ನವದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 74ನೇ ಪುಣ್ಯಸ್ಮರಣೆಯ ಅಂಗವಾಗಿ ರಾಷ್ಟ್ರವು ಅವರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದೆ. ಈ ದಿನವನ್ನು ಹುತಾತ್ಮರ ದಿನವನ್ನಾಗಿಯೂ ಆಚರಿಸಲಾಗುತ್ತದೆ. 1948ರಲ್ಲಿ ಇದೇ ದಿನ ಮಹಾತ್ಮ ಗಾಂಧಿ ಹತ್ಯೆಯಾಯಿತು.
ರಾಷ್ಟ್ರ ರಾಜಧಾನಿಯ ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧಿಯವರ ಸಮಾಧಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪುಷ್ಪಾರ್ಚನೆ ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು.
ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಇಂದು ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಶಾಂತಿ ಮತ್ತು ಅಹಿಂಸೆಯ ಪ್ರತಿರೂಪ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮತ್ತು ಭಾರತದ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಆರ್ ಹರಿಕುಮಾರ್ ಮತ್ತು ವಾಯುಸೇನೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ, ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ರಾಜ್ಘಾಟ್ಗೆ ತೆರಳಿ ಗೌರವ ಸಲ್ಲಿಸಿದ್ದಾರೆ.
ಗಾಂಧೀಜಿಯವರ ಉದಾತ್ತ ಆದರ್ಶಗಳನ್ನು ಇನ್ನಷ್ಟು ಜನಪ್ರಿಯಗೊಳಿಸುವುದು ನಮ್ಮ ಸಾಮೂಹಿಕ ಪ್ರಯತ್ನವಾಗಿದೆ ಎಂದು ಪ್ರಧಾನಿ ಟ್ವೀಟ್ನಲ್ಲಿ ತಿಳಿಸಿದ್ದಾರೆ. ಇಂದು ಹುತಾತ್ಮರ ದಿನದಂದು ನಮ್ಮ ರಾಷ್ಟ್ರವನ್ನು ಧೈರ್ಯದಿಂದ ಕಾಪಾಡಿದ ಮಹಾನ್ ವ್ಯಕ್ತಿಗೆ ನಮನ ಸಲ್ಲಿಸುತ್ತಿದ್ದೇನೆ . ಅವರ ಸೇವೆ ಮತ್ತು ಧೈರ್ಯ ಸದಾ ಸ್ಮರಣೀಯ ಎಂದಿದ್ದಾರೆ.
ಈ ಸಂದರ್ಭದಲ್ಲಿ ಸರ್ವಧರ್ಮ ಪ್ರಾರ್ಥನಾ ಸಭೆಯನ್ನು ಏರ್ಪಡಿಸಲಾಗಿತ್ತು. ರಾಷ್ಟ್ರವು ಹುತಾತ್ಮರ ದಿನದಂದು ಬೆಳಿಗ್ಗೆ 11 ಗಂಟೆಗೆ ಎರಡು ನಿಮಿಷಗಳ ಮೌನವನ್ನು ಆಚರಿಸಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.