ಬೆಂಗಳೂರು: ಜಿಲ್ಲಾ ಮಟ್ಟದಲ್ಲಿ ಪ್ರವಾಹ ಪೀಡಿತ ಗ್ರಾಮಗಳನ್ನು ಗುರುತಿಸಿ, ಅಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸುವ ನಿಟ್ಟಿನಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಮಳೆಗಾಲ ಆರಂಭವಾಗಿದ್ದು, ಉತ್ತರ ಒಳನಾಡು, ಮಲೆನಾಡು, ಕರಾವಳಿ ಭಾಗಗಳಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕೆಗೆ ಸಂಬಂಧಿಸಿದಂತೆ ಸುಮಾರು 20 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ರಾಜ್ಯದಲ್ಲಿ 1710 ಪ್ರವಾಹ ಪೀಡಿತ ಗ್ರಾಮಗಳನ್ನು ಈಗಾಗಲೇ ಗುರುತು ಮಾಡಲಾಗಿದೆ. ಜೊತೆಗೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಕ್ರಿಯಾ ಯೋಜನೆ ಸಹ ಸಿದ್ಧಮಾಡಲಾಗಿದ್ದು, ಅದರ ಅನುಷ್ಠಾನಕ್ಕೆ ತರಬೇತಿ ನೀಡಲಾಗಿದೆ ಎಂದು ಹೇಳಿದ್ದಾರೆ. ಜನರು, ಪ್ರಾಣಿಗಳು ಮತ್ತು ಕೊರೋನಾ ಸೋಂಕಿನ ಬಗೆಗೂ ಎಚ್ಚರಿಕೆ ವಹಿಸುವಂತೆ ಸಿಎಂ ಈ ಸಭೆಯಲ್ಲಿ ತಿಳಿಸಿದ್ದಾರೆ.
ಹಾಗೆಯೇ ಜಿಲ್ಲೆ, ತಾಲೂಕು ಮಟ್ಟಗಳಲ್ಲಿ ಸಹಾಯವಾಣಿ ಸ್ಥಾಪನೆ, ದೂರವಾಣಿಗಳನ್ನು ಸುಸ್ಥಿತಿಯಲ್ಲಿ ಇರಿಸಿಕೊಳ್ಳುವುದು, ಪ್ರವಾಹ ನಿರ್ವಹಣೆಗೆ ಅಗತ್ಯ ಪರಿಕರಗಳನ್ನು ಹೊಂದಿಸಿಟ್ಟುಕೊಳ್ಳುವಂತೆಯೂ ಅವರು ಸೂಚಿಸಿದ್ದಾರೆ. ಹಾಗೆಯೇ ಕಾಳಜಿ ಕೇಂದ್ರಗಳು, ವೈದ್ಯಕೀಯ ಸೌಲಭ್ಯ ಸೇರಿದಂತೆ ಇನ್ನಿತರ ಅಗತ್ಯ ಮೂಲಸೌಕರ್ಯಗಳನ್ನು ಸಿದ್ಧ ಪಡಿಸಿಕೊಳ್ಳುವಂತೆಯೂ ಅವರು ಸೂಚಿಸಿದ್ದಾರೆ. ಜೊತೆಗೆ ಪ್ರವಾಹ ನಿರ್ವಹಣೆಗೆ ಸ್ಥಳೀಯ ಸಂಪನ್ಮೂಲಗಳ ಸದ್ಬಳಕೆ, ಸ್ವಯಂಸೇವಕರ ನೆರವು ಪಡೆಯುವಂತೆಯೂ ಅವರು ತಿಳಿಸಿದ್ದಾರೆ.
ವಿಪತ್ತು ನಿರ್ವಹಣೆಯನ್ನು ವಿವಿಧ ಹಂತಗಳಲ್ಲಿ ನಡೆಸಲು ವಿವಿಧ ಇಲಾಖೆಗಳ ಪಾತ್ರ, ಜವಾಬ್ದಾರಿ ಗುರುತಿಸಲಾಗಿದೆ. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಲ್ಲಿ ಪ್ರವಾಹ ಮುನ್ಸೂಚನೆ ಕೇಂದ್ರ ಸ್ಥಾಪಿಸಲಾಗಿದೆ. ಪ್ರವಾಹ ರಕ್ಷಣಾ ಕಾರ್ಯಾಚರಣೆಗೆ ರಾಯಚೂರು, ಕೊಡಗು, ದಕ್ಷಿಣ ಕನ್ನಡ, ಬೆಳಗಾವಿಗಳಲ್ಲಿ ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಯೋಜಿಸಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಬಳಿ ವಿಪತ್ತು ನಿರ್ವಹಣೆಗೆ ಸುಮಾರು1000 ಕೋಟಿ ರೂ. ಲಭ್ಯವಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.