ವಿಧಾನಸಭೆ: ಮಂಡ್ಯ ಜಿಲ್ಲೆಯಲ್ಲಿರುವ ಐತಿಹಾಸಿಕ ಪ್ರಸಿದ್ಧ ಶ್ರೀರಂಗಪಟ್ಟಣದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆ ವತಿಯಿಂದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ರೂ.26.80 ಕೋಟಿ ವೆಚ್ಚದಲ್ಲಿ ಮೂರು ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಹೇಳಿದ್ದಾರೆ.
ಗುರುವಾರ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರವಾಸೋದ್ಯಮ ಇಲಾಖೆಯಿಂದ ಗುರುತಿಸಿರುವ ಆದ್ಯತಾ ಪ್ರವಾಸಿ ತಾಣಗಳಲ್ಲಿ ಶ್ರೀರಂಗಪಟ್ಟಣವು ಸೇರಿದೆ. ಕೋಟೆ ಗೋಡೆಯ ಸುತ್ತಲೂ ಇರುವ ಕಂದಕವನ್ನು ಶುಚಿಗೊಳಿಸಿ ಪ್ರವಾಸಿಗರ ದೋಣಿ ವಿಹಾರ ಹಾಗೂ ಇನ್ನಿತರೆ ಕಾರ್ಯಕ್ಕೆ ಐದು ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ಇನ್ನು ಶ್ರೀರಂಗಪಟ್ಟಣ ಮತ್ತು ಸುತ್ತಮುತ್ತ ಪ್ರವಾಸೋದ್ಯಮ ಬೆಳವಣಿಗೆ ದೃಷ್ಟಿಯಿಂದ ರೂ.4.91 ಕೋಟಿ ಅಂದಾಜು ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ನೀಡಿರುವ ಅನುಮೋದನೆಯನ್ನು ಭಾಗಶಃ ಮಾರ್ಪಡಿಸಿ, ವಿವಿಧ 13 ಕಾಮಗಾರಿಗಳನ್ನು ರೂ.3.80 ಕೋಟಿ ಅಂದಾಜು ವೆಚ್ಚದ ಕಾಮಗಾರಿಗೆ ಆಡಳಿತಾತ್ಮ ಅನುಮೋದನೆ ನೀಡಲಾಗಿದೆ ಎಂದು ಸದನಕ್ಕೆ ತಿಳಿಸಿದರು.
ಈ ವೇಳೆ ರವೀಂದ್ರ ಶ್ರೀಕಂಠಯ್ಯ ಅವರು, ಈ ಹಿಂದಿನ ಸರ್ಕಾರದಲ್ಲಿ ದೋಣಿ ವಿಹಾರ ಇನ್ನಿತರ ಕಾಮಗಾರಿಗಳಿಗೆ ಹಣ ಮಂಜೂರಾಗಿತ್ತು. ಆದರೆ ಇದೀಗ ಬೇರೆ ಕಾಮಗಾರಿಗಳನ್ನು ಕೈಗೊಳ್ಳಲು ಪ್ರವಾಸೋದ್ಯಮ ಇಲಾಖೆಯಿಂದ ಮಾರ್ಪಾಡು ಮಾಡಲಾಗಿದ್ದು, ಈ ವಿಚಾರ ಸ್ಥಳೀಯ ಶಾಸಕನಾದ ನನ್ನ ಗಮನಕ್ಕೆ ಬಂದಿಲ್ಲ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಆನಂದ್ ಸಿಂಗ್ ಅವರು, ಶ್ರೀರಂಗಪಟ್ಟಣದಲ್ಲಿನ ಕಾಮಗಾರಿ ಬಗ್ಗೆ ಸ್ಥಳೀಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ಸಲಹೆ ಪಡೆದು ಕ್ರಮಕೈಗೊಳ್ಳಲಾಗುವುದು ಎಂದರು.
ಇನ್ನು ಶ್ರೀರಂಗಪಟ್ಟಣದ ಸಮಗ್ರ ಅಭಿವೃದ್ಧಿ ಯೋಜನೆಯಡಿ ಸ್ನಾನಘಟ್ಟ ಅಭಿವೃದ್ಧಿ ಮತ್ತು ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿ ಸೇರುತ್ತದೆಯೇ ಎಂಬುದನ್ನು ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸುವಂತೆ ಪುರಾತತ್ವ ಇಲಾಖೆಯ ಆಯುಕ್ತರಿಗೆ ಸೂಚಿಸಲಾಗಿತ್ತು. ಆಯುಕ್ತರು ವರದಿ ನೀಡಿದ್ದು, ಸದರಿ ವರದಿಯನ್ನು ಪರಿಶೀಲಿಸಿ, ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.