ಬೆಂಗಳೂರು: ಸ್ವಾತಂತ್ರ್ಯ ಹೋರಾಟದ ಕುರಿತು ಜನಜಾಗೃತಿಗಾಗಿ ಪ್ರತಿಯೊಂದು ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು ಚಾಲನೆ ನೀಡಿದ್ದಾರೆ.
ಶಿವಾಜಿನಗರದ ವಸಂತ ನಗರ ವಾರ್ಡಿನ ಬೂತ್ ನಂ.44ರಲ್ಲಿ ಇಂದು ಬೆಳಿಗ್ಗೆ ಹರ್ ಘರ್ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸ್ವಾತಂತ್ರ್ಯ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಯುವ ಪೀಳಿಗೆಗೆ ಸ್ವಾತಂತ್ರ್ಯ ಸಂಗ್ರಾಮದ ದಿನಗಳನ್ನು ನೆನಪಿಸಿ ಕೊಡಬೇಕು. ತ್ಯಾಗ, ಬಲಿದಾನದ ಚರ್ಚೆ ಆಗಬೇಕು ಎಂದು ತಿಳಿಸಿದ್ದಾರೆ. ಅದಕ್ಕಾಗಿ ಯುವಜನತೆಯಲ್ಲೂ ದೇಶಭಕ್ತಿ ಜಾಗೃತಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ವಿವರಿಸಿದರು.
ಸಂಸದ ಪಿ.ಸಿ.ಮೋಹನ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೂತ್ ಸಂಖ್ಯೆ 44ರ ಅಧ್ಯಕ್ಷ ಸಾಗರ್, ಪಕ್ಷದ ಕಾರ್ಯಕರ್ತರ ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗಿದೆ. ಅದೇರೀತಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ತಿರಂಗಯಾತ್ರೆ ಆಯೋಜಿಸಲಾಗಿದೆ ಎಂದು ತಿಳಿಸಿದರು. ಯುವಕರಿಂದ ಬೈಕ್ ರ್ಯಾಲಿ ಮೂಲಕ ತಿರಂಗ ಯಾತ್ರೆ ನಡೆಸಲಾಗುತ್ತಿದ್ದು, ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು.
ಇದೇ 11ರಿಂದ 15ರವರೆಗೆ ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕಗಳು, ಪುತ್ಥಳಿಗಳ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ನಾಳೆ (ಆ.14) ದೇಶದ ವಿಭಜನೆಯ ಕರಾಳ ದಿನದ ನೆನಪನ್ನು ವಿಭಜನೆಯ ಸ್ಮೃತಿ ದಿನವಾಗಿ ನೆನಪಿಸುವ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.