ಬೆಂಗಳೂರು: ಅಕ್ಕಿಯ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ಕೆಟ್ಟ ರಾಜಕಾರಣ ಮಾಡುವುದು ಬೇಡ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಗ್ರಹಿಸಿದ್ದಾರೆ. ಅಕ್ಕಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು, ಬಿಜೆಪಿಯನ್ನು, ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರಲು ಹರ ಸಾಹಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.
ಒಂದು ರಾಜ್ಯದ ಮುಖ್ಯಮಂತ್ರಿ ಎರಡು ಲಕ್ಷ ಟನ್ ಅಕ್ಕಿ ಬೇಡಿಕೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳಿಗಾಗಲಿ, ಕೇಂದ್ರ ಆಹಾರ ನಾಗರೀಕ ಸರಬರಾಜು ಸಚಿವರಾಗಲಿ ಬೇಡಿಕೆ ಇಡಲೇ ಇಲ್ಲ. ಅವರೊಂದಿಗೆ ಮಾತನಾಡುವ ಸೌಜನ್ಯವನ್ನೂ ತೋರಿಸಲಿಲ್ಲ. ರಾಜ್ಯ ಸರ್ಕಾರ 2 ಲಕ್ಷ ಟನ್ ಅಕ್ಕಿಗಾಗಿ ಎಫ್ಸಿಐ ವಿಭಾಗೀಯ ವ್ಯವಸ್ಥಾಪಕರಿಗೆ 9/6/23 ರಂದು ಪತ್ರ ಮುಖೇನ ವಿನಂತಿ ಮಾಡುತ್ತಾರೆ. 12/6/23ರಂದು ವಿಭಾಗೀಯ ವ್ಯವಸ್ಥಾಪಕ ಇದಕ್ಕೆ ಅನುಮತಿ ನೀಡುತ್ತಾರೆ. ಆದರೆ ಈ ಅನುಮತಿ ನೀಡುವ ಮುನ್ನ ಅವರು ಕೇಂದ್ರ ಕಚೇರಿಯನ್ನು ಸಂಪರ್ಕಿಸದೆ ಪ್ರಾಯಶ: ಏಕಮುಖವಾಗಿ ತೀರ್ಮಾನ ಕೈಗೊಂಡ ಹಾಗೆ ಭಾಸವಾಗುತ್ತದೆ ಎಂದು ತಿಳಿಸಿದ್ದಾರೆ.
13/6/23 ರಂದು ಆಹಾರ ಮತ್ತು ನಾಗರಿಕ ಸರಬರಾಜು ಕಚೇರಿಯಿಂದ ಎಫ್ಸಿಐ ಕೇಂದ್ರ ಕಚೇರಿಗೆ ಒಎಂಎಸ್ಎಸ್ ಕೋಟಾದಡಿ ಅಕ್ಕಿ ಮಾರಾಟವನ್ನು ನಿರ್ಬಂಧಿಸಿರುವ ಬಗ್ಗೆ ಆದೇಶ ಬರುತ್ತದೆ. ಈ ತೀರ್ಮಾನ 08/06/23 ರಂದು ನಡೆದ ಸಭೆಯಲ್ಲಿ ತೀರ್ಮಾನವಾಗಿತ್ತು. ಈ ಪತ್ರವು ಕರ್ನಾಟಕ ಸರ್ಕಾರಕ್ಕೆ ಬರೆದ ಪತ್ರವಲ್ಲ ಬದಲಿಗೆ ಎಫ್ಸಿಐ ಮುಖ್ಯಸ್ಥರಿಗೆ ಬರೆದಿರುವ ಪತ್ರವಿದು ಎಂದು ವಿವರಿಸಿದ್ದಾರೆ.
ಈ ನಿರ್ಧಾರ ರಾಜ್ಯ ಸರ್ಕಾರ ಎಫ್ಸಿಐ ಗೆ ಪತ್ರ ಬರೆಯುವ ಒಂದು ದಿನ ಮುಂಚಿತವಾಗಿ ತೆಗೆದುಕೊಂಡ ತೀರ್ಮಾನ ಎಂದು ಅವರು ನೆನಪಿಸಿದ್ದಾರೆ.
ಕೇಂದ್ರ ಸರಕಾರ ಮುಂಗಾರು ಮಳೆ, ಬೆಳೆಯನ್ನು ಆಧರಿಸಿ ಕೇಂದ್ರದಲ್ಲಿರುವ ದಾಸ್ತಾನನ್ನು ಪರಿಗಣಿಸಿ ಫುಡ್ ಸೆಕ್ಯೂರಿಟಿ ಆಕ್ಟ್ ಪ್ರಕಾರ ಉಚಿತವಾಗಿ ಅಕ್ಕಿ ಕೊಡಬೇಕಾಗಿರುವ ಸರಬರಾಜಿಗೆ ಯಾವುದೇ ಭಂಗವಾಗದಂತೆ ಕಾಲಕಾಲಕ್ಕೆ ಇಂತಹ ನಿರ್ಣಯ ತೆಗೆದುಕೊಳ್ಳುವುದು ಸರ್ವೇಸಾಮಾನ್ಯ. ಈಗಾಗಲೇ ಪ್ರತಿ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ ಐದು ಕೆಜಿ ಉಚಿತ ಅಕ್ಕಿ ನಿರಂತರವಾಗಿ ಕೇಂದ್ರ ಸರ್ಕಾರ ನೀಡುತ್ತಿದೆ ( ಕೋವಿಡ್ ಸಂಕಷ್ಟದ 84 ಕೋಟಿ ಜನರಿಗೆ ಕಾಲದಲ್ಲಿ ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ಯಂತೆ ನೀಡಿದೆ) ಎಂದು ಗಮನ ಸೆಳೆದಿದ್ದಾರೆ.
