ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ರಾಜ್ಯದಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿದೆ. ಬಿಜೆಪಿ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಕರೋನ ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕೆ ನೆರವಾಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕರೆ ನೀಡಿದ್ದಾರೆ.
ಕರ್ನಾಟಕದ ಮನವಿಗೆ ಸ್ಪಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ರಾಜ್ಯಕ್ಕೆ ಅಗತ್ಯ ಹೆಚ್ಚುವರಿ ವೈದ್ಯಕೀಯ ಗುಣಮಟ್ಟದ ಆಮ್ಲಜನಕ ಮತ್ತು ಔಷಧಿಗಳನ್ನು ಬಿಡುಗಡೆಗೊಳಿಸುವುದಾಗಿ ತಿಳಿಸಿದ್ದಾರೆ. ಇದಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.
ಕರೋನ ನಿಯಂತ್ರಣಕ್ಕೆ ರಾಜ್ಯ ಸರಕಾರವು ಹೊಸ ಮಾರ್ಗದರ್ಶಿ ಸೂತ್ರಗಳನ್ನು ಈಗಾಗಲೇ ಪ್ರಕಟಿಸಿದೆ. ಅದನ್ನು ಪರಿಪಾಲಿಸುವ ಮೂಲಕ ಜನರು ರೋಗ ನಿಯಂತ್ರಣಕ್ಕೆ ಸಹಕರಿಸಬೇಕು. ಮಾಸ್ಕ್ ಧರಿಸುವುದು, ಅನಗತ್ಯವಾಗಿ ಓಡಾಟ ನಡೆಸದಿರುವುದು, ಲಸಿಕೆ ಹಾಕಿಸಿಕೊಳ್ಳುವುದು ಹಾಗೂ ಸ್ವಯಂ ಚಿಕಿತ್ಸೆಗೆ ಒಳಗಾಗದೆ ವೈದ್ಯಕೀಯ ತಜ್ಞರ ಸಲಹೆ ಪಡೆದು ಅದನ್ನು ಪಾಲಿಸುವುದು ಅನಿವಾರ್ಯ ಎಂದಿರುವ ಅವರು, ರಾಜ್ಯ ಸರಕಾರವು ಜನಪ್ರಿಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಕರೋನ ನಿಯಂತ್ರಣಕ್ಕಾಗಿ ವಿಶೇಷ ಪ್ರಯತ್ನ ಮುಂದುವರಿಸಿದೆ. ಇದು ಜನಾಂದೋಲನವಾಗಿ ಪರಿವರ್ತನೆಗೊಳ್ಳಲು ನಾಡಿನ ಜನತೆಯ ಸಹಕಾರ ಅತ್ಯಗತ್ಯ ಎಂದು ವಿವರಿಸಿದ್ದಾರೆ.
18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲು ನೋಂದಣಿ ಕಾರ್ಯ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡು ರೋಗ ದೂರ ಮಾಡಲು ಶ್ರಮಿಸಬೇಕು ಎಂದು ಅವರು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಲಸಿಕೆ ಹಾಕಿಸಿಕೊಂಡವರಲ್ಲಿ ರೋಗದ ಪ್ರಮಾಣ ಅತ್ಯಲ್ಪ ಎಂಬುದು ಈಗಾಗಲೇ ದೃಢಪಟ್ಟಿದೆ. ಈ ನಿಟ್ಟಿನಲ್ಲಿ ಜನರ ಸಹಭಾಗಿತ್ವವೂ ಅನಿವಾರ್ಯ ಎಂದು ಅವರು ತಿಳಿಸಿದ್ದಾರೆ.
ಪಕ್ಷದ ಜಿಲ್ಲಾ ಘಟಕಗಳು, ವಿವಿಧ ಮೋರ್ಚಾಗಳು ಸಹಾಯವಾಣಿ ಮತ್ತು ನಿಯಂತ್ರಣ ಕೊಠಡಿಗಳನ್ನು ತೆರೆದಿವೆ. ಸಹಾಯವಾಣಿ ಮತ್ತು ನೆರವಿನ ಕಾರ್ಯದಲ್ಲಿ ಪಕ್ಷದ ಜನಪ್ರತಿನಿಧಿಗಳೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜನರು ಅವುಗಳ ನೆರವನ್ನು ಪಡೆಯಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಕ್ಷದ ಪ್ರಮುಖ ಪದಾಧಿಕಾರಿಗಳ ಸಭೆಯನ್ನು ಈಗಾಗಲೇ ವೆಬ್ ಕಾನ್ಫರೆನ್ಸ್ ಮೂಲಕ ನಡೆಸಲಾಗಿದೆ. “ಕೋವಿಡ್ಮುಕ್ತ ಭಾರತ” ನಿರ್ಮಾಣದ ಪ್ರಧಾನಿಯವರ ಪ್ರಯತ್ನಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಈಗಾಗಲೇ ಸೂಚಿಸಿದ್ದು, ಅದಕ್ಕೆ ಪಕ್ಷದ ಪ್ರಮುಖರು, ಎಲ್ಲಾ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಆದ್ಯತೆಯ ನೆಲೆಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದು ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.