ನವದೆಹಲಿ: ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಸಭೆಯಲ್ಲಿ ಸಾಮೂಹಿಕ, ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಎದುರುನೋಡುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಎಸ್ಸಿಒ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಉಜ್ಬೆಕಿಸ್ಥಾನದ ಸಮರ್ಕಂಡ್ಗೆ ಇಂದು ತೆರಳುವುದಕ್ಕೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶುಕ್ರವಾರ ನಡೆಯಲಿರುವ ಪ್ರಾದೇಶಿಕ ಬಣದ ವಾರ್ಷಿಕ ಶೃಂಗಸಭೆಯಲ್ಲಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಮತ್ತು ಇರಾನ್ನ ಇಬ್ರಾಹಿಂ ರೈಸಿ ಅವರೊಂದಿಗೆ ಭಾಗಿಯಾಗಲಿದ್ದಾರೆ
ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಉಜ್ಬೇಕಿಸ್ತಾನಕ್ಕೆ ಭೇಟಿ ನೀಡುತ್ತಿದ್ದಾರೆ.
ಉಜ್ಬೇಕಿಸ್ತಾನ್ ಪ್ರಸ್ತುತ ಶಾಂಘೈ ಸಹಕಾರ ಸಂಸ್ಥೆಯ (SCO) ಅಧ್ಯಕ್ಷನಾಗಿದೆ.
“ಎಸ್ಸಿಒ ಶೃಂಗಸಭೆಯಲ್ಲಿ, ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ವಿಷಯಗಳು, ಎಸ್ಸಿಒ ವಿಸ್ತರಣೆ ಮತ್ತು ಸಂಘಟನೆಯೊಳಗೆ ಬಹುಮುಖಿ ಮತ್ತು ಪರಸ್ಪರ ಪ್ರಯೋಜನಕಾರಿ ಸಹಕಾರವನ್ನು ಇನ್ನಷ್ಟು ಆಳವಾಗಿಸುವ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ನಾನು ಎದುರು ನೋಡುತ್ತಿದ್ದೇನೆ” ಎಂದು ಮೋದಿ ನಿರ್ಗಮನ ಪೂರ್ವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
“ಉಜ್ಬೆಕ್ ಅಧ್ಯಕ್ಷತೆಯಡಿ, ವ್ಯಾಪಾರ, ಆರ್ಥಿಕತೆ, ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರಕ್ಕಾಗಿ ಹಲವಾರು ನಿರ್ಧಾರಗಳನ್ನು ಅಳವಡಿಸಿಕೊಳ್ಳುವ ಸಾಧ್ಯತೆಯಿದೆ” ಎಂದು ಅವರು ಹೇಳಿದರು.
ಉಜ್ಬೇಕ್ ಅಧ್ಯಕ್ಷ ಮಿರ್ಜಿಯೊಯೆವ್ ಅವರನ್ನು ಭೇಟಿ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಮೋದಿ ಹೇಳಿದರು.
“2018 ರಲ್ಲಿ ಅವರ ಭಾರತ ಭೇಟಿಯನ್ನು ನಾನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತೇನೆ. ಅವರು 2019 ರಲ್ಲಿ ವೈಬ್ರೆಂಟ್ ಗುಜರಾತ್ ಶೃಂಗಸಭೆಯನ್ನು ಗೌರವ ಅತಿಥಿಯಾಗಿ ಅಲಂಕರಿಸಿದರು. ಇದರ ಜೊತೆಗೆ, ಶೃಂಗಸಭೆಯಲ್ಲಿ ಭಾಗವಹಿಸುವ ಇತರ ಕೆಲವು ನಾಯಕರೊಂದಿಗೆ ನಾನು ದ್ವಿಪಕ್ಷೀಯ ಸಭೆಗಳನ್ನು ನಡೆಸುತ್ತೇನೆ” ಎಂದು ಮೋದಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.