ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿಗಳು ಮೈಸೂರು ಮುಡಾದ ತಮ್ಮ ನಿವೇಶನಗಳನ್ನು ವಾಪಸ್ ಮಾಡುವ ಮೂಲಕ ಹಗರಣ ನಡೆದುದನ್ನು ಒಪ್ಪಿಕೊಂಡಂತಾಗಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಲಾಲ್ ಸಿಂಗ್ ಆರ್ಯ ಅವರು ತಿಳಿಸಿದರು.
ಶಿವಾಜಿನಗರದ ಹಲಸೂರು ಲೇಕ್ನ ಎಂ.ವಿ. ಗಾರ್ಡನ್ ಬಳಿ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಹಗರಣಗಳಲ್ಲಿ ಭಾಗಿಯಾದ ಆರೋಪದ ಕಾರಣ ಮುಖ್ಯಮಂತ್ರಿ ತಮ್ಮ ಹುದ್ದೆಯಲ್ಲಿ ಮುಂದುವರೆಯಬಾರದು. ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಪಕ್ಷವು ದಲಿತ ವಿರೋಧಿ ಮಾತ್ರವಲ್ಲ; ಮೀಸಲಾತಿ ವಿರೋಧಿ ಎಂದು ಅವರು ಟೀಕಿಸಿದರು. ಕಾಂಗ್ರೆಸ್ಸಿನ ಮುಖಂಡ ರಾಹುಲ್ ಗಾಂಧಿಯವರು ಅಮೆರಿಕದಲ್ಲಿ ಭಾಷಣ ಮಾಡುವ ವೇಳೆ ಮೀಸಲಾತಿ ರದ್ದು ಮಾಡುವ ಇರಾದೆಯನ್ನು ವ್ಯಕ್ತಪಡಿಸಿದ್ದಾರೆ. ಇದರಿಂದ ಕಾಂಗ್ರೆಸ್ಸಿನ ಮೀಸಲಾತಿ ವಿರೋಧಿಸುವ ಇನ್ನೊಂದು ಮುಖ ಮತ್ತೆ ಅನಾವರಣಗೊಂಡಿದೆ ಎಂದು ತಿಳಿಸಿದರು. ಮಹರ್ಷಿ ವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ಸಿಗರು ಲಪಟಾಯಿಸಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್ಸಿನ ನೆಹರೂ, ರಾಜೀವ್ ಗಾಂಧಿ, ಇಂದಿರಾ ಗಾಂಧಿ- ಇವರೆಲ್ಲರೂ ಮೀಸಲಾತಿ ವಿರುದ್ಧ ಮಾತನಾಡಿದವರು. ಇದೀಗ ರಾಹುಲ್ ಗಾಂಧಿಯವರು ಮೀಸಲಾತಿ ರದ್ದತಿಯ ಮಾತನಾಡಿದ್ದು, ಕಾಂಗ್ರೆಸ್ ಮೀಸಲಾತಿ ವಿರೋಧಿ ಚರಿತ್ರೆಯನ್ನು ತನ್ನದಾಗಿಸಿಕೊಂಡಿದೆ ಎಂದು ಆರೋಪಿಸಿದರು.
ಬಿಜೆಪಿ ದೇಶಾದ್ಯಂತ 9 ಕೋಟಿಗೂ ಹೆಚ್ಚು ಪ್ರಾಥಮಿಕ ಸದಸ್ಯರನ್ನು ನೋಂದಾಯಿಸಿದೆ. ಎಲ್ಲ ವರ್ಗದ ಜನರು ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದು, ಸದಸ್ಯತ್ವ ಸ್ವೀಕರಿಸುತ್ತಿದ್ದಾರೆ ಎಂದರಲ್ಲದೆ, ಎಸ್ಸಿ ಮೋರ್ಚಾದ ಸಾಧನೆಯ ಕುರಿತು ವಿವರ ನೀಡಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಸಿಮೆಂಟ್ ಮಂಜುನಾಥ್, ಮಾಜಿ ಸಂಸದ ಎಸ್. ಮುನಿಸ್ವಾಮಿ, ಎಸ್ಸಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಕೌತಾಳ, ಉಮೇಶ್ ಕಾರಜೋಳ, ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ್ ಮತ್ತು ಶಿವಾಜಿನಗರ ಮಂಡಲ ಅಧ್ಯಕ್ಷ ಬಾಲಾಜಿ ಮಣಿ, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.