ಪ್ರತಿ ಕುಟುಂಬದ ಅಕ್ಕಿಯ ಅವಶ್ಯಕತೆಯನ್ನು ಕೇಂದ್ರ ಸರಕಾರವೇ ಪೂರೈಸುತ್ತಿದೆ. ಆದ ಕಾರಣ, ರಾಜ್ಯ ಸರಕಾರ ಬಡ ಕುಟುಂಬಗಳಿಗೆ ಕೇಂದ್ರ ಸರಕಾರದ ಅಕ್ಕಿಯ ಜೊತೆಗೆ ರಾಗಿ, ಗೋಧಿ, ಬೆಳೆ ಮತ್ತು ರವೆಯನ್ನು ನೀಡಬಹುದಾಗಿದೆ. ತಾನು ವಾಗ್ದಾನ ಮಾಡಿರುವಂತೆ ಹತ್ತು ಕೆಜಿ ಅಕ್ಕಿಯ ಬದಲಾಗಿ ಅದಕ್ಕೆ ಸಮ ಮೊತ್ತದ ಹಣವನ್ನು ನೀಡಬಹುದಾಗಿದೆ ಎಂದು ಒತ್ತಾಯಿಸಿದ್ದಾರೆ.
ಈಗ ರಾಜ್ಯ ಸರ್ಕಾರಕ್ಕೆ ಬಡವರಿಗೆ ಸಹಾಯ ಮಾಡುವುದು ಮುಖ್ಯವಾಗಬೇಕೇ ಹೊರತು ರಾಜಕಾರಣವಲ್ಲ. ಇದು ಸಿದ್ದರಾಮಯ್ಯನವರಂತಹ ಅನುಭವಿ ರಾಜಕಾರಣಿಗೆ ತಿಳಿಯದ ಸಂಗತಿ ಅಲ್ಲ ಎಂದು ತಿಳಿಸಿದ್ದಾರೆ.
ಅನಗತ್ಯವಾಗಿ ಕಾಂಗ್ರೆಸ್ ಪಾರ್ಟಿ ಮೋದಿಯವರು ಬಡವರ ಅನ್ನ ಕಸಿದುಕೊಳ್ಳುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಿರಂತರವಾಗಿ ಮೋದಿ ಸರ್ಕಾರ ದೇಶದ ಯಾವೊಬ್ಬ ನಾಗರಿಕನೂ ಹಸಿವಿನಿಂದ ಇರಬಾರದು ಎಂದೇ ಪ್ರತಿ ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ 5ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿರುವುದನ್ನು ಮರೆಮಾಚಿ ಟೀಕಿಸುತ್ತಿರುವುದು ಅತ್ಯಂತ ಖಂಡನೀಯ ಹಾಗು ಕೀಳು ಮಟ್ಟದ ರಾಜಕೀಯವಾಗಿದೆ ಎಂದು ಆಕ್ಷೇಪಿಸಿದ್ದಾರೆ.
ದೇಶದ ಯಾವುದೇ ಕುಟುಂಬವು ಅಕ್ಕಿ ಅಥವಾ ಗೋಧಿ ಇಲ್ಲ ಎಂದು ಹಸಿವಿನಿಂದ ಒಂದು ದಿನವು ಕಳೆದಿಲ್ಲ. ಹಾಗೆ ಅವರು ಕಳೆಯಬಾರದು ಎಂದೇ ಕೇಂದ್ರವು ಅವರಿಗೆ ಉಚಿತ ರೇಷನ್ ನೀಡುತ್ತಿರುವುದು. ಇವರ ರಾಜಕಾರಣಕ್ಕೆ ಮೋದಿಯವರ ವಿರುದ್ದ ಉತ್ಪ್ರೇಕ್ಷಿತ ಸುಳ್ಳಿನ ಕಂತೆಯ ಮೂಲಕ ನಡೆಯುತ್ತಿರುವ ದುರುದ್ದೇಶದ ಆರೋಪವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.
ಅತಿ ಮುಖ್ಯ ವಿಚಾರವೆಂದರೆ ಸನ್ಮಾನ್ಯ ಸಿದ್ದರಾಮಯ್ಯನವರೆ ನೀವು ಕೊಡಲು ನೀಡಿರುವ ಹತ್ಕು ಕೆಜಿ ಅಕ್ಕಿ ವಾಗ್ದಾನದಲ್ಲಿ ಕೇಂದ್ರ ಸರ್ಕಾರ ನೀಡುತ್ತಿರುವ ಐದು ಕೆಜಿ ಅಕ್ಕಿಯನ್ನು ಲೆಕ್ಕಕ್ಕೆ ಸೇರಿಸುವುದಿಲ್ಲ ಎಂದು ಭಾವಿಸುತ್ತೇನೆ ಎಂದಿದ್ದಾರೆ.ಅಕ್ಕಿ ವಿತರಣೆಯ ಹೆಸರಲ್ಲಿ ರಾಜಕಾರಣ ಮಾಡದೆ ಮತ್ತು ಕೇಂದ್ರದ ಮೇಲೆ ಗೂಬೆ ಕೂರಿಸುವ ಸಣ್ಣತನ ತೋರದೆ ಬಡವರ ಆಹಾರದ ಅಗತ್ಯವನ್ನು ಕೊಡಲು ಸೂಕ್ತ ಹಾಗು ಅಗತ್ಯವಿರುವ ಆಹಾರವನ್ನು ಅಥವಾ ಅದರ ಮೌಲ್ಯದಷ್ಟು ಹಣವನ್ನು ನೀಡಲು ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.