News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಭಿಕ್ಷಾಟನೆ ನಿಷೇಧವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಸಜ್ಜಾದ ಸರ್ಕಾರ

ಬೆಂಗಳೂರು: ಭಿಕ್ಷಾಟನೆಯನ್ನು ಕೊನೆಗಾಣಿಸಲು ಸರ್ಕಾರವು ಕರ್ನಾಟಕ ಭಿಕ್ಷಾಟನೆ ನಿಷೇಧ ಕಾಯ್ದೆ 1975 ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕರ್ನಾಟಕದಲ್ಲಿ ಭಿಕ್ಷಾಟನೆ ನಿರ್ಮೂಲನೆ ಕುರಿತು ಗೃಹ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಮಿಕ ಇಲಾಖೆ ಸಚಿವರು, ಕಾನೂನು ಸೇವಾ ಪ್ರಾಧಿಕಾರ, ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಹಿರಿಯ ಅಧಿಕಾರಿಗಳೊಂದಿಗೆ ಸೋಮವಾರ ವಿಕಾಸಸೌಧದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವರು ಮಾತನಾಡಿದರು.

ಭಿಕ್ಷಾಟನೆಯ ಹೆಸರಿನಲ್ಲಿ ನಡೆಯುತ್ತಿರುವ ನಾನಾ ಅಕ್ರಮಗಳನ್ನು ಇಲಾಖೆ ಗುರುತಿಸಿದೆ. ಮಕ್ಕಳಿಗೆ ಅಕ್ರಮವಾಗಿ ಮಾದಕ ದ್ರವ್ಯ ನೀಡಿ ಭಿಕ್ಷಾಟನೆ ಮಾಡಿಸಲಾಗುತ್ತಿದೆ, ಅಂಗವಿಕಲರನ್ನು ಭಿಕ್ಷಾಟನೆಗೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದೆ ಎಂದರು.

ಭಿಕ್ಷಾಟನೆಯಲ್ಲಿ ತೊಡಗಿರುವವರನ್ನು ರಕ್ಷಿಸಿ ಪುನರ್ವಸತಿ ಕಲ್ಪಿಸುವ ಚಟುವಟಿಕೆಯಲ್ಲಿ ಗೃಹ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಕಾರ್ಮಿಕ ಇಲಾಖೆಗಳ ಪಾತ್ರ ಮತ್ತು ಸಹಕಾರದ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಯಿತು ಎಂದರು.

ಈ ಕುರಿತು ಈಗಾಗಲೇ ಇಲಾಖೆ ಅಧಿಕಾರಿಗಳೊಂದಿಗೆ ಐದು ಬಾರಿ ಚರ್ಚೆ ನಡೆಸಿದ್ದು, ಬೆಂಗಳೂರಿನಲ್ಲಿ 50ರಿಂದ 70 ಕಡೆ ಭಿಕ್ಷಾಟನೆ ವ್ಯಾಪಕವಾಗಿರುವುದನ್ನು ಗುರುತಿಸಲಾಗಿದೆ. ಭಿಕ್ಷಾಟನೆಯಲ್ಲಿ ತೊಡಗಿದ್ದ 101 ಮಕ್ಕಳನ್ನು ಈಗಾಗಲೇ ಮಕ್ಕಳ ರಕ್ಷಣಾ ನಿರ್ದೇಶನಾಲಯ ವಶಕ್ಕೆ ಪಡೆದು ಪುನರ್ವಸತಿ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಅಲ್ಲದೆ, ಕಾನೂನು ಸೇವೆಗಳ ಪ್ರಾಧಿಕಾರವು ಸುಮಾರು 720 ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿದ್ದಾರೆ ಎಂದು ವರದಿ ಮಾಡಿದೆ. ಈ ಎಲ್ಲ ಮಾಹಿತಿ ಆಧರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಬೆಂಗಳೂರಿನಲ್ಲಿ ಭಿಕ್ಷಾಟನೆ ವ್ಯಾಪಕವಾಗಿ ನಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಭಿಕ್ಷಾಟನೆ ನಿಯಂತ್ರಣಕ್ಕೆ ನಿರ್ಣಾಯಕ ಕ್ರಮ ಕೈಗೊಳ್ಳಲಾಗುವುದು ಎಂದರು.

ಬೆಂಗಳೂರಿನ ಎಂಟು ಪೊಲೀಸ್ ವಿಭಾಗಗಳಲ್ಲಿ ಈಗಾಗಲೇ ತಂಡಗಳನ್ನು ರಚಿಸಲಾಗಿದ್ದು, ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಭಿಕ್ಷಾಟನೆಗಾಗಿ ಮಕ್ಕಳನ್ನು ಬೀದಿಗೆ ಬಿಡುವವರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದರು.

ಅಲ್ಲದೆ, ಬಂಧಿತ ಮಕ್ಕಳು ಮತ್ತು ತಾಯಂದಿರಿಗೆ ಪುನರ್ವಸತಿ ಕಲ್ಪಿಸಲು ಇಲಾಖೆಯಿಂದ ಪ್ರತ್ಯೇಕ ಕಟ್ಟಡವನ್ನು ವ್ಯವಸ್ಥೆಗೊಳಿಸಲಾಗುವುದು ಎಂದು ಅವರು ಹೇಳಿದರು.

ಮಕ್ಕಳ ರಕ್ಷಣಾ ನಿರ್ದೇಶನಾಲಯವು ಈಗಾಗಲೇ ‘ಈ ಗುರುತು’ ಎಂಬ ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದ್ದು, ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳು ಕಂಡು ಬಂದಲ್ಲಿ ಸಾರ್ವಜನಿಕರು ಕೂಡಲೇ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಸಚಿವರು ತಿಳಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top