ಮಂಗಳೂರು: ಕೊರೋನಾ ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಣೆ ಮಾಡಲು ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಹೆಚ್ಚಿನ ಮೂಲಸೌಕರ್ಯಗಳನ್ನು ಒದಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಇಂದು ಮಂಗಳೂರಿನಲ್ಲಿ ಎಸ್ಡಿಆರ್ಎಫ್ ಅನುದಾನದಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲಿ ನಿರ್ಮಾಣಗೊಂಡ 22 ಹಾಸಿಗೆಗಳ ಮೆಡಿಸಿನ್ ವಿಭಾಗ ಮತ್ತು ಐಸಿಯು ಘಟಕ ಉದ್ಘಾಟಿಸಿ ಮಾತನಾಡಿ, ಪ್ರತಿ ಜಿಲ್ಲೆಯಲ್ಲಿಯೂ ಮಕ್ಕಳಿಗೆ ಪ್ರತ್ಯೇಕ ಐಸಿಯು ಘಟಕ ತೆರೆದು ಆರೋಗ್ಯ ತಪಾಸಣೆಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ.
ವೆನ್ಲಾಕ್ನಲ್ಲಿ ಆರೋಗ್ಯ ಇಲಾಖೆ, ಜಿಲ್ಲಾಡಳಿತಗಳ ಸಹಯೋಗದಲ್ಲಿ ವೆಂಟಿಲೇಟರ್, ಮಾನಿಟರ್ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒಳಗೊಂಡ ಸುಸಜ್ಜಿತ ಐಸಿಯು ಘಟಕ ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇದೇ ರೀತಿಯಲ್ಲಿ ಎಲ್ಲಾ ಜಿಲ್ಲೆಗಳಲ್ಲಿಯೂ ಆಧುನಿಕ ಐಸಿಯು ಘಟಕಗಳನ್ನು ಹೊಂದಲು ತೀರ್ಮಾನಿಸಲಾಗಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸುವುದಕ್ಕೂ ಆರೋಗ್ಯ ಇಲಾಖೆ ಸನ್ನದ್ಧವಾಗಿರುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಕೊರೋನಾ ನಿಯಂತ್ರಣ ಸಂಬಂಧ ಮಾತನಾಡಿದ ಅವರು, ಗಡಿಭಾಗಗಳ ಜಿಲ್ಲೆಗೆ ಹೆಚ್ಚಿನ ಲಸಿಕೆ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮುಂದಿನ ವಾರ ನವದೆಹಲಿಗೆ ತೆರಳಿ ಕೇಂದ್ರ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಹೆಚ್ಚುವರಿ ಲಸಿಕೆ ಒದಗಿಸುವಂತೆ ಮನವಿ ಮಾಡಲಾಗುತ್ತದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.