
ಶ್ರೀನಗರ: ಭೂಲೋಕದ ಸ್ವರ್ಗ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮ ಮತ್ತೆ ಗರಿಗೆದರುತ್ತಿದೆ. ನವೆಂಬರ್ನಲ್ಲಿ ಸುಮಾರು 1.27 ಲಕ್ಷ ಪ್ರವಾಸಿಗರು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದು ಕಳೆದ ಏಳು ವರ್ಷಗಳಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯ ಪ್ರವಾಸಿಗರ ಆಗಮನವಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಕಾಶ್ಮೀರದ ಪ್ರವಾಸೋದ್ಯಮ ನಿರ್ದೇಶಕ ಡಾ.ಗುಲಾಮ್ ನಬಿ ಇಟೂ ಅವರು, ನವೆಂಬರ್ನಲ್ಲಿ ಸುಮಾರು 1.27 ಲಕ್ಷ ಪ್ರವಾಸಿಗರು ಮತ್ತು ಅಕ್ಟೋಬರ್ನಲ್ಲಿ 97 ಸಾವಿರ ಪ್ರವಾಸಿಗರು ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ. ಪ್ರವಾಸೋದ್ಯಮ ಪ್ರಚಾರ ಮತ್ತು ಕಾಶ್ಮೀರದಲ್ಲಿ ನಡೆಯುವ ಸಾಂಪ್ರದಾಯಿಕ ಉತ್ಸವಗಳು ಇಷ್ಟೊಂದು ಪ್ರವಾಸಿಗರು ಆಗಮಿಸಲು ಕಾರಣವಾಗಿದೆ ಎಂದಿದ್ದಾರೆ
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶೇಷವಾಗಿ ಕಾಶ್ಮೀರಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸಿದ್ದಾರೆ. ಸರ್ಕಾರದ ಪ್ರಯತ್ನಗಳು ಫಲ ನೀಡುತ್ತಿವೆ ಮತ್ತು ಜಮ್ಮು ಕಾಶ್ಮೀರ ಸಹಜ ಸ್ಥಿತಿಗೆ ಮರಳುತ್ತಿದೆ. ಪ್ರವಾಸೋದ್ಯಮಕ್ಕೆ ಇಂಥ ಹೆಚ್ಚಿನ ಪ್ರಯತ್ನಗಳ ಅಗತ್ಯವಿದೆ ಎಂದು ಜಮ್ಮು ವಿಶ್ವವಿದ್ಯಾಲಯದ ಹಾಸ್ಪಿಟಾಲಿಟಿ ಮತ್ತು ಮ್ಯಾನೇಜ್ಮೆಂಟ್ ಸ್ಕೂಲ್ನ ಪ್ರಾಧ್ಯಾಪಕ ಪರೀಕ್ಷಿತ್ ಮನ್ಹಾಸ್ ಪ್ರತಿಕ್ರಿಯಿಸಿದ್ದಾರೆ.
ಡಿಸೆಂಬರ್ನಿಂದ ಫೆಬ್ರವರಿವರೆಗೆ ಕಾಶ್ಮೀರ ಸೇರಿದಂತೆ ವಾಯವ್ಯ ಭಾರತದ ಹಲವು ಭಾಗಗಳು, ದಕ್ಷಿಣ ಮತ್ತು ಈಶಾನ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಮತ್ತು ಹಿಮಾಲಯದ ತಪ್ಪಲಿನ ಕೆಲವು ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನವಿರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಹೀಗಾಗಿ ಪ್ರವಾಸಿಗರ ಸಂಖ್ಯೆಯಲ್ಲಿ ತುಸು ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಊಹಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


