ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದ ಮುನ್ನಾದಿನವಾದ ಇಂದು ಸಂಜೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆದಿದೆ. ಸೋಮವಾರದಿಂದ ಐದು ದಿನಗಳ ಕಾಲ ವಿಶೇಷ ಸಂಸತ್ ಅಧಿವೇಶನ ನಡೆಯಲಿದೆ.
ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ಇಂದು ಹೊಸ ಸಂಸತ್ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದರು. ನೂತನ ಸಂಸತ್ ಭವನದ ಗಜ ದ್ವಾರದ ಮೇಲ್ಭಾಗದಲ್ಲಿ ಧ್ವಜಾರೋಹಣ ಮಾಡಲಾಯಿತು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್, ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ವಿ ಮುರಳೀಧರನ್ ಮತ್ತು ರಾಜ್ಯಸಭೆ ಮತ್ತು ಲೋಕಸಭೆಯ ರಾಜಕೀಯ ಪಕ್ಷಗಳ ನಾಯಕರು ಸೇರಿದಂತೆ ಇತರ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡರು.
ವಿಶೇಷ ಅಧಿವೇಶನದ ಮೊದಲ ದಿನ, ಸಂಸತ್ತಿನ 75 ವರ್ಷಗಳ ಸಂಸದೀಯ ಪಯಣವನ್ನು ಮೆಲುಕು ಹಾಕಲಾಗುತ್ತದೆ. ಸಂಸತ್ ಸಾಧನೆಗಳು, ಅನುಭವಗಳು, ನೆನಪುಗಳು ಮತ್ತು ಕಲಿಕೆಗಳನ್ನು ಸ್ಮರಿಸುವ ಚಟುವಟಿಕೆ ಲೋಕಸಭೆಯಲ್ಲಿ ನಡೆಯಲಿದೆ.
ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕದ ಮಸೂದೆಯನ್ನು ಸರ್ಕಾರ ಪಟ್ಟಿ ಮಾಡಿದೆ. ಇದಲ್ಲದೆ, ವಕೀಲರ (ತಿದ್ದುಪಡಿ) ಮಸೂದೆ, ನಿಯತಕಾಲಿಕಗಳ ಪತ್ರಿಕಾ ಮತ್ತು ನೋಂದಣಿ ಮಸೂದೆ ಮತ್ತು ಅಂಚೆ ಕಚೇರಿ ಮಸೂದೆಯನ್ನು ಅಧಿವೇಶನದಲ್ಲಿ ಚರ್ಚೆಗೆ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ವಕೀಲರ (ತಿದ್ದುಪಡಿ) ಮಸೂದೆ ಮತ್ತು ನಿಯತಕಾಲಿಕಗಳ ಪತ್ರಿಕಾ ಮತ್ತು ನೋಂದಣಿ ಮಸೂದೆಯನ್ನು ರಾಜ್ಯಸಭೆ ಅಂಗೀಕರಿಸಿದೆ ಮತ್ತು ಇದು ಲೋಕಸಭೆಯಲ್ಲಿ ಬಾಕಿ ಉಳಿದಿದೆ. ಅಂಚೆ ಕಚೇರಿ ಮಸೂದೆ ಮತ್ತು ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತು ಮತ್ತು ಅಧಿಕಾರದ ಅವಧಿ) ಮಸೂದೆಯನ್ನು ಈಗಾಗಲೇ ರಾಜ್ಯಸಭೆಯಲ್ಲಿ ಮಂಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.