ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದಿಂದ ‘ಇಂಡಿ’ ಒಕ್ಕೂಟಕ್ಕೆ ತೀವ್ರ ಮರ್ಮಾಘಾತ – ವಿಜಯೇಂದ್ರ
ಬೆಂಗಳೂರು: ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಇಂದು ವಿಶ್ಲೇಷಿಸಿದರು.
ನಗರದ ಬೆಂಗಳೂರಿನ ಹೋಟೆಲ್ ರಮಾಡದಲ್ಲಿ ಇಂದು ನಡೆದ ಬಿಜೆಪಿ ಲೋಕಸಭಾ ಚುನಾವಣಾ ಯೋಜನಾ ಸಭೆಯಲ್ಲಿ ಅವರು ಮಾತನಾಡಿದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲು ರಾಜ್ಯದ ಮತದಾರರು ಸಜ್ಜಾಗಿದ್ದಾರೆ. ಬಿಜೆಪಿ, ಸಂಘಟನೆಗೆ, ಪೂರಕ ಕ್ರಮಗಳನ್ನು ಪಕ್ಷ ಕೈಗೊಳ್ಳಲಿದೆ ಎಂದು ಪ್ರಕಟಿಸಿದರು. ಪಕ್ಷವು ರಾಜ್ಯದಲ್ಲಿ ಎಲ್ಲ 28 ಸ್ಥಾನಗಳನ್ನೂ ಗೆಲ್ಲಲಿದೆ. ಇದಕ್ಕಾಗಿ ಎಲ್ಲರೂ ಶ್ರಮಿಸುವುದಾಗಿ ತಿಳಿಸಿದರು.
ಈಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸಗಡದಲ್ಲಿ ಬಿಜೆಪಿ ಗೆದ್ದಿದೆ. ಐಎನ್ಡಿಐ (ಇಂಡಿ) ಒಕ್ಕೂಟ, ಕಾಂಗ್ರೆಸ್ಗೆ ಮರ್ಮಾಘಾತ ಆಗಿತ್ತು ಎಂದು ವಿವರಿಸಿದರು. ಇದೊಂದು ಸ್ಪಷ್ಟ ಸಂದೇಶವಾಗಿದೆ ಎಂದರು.
ದೇಶ- ರಾಜ್ಯದ ಜನರು, ಪ್ರಜ್ಞಾವಂತ ಮತದಾರರು ಕಾಂಗ್ರೆಸ್ ಪಕ್ಷದ ಗಿಮಿಕ್ ಗ್ಯಾರಂಟಿಯನ್ನು ನಂಬಲು ತಯಾರಿಲ್ಲ. ಇದರಿಂದ ಮೋದಿ ಗ್ಯಾರಂಟಿಯೇ ಶ್ರೇಷ್ಠ ಎಂದು ಪ್ರಜ್ಞಾವಂತ ಮತದಾರರು ತಿಳಿದಿದ್ದಾರೆ ಎಂದು ನುಡಿದರು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಬಹುಮತ ಸಾಧಿಸಿ ಮೋದಿಜೀ ಮೂರನೇ ಬಾರಿ ಪ್ರಧಾನಮಂತ್ರಿ ಆಗಲಿದ್ದು, ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಸರಕಾರದ ಅಸಮರ್ಥ, ಅಸಮರ್ಪಕ ಆಡಳಿತದಿಂದ ಹಣಕಾಸು ವ್ಯವಸ್ಥೆ ಹದಗೆಟ್ಟಿದೆ. ಕಾನೂನು- ಸುವ್ಯವಸ್ಥೆ ಕಾಪಾಡುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ. 14 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಪನ್ಮೂಲ ಕ್ರೋಡೀಕರಣದ ವಿಚಾರದಲ್ಲಿ ಪೂರ್ಣಪ್ರಮಾಣದಲ್ಲಿ ವಿಫಲವಾಗಿದ್ದಾರೆ. ಇದರಿಂದ ಭೀಕರ ಬರಗಾಲ, 500 ರೈತರ ಆತ್ಮಹತ್ಯೆ ಹೊರತಾಗಿಯೂ ರಾಜ್ಯ ಸರಕಾರವು ಪರಿಹಾರ ಕೊಡದೆ, ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಟೀಕಿಸಿದರು.
ಹಿಂದಿನ ಸಿಎಂ ಯಡಿಯೂರಪ್ಪ ಅವರು ಅತಿವೃಷ್ಟಿ ಆಗಿದ್ದಾಗ ತಕ್ಷಣ ಜನಸ್ಪಂದನ ತೋರಿದ್ದು, ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದಾಗ ಪ್ರಕೃತಿ ವಿಕೋಪಕ್ಕೆ ಕೂಡಲೇ ಸ್ಪಂದಿಸಿದ್ದನ್ನು ಜನರು ಮರೆತಿಲ್ಲ. ಈ ಸರಕಾರವು ಎಸ್ಸಿ, ಎಸ್ಟಿಗಳಿಗೆ ಮೀಸಲಿಟ್ಟ ಹಣವನ್ನೂ ಬೇರೆಡೆಗೆ ವರ್ಗಾಯಿಸಿ ದಲಿತರಿಗೂ ಅನ್ಯಾಯ ಮಾಡಿದೆ. ಇದಕ್ಕಾಗಿ ಜನರು ಈ ಕಾಂಗ್ರೆಸ್ ಸರಕಾರವನ್ನು ಶಪಿಸುವಂತಾಗಿದೆ ಎಂದು ತಿಳಿಸಿದರು.
ಕೋಟ್ಯಂತರ ಹಿಂದೂಗಳು ಭಗವಾನ್ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯನ್ನು ಎದುರು ನೋಡುತ್ತಿದ್ದು, ಹಬ್ಬದ ವಾತಾವರಣವಿದೆ. ಮನೆಮನೆಗಳಲ್ಲಿ ಹಬ್ಬದ ಸಂಭ್ರಮ ಇದೆ. ಆದರೆ, ಭಗವಾನ್ ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದ ಕಾಂಗ್ರೆಸ್ ಪಕ್ಷದವರು ವಿಧಿ ಇಲ್ಲದೇ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಪೂಜೆ ನೆರವೇರಿಸಲು ಸುತ್ತೋಲೆ ಹೊರಡಿಸಿದೆ. ಇದು ರಾಮಭಕ್ತರಿಗೆ ಸಂದ ಜಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮತು ಮುಖಂಡರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.