ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಕರಣ ಹತೋಟಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎರಡನೇ ಹಂತದ ಅನ್ಲಾಕ್ ಘೋಷಣೆ ಮಾಡಿದೆ.
ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯದ 16 ಜಿಲ್ಲೆಗಳಲ್ಲಿ 5% ಗಿಂತ ಕಡಿಮೆ ಪ್ರಮಾಣದಲ್ಲಿ ಕೊರೋನಾ ಪಾಸಿಟಿವಿಟಿ ದರ ಇದ್ದು, ಈ ಹಿನ್ನೆಲೆಯಲ್ಲಿ ಆ ಜಿಲ್ಲೆಗಳಲ್ಲಿ ಕೆಲವು ನಿರ್ಬಂಧಗಳನ್ನು ಸಡಿಲ ಮಾಡಿರುವುದಾಗಿ ತಿಳಿಸಿದ್ದಾರೆ.
ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ. ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.
5% ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.
ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುತ್ತದೆ. ಎಸಿ ಚಾಲನೆಗೊಳಿಸದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ 50% ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಬಸ್ ಮತ್ತು ಮೆಟ್ರೋ 50% ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿರುವುದಾಗಿ ಅವರು ಹೇಳಿದ್ದಾರೆ.
ಹೊರಾಂಗಣ ಕ್ರೀಡೆಗಳಿಗೆ ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ. ಸರ್ಕಾರಿ/ಖಾಸಗಿ ಕಛೇರಿಗಳಿಗೆ 50% ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ಲಾಡ್ಜ್ ಗಳಲ್ಲಿ ಮತ್ತು ರೆಸಾರ್ಟ್ ಗಳಲ್ಲಿ 50% ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ. ಜಿಮ್ ಗಳಲ್ಲಿ 50% ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಲಾಗಿದೆ.
5% ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ 11 ಜೂ. 2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ. 10% ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.
ರಾಜ್ಯವ್ಯಾಪಿ ಅನ್ವಯವಾಗುವಂತೆ:
• ಪ್ರತಿ ದಿನ ನೈಟ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಇರುತ್ತದೆ.
• ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
• ಬಸ್ ಸಂಚಾರವು 50% ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.