ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷದ್ದು ಹಿಂದೂ ವಿರೋಧಿ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತೀವ್ರವಾಗಿ ಆಕ್ಷೇಪಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ. ನಿನ್ನೆ ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಕೇಸನ್ನು ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದರು.
ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರತಿಷ್ಠಾಪನೆ ಆಗುವ ಶುಭ ಸಂದರ್ಭದಲ್ಲಿ ಇಡೀ ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ ಕೋಟ್ಯಂತರ ಹಿಂದೂ ಕಾರ್ಯಕರ್ತರು ಸಂತಸದಲ್ಲಿದ್ದಾರೆ; ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇದೆ. ಇಂಥ ಸಂದರ್ಭವನ್ನು ಆಯ್ಕೆ ಮಾಡಿಕೊಂಡು ಕೈಗೊಂಡ ಕ್ರಮದ ಮೂಲಕ ತಮ್ಮದು ಹಿಂದೂ ವಿರೋಧಿ ಸರಕಾರ ಎಂದು ದೇಶಕ್ಕೇ ತೋರಿಸಿಕೊಟ್ಟಿದ್ದಾರೆ ಎಂದು ಟೀಕಿಸಿದರು.
ರಾಮನ ಪ್ರತಿಮೆಯನ್ನು ಮೈಸೂರಿನ ಶಿಲ್ಪಿ ಕೆತ್ತನೆ ಮಾಡಿದ್ದಾಗಿ ನಿನ್ನೆ ಸಂಭ್ರಮದಿಂದ ಇದ್ದೆವು. ರಾಜ್ಯದ ಪ್ರತಿಯೊಬ್ಬರು ಹೆಮ್ಮೆ ಪಡುವ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರವು, ಹಳೆಯ ಕೇಸನ್ನು ಮತ್ತೆ ಓಪನ್ ಮಾಡಿ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿರುವುದು ಖಂಡನೀಯ. ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ನಾಳೆ ಇಡೀ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡುತ್ತಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಮಾತ್ರವಲ್ಲದೆ, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಪ್ರಕಟಿಸಿದರು.
ಹಿಂದೂ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಹೋರಾಟ ನಡೆಯಲಿದೆ. ಪದೇಪದೇ ಅಲ್ಪಸಂಖ್ಯಾತರನ್ನು ಓಲೈಸುವ ರಾಜ್ಯದ ಕಾಂಗ್ರೆಸ್ ಸರಕಾರ, ಬರಗಾಲದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿದೆ. ಇಡೀ ದೇಶದಲ್ಲಿ ಸಂಭ್ರಮ ಇರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರವು ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡಿದೆ. ಇದಕ್ಕೆ ತಕ್ಕ ಶಾಸ್ತಿಯನ್ನು ಮತದಾರರು ಮುಂದಿನ ದಿನಗಳಲ್ಲಿ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅಯೋಧ್ಯೆಯ ಮಂತ್ರಾಕ್ಷತೆಯನ್ನು ರಾಜ್ಯ ಮಾತ್ರವಲ್ಲದೆ, ದೇಶಾದ್ಯಂತ ಪ್ರತಿ ಮನೆಗೂ ತಲುಪಿಸುತ್ತಿದ್ದಾರೆ. ಅಲ್ಲಿ ಕೂಡ ಕಾಂಗ್ರೆಸ್ ಸರಕಾರ ಅಡ್ಡಿ ಮಾಡುತ್ತಿದೆ. ಪುಡಾರಿತನ ಮಾಡುತ್ತಿದೆ ಎಂದು ಗೊತ್ತಾಗಿದೆ. ಇದನ್ನೆಲ್ಲ ಗಮನಿಸಿ ಹೋರಾಟಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು.
ದೇಶವೇ ಸಂಭ್ರಮದಲ್ಲಿ ಇರುವಾಗ ರಾಮಭಕ್ತನನ್ನು ಬಂಧಿಸುವುದಾದರೆ ನಿಮಗೆಷ್ಟು ಧೈರ್ಯ? ಕಾನೂನು- ಸುವ್ಯವಸ್ಥೆಗೆ ಭಂಗ ತರುವ ದುಸ್ಸಾಹಸಕ್ಕೆ ಮುಖ್ಯಮಂತ್ರಿಗಳೇ ಕೈ ಹಾಕುತ್ತಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪ ಸೂಚಿಸಿದರು.
ರಾಜ್ಯ ಸರಕಾರಕ್ಕೆ ಆದ್ಯತೆ ಯಾವುದು? ಸಂದರ್ಭ ಮತ್ತು ನಿಮ್ಮ ಉದ್ದೇಶ ಏನು? ತಪ್ಪು ಮಾಡಿದ್ದಾರೆ ಅಥವಾ ಇಲ್ಲವೇ ಎಂದು ನೀವು ತೀರ್ಮಾನ ಮಾಡುವುದಲ್ಲ; 31 ವರ್ಷ ಹಳೆಯ ಕೇಸನ್ನು ಈಗಲೇ ರೀ ಓಪನ್ ಮಾಡಬೇಕಿತ್ತೇ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರವಾಗಿ ತಿಳಿಸಿದರು. ಗೃಹ ಸಚಿವರಿಗೆ ಹಳೆಯ ಕೇಸುಗಳ ಬಗ್ಗೆ ಬಹಳ ಕಾಳಜಿ ಇದೆ; ತುಂಬ ಸಂತೋಷ. ಆದರೆ, ಮುಂದೆ ನಡೆಯುವ ಘಟನೆಗೆ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರೇ ಹೊಣೆಗಾರರಾಗುತ್ತಾರೆ ಎಂದು ತಿಳಿಸಿದರು.
ಸಿಎಂ ಕ್ರಮವನ್ನು ಪಕ್ಷಾತೀತವಾಗಿ ಎಲ್ಲರೂ ಖಂಡಿಸುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರದ ದಬ್ಬಾಳಿಕೆ ಮತ್ತು ಪ್ರತೀಕಾರ ಮನೋಭಾವವನ್ನು ಖಂಡಿಸಬೇಕಾಗಿದೆ ಎಂದು ಎಚ್ಚರಿಸಿದರು. ಕಾಂಗ್ರೆಸ್ಸಿಗರು ನಾಲಿಗೆ ಮತ್ತು ಮಾತುಗಳು ಅವರ ಸಂಸ್ಕøತಿಯನ್ನು ತೋರಿಸುತ್ತದೆ. ಅಯೋಧ್ಯೆ ಎಂಬುದು ಒಂದು ಭಾವನಾತ್ಮಕ ಸಂಬಂಧದ ವಿಚಾರ. ಶ್ರೀರಾಮನ ಜನ್ಮಸ್ಥಳವದು. ಕಾಂಗ್ರೆಸ್ಸಿಗರು ಹುಚ್ಚುಚ್ಚು ಹೇಳಿಕೆಗಳಿಗೆ ನಾವು ಉತ್ತರ ಕೊಡಬೇಕಿಲ್ಲ ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.
ಹಿಂದೂಗಳು, ಹಿಂದೂ ಕಾರ್ಯಕರ್ತರ ಭಾವನೆಗೆ ಧಕ್ಕೆ ತರುವುದರಲ್ಲಿ ಇವರು ನಿಸ್ಸೀಮರು. ಹಿಂದೂಗಳಿಗೆ ನೋವು ಕೊಡುವುದರಲ್ಲಿ ಕಾಂಗ್ರೆಸ್ಸಿಗರಿಗೆ ಎಲ್ಲಿಲ್ಲದ ಸಂತೋಷ ಎಂದು ಟೀಕಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.