ಬೆಂಗಳೂರು: ತುಳಿತಕ್ಕೆ ಒಳಗಾದವರಿಗೆ ಸ್ವಾಭಿಮಾನದ ಬದುಕು ಸಿಗಲಿದೆ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಆಗಲಿದೆ ಎಂಬ ವಿಶ್ವಾಸದೊಂದಿಗೆ ಕೊಳ್ಳೇಗಾಲದ ಶಾಸಕ ಮಹೇಶ್ ಅವರು ಬಿಜೆಪಿ ಸೇರಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿಯ ಆಶಯವನ್ನು ರಾಜ್ಯ ಸರಕಾರ ಈಡೇರಿಸಲಿದೆ. ಆ ಭಾಗದಲ್ಲಿ ಸಾಮರಸ್ಯ, ಸಹೋದರತ್ವ ಭಾವನೆ ಇರುವ ಸಾಮಾಜಿಕ ನೆಲೆಗಟ್ಟು ಸ್ಥಾಪನೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು ನಡೆದ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಭಾರತೀಯ ಜನತಾ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹೇಶ್ ಅವರು ಪಕ್ಷದ ಜೊತೆ ಮತ್ತು ಯಡಿಯೂರಪ್ಪ ಅವರ ಜೊತೆಗೆ ಹೊಂದಿರುವ ಸಂಬಂಧ ಮತ್ತು ಅನುಭವ ಇಂದು ಅವರ ಈ ನಿರ್ಣಯಕ್ಕೆ ಪೂರಕವಾಗಿದೆ. ಅವರನ್ನು ಪಕ್ಷಕ್ಕೆ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಉತ್ತಮ ಬೆಳವಣಿಗೆ ಎಂದು ಮುಖ್ಯಮಂತ್ರಿಯವರು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ಎನ್. ಮಹೇಶ್ ಅವರ ಸೇರ್ಪಡೆಯ ಶುಭ ಕ್ಷಣ ಈಗ ಬಂದಿದೆ. ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಬರುವುದರ ಮುನ್ಸೂಚನೆ ಇದಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ದಲಿತ ಸಮೂಹ ಬಿಜೆಪಿ ಪರವಾಗಿದೆ ಎಂಬ ಸಂದೇಶ ಪ್ರಧಾನಿ ಮೋದಿ ಅವರನ್ನು ತಲುಪಲು ನಮ್ಮ ಎಲ್ಲಾ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದು ಅವರು ತಿಳಿಸಿದರು. ಮಹೇಶ್ ಅವರ ಸೇರ್ಪಡೆಯಿಂದ ಪಕ್ಷಕ್ಕೆ ಹೆಚ್ಚಿನ ಬಲ ಬಂದಂತಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆಗೆ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಕನಿಷ್ಠ 135 ಸ್ಥಾನ ಗೆದ್ದು ಸ್ವಂತ ಬಲದಿಂದ ಅಧಿಕಾರಕ್ಕೆ ಬರಬೇಕೆಂಬ ಸಂಕಲ್ಪ ನಮ್ಮದಾಗಿದೆ. ಅದಕ್ಕಾಗಿ ಎಲ್ಲರೂ ಶ್ರಮಿಸಬೇಕು. ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡೋಣ ಎಂದು ತಿಳಿಸಿದರು.
ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ, ಬಿಎಸ್ಪಿಯನ್ನು ರಾಜ್ಯದಲ್ಲಿ ಕಟ್ಟಿ ಬೆಳೆಸಿದ ಶಾಸಕ ಎನ್. ಮಹೇಶ್ ಅವರು ಈಗ ಬಿಜೆಪಿ ಸೇರಿದ್ದಾರೆ. ಪ್ರಧಾನಿ ಮೋದಿಯವರ ಆಡಳಿತ, ರಾಜ್ಯದಲ್ಲಿ ಯಡಿಯೂರಪ್ಪ ಅವರ ಆಡಳಿತ, ಬಿಜೆಪಿ ಚಿಂತನೆ, ವಿಚಾರಧಾರೆಗಳನ್ನು ಮೆಚ್ಚಿ ಬಿಜೆಪಿಗೆ ಸೇರಿದ್ದು ಅವರಿಗೆ ಸ್ವಾಗತ ಎಂದರು. ಅವರ ಮೂಲಕ ಬಿಜೆಪಿಗೆ ಇನ್ನಷ್ಟು ಶಕ್ತಿ ತುಂಬುವ ಕೆಲಸ ಆಗಬೇಕು. ರಾಜ್ಯದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದೆ. ಬೇರೆ ಬೇರೆ ಪಕ್ಷಗಳ ಹತ್ತಾರು ಜನರು ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ. ಕೇಂದ್ರದಲ್ಲಿ ಮೋದಿಯವರ ಏಳು ವರ್ಷಗಳ ಅಭಿವೃದ್ಧಿ ಕಾರ್ಯ, ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ಜನಪರ ಆಡಳಿತವನ್ನು ಮೆಚ್ಚಿಕೊಂಡು ಅನೇಕರು ಬಿಜೆಪಿ ಸೇರಲು ಉತ್ಸುಕತೆ ತೋರಿದ್ದಾರೆ ಎಂದು ತಿಳಿಸಿದರು.
ಡಾ. ಬಾಬಾ ಸಾಹೇಬ್ ಅಂಬೇಡ್ಕರರಿಗೆ ನ್ಯಾಯ ನೀಡುವ ಕಾರ್ಯವನ್ನು ಬಿಜೆಪಿಯ ಕೇಂದ್ರ ಸರಕಾರ ಮಾಡಿದೆ. ಇದನ್ನು ಗಮನಿಸಿ ದಲಿತ ಸಮುದಾಯವು ಈಗ ಬಿಜೆಪಿಯತ್ತ ಸಹಜವಾಗಿಯೇ ಆಕರ್ಷಿತವಾಗುತ್ತಿದೆ ಎಂದು ಅವರು ವಿವರಿಸಿದರು.
ಶಾಸಕ ಎನ್. ಮಹೇಶ್ ಅವರು ಮಾತನಾಡಿ, ರಾಷ್ಟ್ರದ 130 ಕೋಟಿ ಜನರ ಅಭಿವೃದ್ಧಿಗಾಗಿ ಬಿಜೆಪಿ ಪ್ರಯತ್ನಿಸುತ್ತಿದೆ. ಆ ವಿಚಾರವನ್ನು ಗಮನಿಸಿ ನಾನು ಬಿಜೆಪಿ ಸೇರುತ್ತಿದ್ದೇನೆ. ಇದಕ್ಕೆ ಮತ್ತೊಂದು ಪ್ರೇರಕ ಶಕ್ತಿ ಡಾ. ಬಿ.ಆರ್. ಅಂಬೇಡ್ಕರ್ ಅವರು. ಬಿಜೆಪಿ ಈಗ ಪ್ರಬುದ್ಧ ಮನಸ್ಥಿತಿಯೊಂದಿಗೆ ರಾಷ್ಟ್ರವನ್ನು ಸಮಗ್ರ ಅಭಿವೃದ್ಧಿ ಕಡೆ ಒಯ್ಯುತ್ತಿದೆ. ಅದೂ ನನ್ನ ಬಿಜೆಪಿ ಸೇರ್ಪಡೆಗೆ ಕಾರಣ ಎಂದರು.
ಮಾಜಿ ಸಿಎಂ ಯಡಿಯೂರಪ್ಪ ಅವರ ನನಗೆ ನೈತಿಕ ಸ್ಥೈರ್ಯ ತುಂಬಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನನಗೆ ಹಲವಾರು ವರ್ಷಗಳಿಂದ ಪರಿಚಿತರು. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ಎಲ್ಲಾ ಮುಖಂಡರ ಜೊತೆ ಸೇರಿ ಪಕ್ಷದ ಸಂಘಟನೆಗೆ ಶ್ರಮಿಸಲಿದ್ದೇನೆ ಎಂದು ಅವರು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.