ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ವಿಜಯಯಾತ್ರೆಯನ್ನು ಬಿಜೆಪಿ ಮುಂದುವರಿಸಿ 2023 ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೇರಲಿದೆ. 150 ಶಾಸಕರ ಸ್ಥಾನ ಗೆದ್ದು ಮತ್ತೆ ರಾಜ್ಯದಲ್ಲಿ ಸರಕಾರ ರಚಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಹಾನಗಲ್ ವಿಧಾನಸಭೆ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಶಿವರಾಜ ಸಜ್ಜನರ್, ಸಿಂದಗಿ ಕ್ಷೇತ್ರದ ಅಭ್ಯರ್ಥಿ ರಮೇಶ ಭೂಸನೂರ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಡೆದ ರೋಡ್ ಷೋದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿದರು.
ಕ್ಷೇತ್ರದ ಅಭಿವೃದ್ಧಿಯ ಹರಿಕಾರರಾದ ಸಿ.ಎಂ. ಉದಾಸಿ ಅವರ ನೆನಪಿನ ಜೊತೆ ಮತ್ತು ಅವರ ಅಭಿವೃದ್ಧಿಯ ಕಾರ್ಯಗಳನ್ನು ಮುಂದುವರಿಸುವ ದೃಷ್ಟಿಯಿಂದ ಶಿವರಾಜ ಸಜ್ಜನರ್ ಅವರನ್ನು ಬಿಜೆಪಿ ಕಣಕ್ಕೆ ಇಳಿಸಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಕಮಲದ ಚಿಹ್ನೆಯನ್ನು ಜನರು ಅರಳಿಸಬೇಕು ಎಂದು ಅವರು ಮನವಿ ಮಾಡಿದರು.
ಸಂಸದ ಶಿವಕುಮಾರ್ ಉದಾಸಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುತ್ತಿದೆ ಎಂದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಜ್ಜನಿಕೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದ ಸಮಗ್ರ ಅಭಿವೃದ್ಧಿ ಕಾರ್ಯವನ್ನು ಮಾಡುತ್ತಿದ್ದಾರೆ. ಆದರ್ಶದ ರಾಜಕಾರಣ ಮಾಡುತ್ತಿರುವ ಬೊಮ್ಮಾಯಿ ಅವರ ಕೈಯನ್ನು ಬಲಪಡಿಸಲು ಈ ಕ್ಷೇತ್ರದಲ್ಲಿ ಶಿವರಾಜ ಅವರನ್ನು ಗೆಲ್ಲಿಸಿ ಎಂದು ವಿನಂತಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರು ಮಾತನಾಡಿ, ಸಜ್ಜನರ್ ಅವರನ್ನು ಗೆಲ್ಲಿಸುವ ಮೂಲಕ ಹಾಗೂ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಸಿ.ಎಂ. ಉದಾಸಿ ಅವರ ಆತ್ಮಕ್ಕೆ ಶಾಂತಿ ತರುವ ಕೆಲಸವನ್ನು ನಾವು ಮಾಡಲಿದ್ದೇವೆ ಎಂದರು.
ಸಿಂದಗಿ ವಿಧಾನಸಭೆ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ರಮೇಶ ಭೂಸನೂರು ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಚಿವ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಕೆ.ಎಸ್.ಈಶ್ಚರಪ್ಪ, ವಿ. ಸೋಮಣ್ಣ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ಬಸವನಗೌಡ ಪಾಟೀಲ್ ಯತ್ನಾಳ, ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಮತ್ತು ಮುಖಂಡರು ಉಪಸ್ಥಿತರಿದ್ದರು.
.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.