ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸರ್ವರನ್ನೂ ಸಬಲರನ್ನಾಗಿ ಮಾಡುವ ಬಜೆಟ್ ಮಂಡಿಸಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಹಾಗೂ ಸಬ್ ಕಾ ವಿಶ್ವಾಸ್ ಎನ್ನುವ ಮೋದಿಯವರ ತತ್ವದಡಿ ಈ ಬಾರಿ ಕೇಂದ್ರ ಬಜೆಟ್ ಮಂಡನೆಯಾಗಿದೆ. ಹತ್ತು ವರ್ಷಗಳ ಆಡಳಿತದಲ್ಲಿ ಒಂದೇ ಒಂದು ಭ್ರಷ್ಟಾಚಾರ ನಡೆದಿಲ್ಲ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಭ್ರಷ್ಟಾಚಾರ ರಹಿತ ಆಡಳಿತ ನೀಡಿದ ಕೀರ್ತಿ ಮಾನ್ಯ ಮೋದಿಯವರ ಕೇಂದ್ರ ಸರ್ಕಾರಕ್ಕೆ ಸಲ್ಲುತ್ತದೆ ಎಂದರು.
ಈ ನಿಟ್ಟಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಿದ್ದಾರೆ. 10 ವರ್ಷಗಳಲ್ಲಿ 25 ಕೋಟಿ ಜನತೆಯನ್ನು ಬಡತನ ರೇಖೆಗಿಂತ ಮೇಲೆತ್ತುವ ಕೆಲಸವನ್ನು ಮೋದಿ ನೇತೃತ್ವದ ಸರ್ಕಾರ ಮಾಡಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಇದ್ದ ಯಾವುದೇ ಸರ್ಕಾರಗಳು ಕೇವಲ ಬಡವರನ್ನು ಉದ್ಧಾರ ಮಾಡುತ್ತೇವೆ ಎಂದು ಹೇಳಿದ್ದವೇ ಹೊರತು ನಿಜವಾಗಿಯೂ ಅವರನ್ನು ಮೇಲೆತ್ತುವ ಕೆಲಸ ಮಾಡಲೇ ಇಲ್ಲ. ಆ ಕೆಲಸವನ್ನು ನಮ್ಮ ಕೇಂದ್ರ ಸರ್ಕಾರ ಮಾಡಿದೆ. ದೇಶ ಅಭಿವೃದ್ಧಿಯತ್ತ ಮುನ್ನಡೆದಿದೆ ಎಂದು ಮೆಚ್ಚುಗೆ ಸೂಚಿಸಿದರು.
ಮಧ್ಯಂತರ ಬಜೆಟ್ ಆಗಿದ್ದರೂ ಕೂಡ ಚುನಾವಣೆ ಕೇಂದ್ರೀಕರಿಸಿ ವಿವಿಧ ಗ್ಯಾರಂಟಿ, ಭಾಗ್ಯಗಳನ್ನು ಕೊಡುವ ಸಮಯ. ಆದರೆ ಕೇಂದ್ರ ಸರ್ಕಾರ ಚುನಾವಣೆ ಹೊಸ್ತಿಲಲ್ಲಿ ಇದ್ದರೂ ಸಹ ಯಾವುದೇ ಗ್ಯಾರಂಟಿ, ಉಚಿತ ಘೊಷಣೆ ಮಂಡಿಸದೇ ಸಾಮಾನ್ಯ ಬಜೆಟ್ ರೀತಿ ಮಂಡಿಸಿ ಮಾದರಿಯಾಗಿದೆ. ರೈಲ್ವೆ, ಮೆಟ್ರೊ ರೈಲು, ಹೆದ್ದಾರಿಗಳ ನಿರ್ಮಾಣ ಕಾರ್ಯ ಇಡೀ ದೇಶದಲ್ಲಿ ನಮ್ಮ ಸರ್ಕಾರದ ಕೊಡುಗೆ ಎಂದು ಶ್ಲಾಘಿಸಿದರು.
1 ಕೋಟಿ ಮನೆಗಳಿಗೆ ಸೋಲಾರ್ ಅಳವಡಿಕೆ, 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆ, ಮಧ್ಯಮ ವರ್ಗದವರಿಗೆ ಮನೆ ಯೋಜನೆ, ಮೀನುಗಾರರಿಗೆ ಪ್ರತ್ಯೇಕ ಸಚಿವಾಲಯದ ಮೂಲಕ ಉದ್ಯೋಗ ಸೃಷ್ಟಿ ಮಾಡುವ ಚಿಂತನೆ, ವಂದೇ ಭಾರತ್ ರೈಲು, ಕೋಚ್ಗಳ ಹೆಚ್ಚಿಸುವಿಕೆ ಸೇರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ರೈಲ್ವೆ ಬೆಳೆಯಲಿದೆ ಎಂದು ವಿಶ್ಲೇಷಿಸಿದರು.
ರಾಜ್ಯಗಳಿಗೆ ಬಡ್ಡಿರಹಿತ ಸಾಲ ಸೌಲಭ್ಯ ನೀಡುವ ಮೂಲಕ ಕೇಂದ್ರ ಉತ್ತಮ ನಿರ್ಧಾರ ಮಾಡಿದೆ. ಪ್ರವಾಸೋದ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಇದೊಂದು ಶಿಸ್ತಿನ ಬಜೆಟ್ ಆಗಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.