ಬೆಂಗಳೂರು: ಮುಂದಿನ ಒಂದು ವಾರದಲ್ಲಿ ರಾಜ್ಯದ ಒಂದೂವರೆ ಕೋಟಿಗೂ ಅಧಿಕ ಮಕ್ಕಳ ರೋಗ ನಿರೋಧಕ ಶಕ್ತಿ ಪತ್ತೆ ಮಾಡುವ ಉದ್ದೇಶದಿಂದ ‘ಆರೋಗ್ಯ ನಂದನ’ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ರೂಪುರೇಷೆ ಸಿದ್ಧವಾಗಿದೆ. ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಮಯ ನೀಗಿದ ತಕ್ಷಣ ಚಾಲನೆ ನೀಡುವುದಾಗಿ ಅವರು ಹೇಳಿದ್ದಾರೆ. ಈ ಹಿಂದೆ ಹಾವೇರಿಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇದೀಗ ಇದನ್ನು ಆರೋಗ್ಯ ನಂದನ ಎಂಬ ಹೆಸರಿನಲ್ಲಿ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಈ ಕಾರ್ಯಕ್ರಮದಡಿ ರೋಗನಿರೋಧಕ ಶಕ್ತಿ ಕಡಿಮೆ ಇರುವ, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಈ ಕಾರ್ಯಕ್ರಮ ಅನುಷ್ಠಾನ ಮಾಡುವುದಾಗಿ ಸಚಿವರು ತಿಳಿಸಿದ್ದಾರೆ.
ಹಾಗೆಯೇ ದೇಶದಲ್ಲೇ ಮೊದಲ ಪ್ರಯತ್ನ ಎಂಬಂತೆ ಕೊರೋನಾದಿಂದ ಗುಣಮುಖರಾದ ರಾಜ್ಯದ 28 ಲಕ್ಷ ಜನರನ್ನು ಕ್ಷಯರೋಗ ತಪಾಸಣೆಗೆ ಒಳಪಡಿಸಲು ವಿಶೇಷ ಅಭಿಯಾನ ಆರಂಭ ಮಾಡಿರುವುದಾಗಿ ಅವರು ತಿಳಿಸಿದ್ದಾರೆ. ಈ ತಿಂಗಳ 31 ರ ವರೆಗೆ ಈ ಅಭಿಯಾನ ನಡೆಯಲಿದೆ ಎಂದು ಅವರು ಹೇಳಿದ್ದಾರೆ. 2020 – 25 ರ ಒಳಗಾಗಿ ದೇಶವನ್ನು ಕ್ಷಯ ರೋಗ ಮುಕ್ತವನ್ನಾಗಿಸುವ ನಿಟ್ಟಿನಲ್ಲಿ ಇದು ಪೂರಕವಾಗಿರಲಿದೆ ಎಂದು ಅವರು ಹೇಳಿದ್ದಾರೆ.
ಹಾಗೆಯೇ ಡಿಸೆಂಬರ್ ಒಳಗಾಗಿ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಒದಗಿಸರು ಸರ್ಕಾರ ಪೂರಕ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.