ಬೆಂಗಳೂರು: ಬಿಜೆಪಿ ಸರಕಾರದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ ಎಲ್ಲ ಮಾಜಿ ಶಿಕ್ಷಣ ಸಚಿವರು, ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಮೇಲ್ಮನೆ ಸದಸ್ಯರಾಗಿ ಕೆಲಸ ಮಾಡುತ್ತಿರುವ ಸದಸ್ಯರು ಒಟ್ಟು ಸೇರಿ ಸಭೆ ನಡೆಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ಕ್ಷೇತ್ರದಲ್ಲಿ ಸಮಗ್ರವಾಗಿ ಅವಲೋಕನ ಮಾಡದೆ, ಸಾಧಕ ಬಾಧಕ ಅಧ್ಯಯನ ಮಾಡದೆ, ರಾಜಕೀಯ ಕಾರಣಕ್ಕಾಗಿ ಪೂರ್ವಾಗ್ರಹಪೀಡಿತರಾಗಿ ಕೊಟ್ಟಿರುವ ಪಠ್ಯ ಪರಿಷ್ಕರಣೆ ಕುರಿತ ಹೇಳಿಕೆ ಅಸಹಿಷ್ಣು ಭಾವನೆಯಿಂದ ಕೂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಟೀಕಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೆಲವು ಮಹನೀಯರ ಪಾಠವನ್ನು ಕೈಬಿಡಬೇಕು ಎಂಬ ಹೇಳಿಕೆ ಕುರಿತು ಸಮಗ್ರವಾಗಿ ಚರ್ಚಿಸಲಾಗಿದೆ ಎಂದರು. ಶಿಕ್ಷಣ ಕ್ಷೇತ್ರವು ಪೂರ್ವಾಗ್ರಹಪೀಡಿತ ಮನಸ್ಥಿತಿಯಿಂದ ಹೊರಬರಬೇಕು. ಉತ್ತಮ ನಾಗರಿಕರನ್ನು ಶಿಕ್ಷಣ ತಯಾರು ಮಾಡಬೇಕು ಎಂದು ಅವರು ಕಿವಿಮಾತು ಹೇಳಿದರು. ಸಮಾನಮನಸ್ಕರ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗುವುದು. ಅದರ ಬಳಿಕ ಮುಂದಿನ ರೂಪುರೇಷೆ ನಿರ್ಧರಿಸಲಾಗುತ್ತದೆ ಎಂದರು.
ಮಾಜಿ ಸಚಿವ ಬಿ.ಸಿ.ನಾಗೇಶ್ ಅವರು ಮಾತನಾಡಿ, ದ್ವೇಷದಿಂದ ವರ್ತಿಸುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು. ಎನ್ಸಿಇಆರ್ಟಿ ಸೂಚನೆ ಮೇರೆಗೆ ನಾವು ಹಿಂದೆ ಬದಲಾವಣೆ ಮಾಡಿದ್ದೆವು ಎಂದು ಸ್ಪಷ್ಟಪಡಿಸಿದರು.
ತಪ್ಪುಗಳನ್ನು ಸರಿಪಡಿಸುವ ಉದ್ದೇಶ ನಮ್ಮದಾಗಿತ್ತು. ಈಗ ದ್ವೇಷದಿಂದ ಬದಲಾವಣೆ ಮಾಡಿದರೆ ಅದರಿಂದ ಮಕ್ಕಳು, ಪೋಷಕರ ಮೇಲೆ ದುಷ್ಪರಿಣಾಮ ಬೀರಲಿದೆ. ಬದಲಾವಣೆ ಮಾಡುವುದಿದ್ದರೆ ಪೋಷಕರ ಗಮನಕ್ಕೆ ತಂದು ಮಾಡಬೇಕು ಎಂದು ಒತ್ತಾಯಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.