ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಿತಿ ಮೀರುತ್ತಿರುವ ಈ ಸಂದರ್ಭದಲ್ಲಿ ಸೋಂಕಿತರು ಆಕ್ಸಿಜನ್, ಹಾಸಿಗೆ, ರೆಮ್ಡಿಸ್ವಿರ್ಗಾಗಿ ಅಲೆದಾಡುವ ಸ್ಥಿತಿ ನಿರ್ಮಾಣವಾಗದಂತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ, ಅವುಗಳ ಲಭ್ಯತೆ ಹಾಗೂ ಪೂರೈಕೆಯನ್ನು ಹೆಚ್ಚಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಒಕಾ ನೇತೃತ್ವದ ವಿಭಾಗೀಯ ಪೀಠ ಕೊರೋನಾ ನಿಯಂತ್ರಣ, ಸೋಂಕಿತರು ಎದುರಿಸುತ್ತಿರುವ ಸಮಸ್ಯೆಗಳು ಸೇರಿದಂತೆ ಇನ್ನಿತರ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ಹಲವು ನಿರ್ದೇಶನಗಳನ್ನು ನೀಡಿತು.
ರಾಜ್ಯದಲ್ಲಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಸಿಗೆ ವ್ಯವಸ್ಥೆ ಕಲ್ಪಿಸಲು ಎಲ್ಲಾ ಆಸ್ಪತ್ರೆಗಳ ಮುಂಭಾಗದಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸಿ ಜನರಿಗೆ ಮಾಹಿತಿ ಒದಗಿಸುವ ಕೆಲಸವಾಗಬೇಕು. ಜೊತೆಗೆ ರೆಮ್ಡಿಸಿವಿರ್ ಔಷಧವನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡುವ ಬಗ್ಗೆ ಎಚ್ಚರ ವಹಿಸಬೇಕು. ಮಾರಾಟ ಹಾಗೂ ಪೂರೈಕೆಗೆ ಸಂಬಂಧಿಸಿದಂತೆ ಔಷಧ ಸಗಟು ವ್ಯಾಪಾರ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸುವಂತೆಯೂ ಅವರು ಹೇಳಿದ್ದಾರೆ. ಇದಕ್ಕಾಗಿ ಎನ್ಜಿಒಗಳನ್ನೊಳಗೊಂಡ ಸಮಿತಿಯನ್ನು ನೇಮಕ ಮಾಡುವಂತೆಯೂ ಕೋರ್ಟ್ ಸೂಚನೆ ನೀಡಿದೆ.
ತಾಂತ್ರಿಕ ಸಲಹಾ ಸಮಿತಿಯ ವರದಿಯಂತೆ ಮೇ ಮೊದಲ ಮತ್ತು ಎರಡನೇ ವಾರದಲ್ಲಿ ಸೋಂಕು ಉಲ್ಬಣವಾಗುವ ಎಲ್ಲಾ ಸಾಧ್ಯತೆಗಳೂ ಇದ್ದು, ಇದನ್ನು ನಿಯಂತ್ರಣ ಮಾಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಹಾಸಿಗೆ, ಆಕ್ಸಿಜನ್ ಲಭ್ಯತೆ ಬಗೆಗೂ ಮೌಲ್ಯಮಾಪನ ನಡೆಸಬೇಕು ಎಂದು ಪೀಠ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.