಾಗಿದೆ. ಮಂಗಳವಾರದಿಂದಲೇ ಕೊರೋನಾ ಕೇರ್ ಸೆಂಟರ್ಗಳನ್ನು ಹೆಚ್ಚಳ ಮಾಡಲಾಗಿದೆ. ಸೋಂಕಿನ ಪ್ರಮಾಣ ಕಡಿಮೆ ಇರುವ ರೋಗಿಗಳಿಗೆ ಇಲ್ಲಿ ಚಿಕಿತ್ಸೆ ಒದಗಿಸಲಾಗುತ್ತದೆ. ಆ ಮೂಲಕ ಗಂಭೀರ ಪರಿಣಾಮಗಳನ್ನು ಎದುರಿಸುತ್ತಿರುವ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಐಸಿಯು, ಹಾಸಿಗೆ ಲಭ್ಯವಾಗುವುದಕ್ಕೆ ಸಹಕಾರಿಯಾಗಲಿದೆ ಎಂದು ಗುಪ್ತಾ ನುಡಿದಿದ್ದಾರೆ.
ಇನ್ನು ಅಕ್ಸಿಜನ್ ಸಮಸ್ಯೆ ನಿವಾರಣೆಗೆ ಕಂಪೆನಿಗಳಿಂದ ದೊಡ್ಡ ಮಟ್ಟದಲ್ಲಿ ಆಕ್ಸಿಜನ್ಗಳನ್ನು ಪಡೆಯುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತದೆ. ಈ ಸಂಬಂಧ ಸಮಿತಿಯನ್ನೂ ರಚನೆ ಮಾಡಲಾಗಿದೆ. ಸದ್ಯ ರಾಜ್ಯದಲ್ಲಿ 5 ಪಟ್ಟು ಆಕ್ಸಿಜನ್ ಪೂರೈಕೆಗೆ ಬೇಡಿಕೆ ಹೆಚ್ಚಾಗಿದೆ. ಇದು ಸವಾಲಿನ ಕೆಲಸವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಸದ್ಯದ ಮಟ್ಟಿಗೆ ಪಾಲಿಕೆ ವ್ಯಾಪ್ತಿಗೆ 300 ಟನ್ ಆಕ್ಸಿಜನ್ ಲಭ್ಯತೆ ಇದೆ. ಆದರೆ ಸರಬರಾಜಿನ ಸಮಸ್ಯೆ ಎದುರಾಗಿದೆ. ಆಕ್ಸಿಜನ್ ತಯಾರಿಕೆ ಮಾತ್ರವಲ್ಲದೆ ವಿತರಣೆಯಲ್ಲಿಯೂ ಸಮಸ್ಯೆಗಳಿದ್ದು, ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಹಾಸಿಗೆ ಮತ್ತು ವೆಂಟಿಲೇಟರ್ ಸಮಸ್ಯೆ ಬಗೆಹರಿಸುವುದಕ್ಕೂ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.