ಬೆಂಗಳೂರು: ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಸೇರಿ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿದ್ದು, ರಾಜ್ಯ ರಾಜಕಾರಣದ ದಿಕ್ಕನ್ನು ಬದಲಿಸುವ ಶಕ್ತಿ ಈ 3 ಕ್ಷೇತ್ರಗಳಿಗೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ನಡೆದ ಸಭೆಯ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಈ ಚುನಾವಣೆಯನ್ನು ನಾವು ಸವಾಲಾಗಿ ಸ್ವೀಕಾರ ಮಾಡಿದ್ದೇವೆ. ಶಿಗ್ಗಾವಿ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಗೆದ್ದಿರುವಂಥ ವಾತಾವರಣ ನಿರ್ಮಾಣವಾಗಿದೆ ಎಂದು ವಿಶ್ಲೇಷಿಸಿದರು.
ಸಂಡೂರಿನಲ್ಲೂ ಬಿಜೆಪಿ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿದ್ದೇವೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ- ಜೆಡಿಎಸ್ ಪಕ್ಷಗಳ ಕಾರ್ಯಕರ್ತರಲ್ಲಿ ರಣೋತ್ಸಾಹ ಇದೆ. ಚನ್ನಪಟ್ಟಣದಲ್ಲಿ ಎನ್ಡಿಎ ಗೆಲುವು ಸಾಧಿಸಲಿದೆ ಎಂದು ನುಡಿದರು.
ಚುನಾವಣೆಯಲ್ಲಿ ನಮ್ಮ ಪ್ರತಿಯೊಬ್ಬ ಕಾರ್ಯಕರ್ತರು ಹಗಲು- ರಾತ್ರಿ ಶ್ರಮವನ್ನು ಹಾಕಿ, ನಿಖಿಲ್ ಕುಮಾರಸ್ವಾಮಿ ಅವರು ದೊಡ್ಡ ಅಂತರದಲ್ಲಿ ಗೆಲ್ಲುವಂತೆ ಕಾರ್ಯತಂತ್ರ ರೂಪಿಸಲು ಸಭೆ ನಡೆಸಿದ್ದೇವೆ. ಎಲ್ಲರೂ ಹೆಚ್ಚಿನ ಉತ್ಸಾಹದಲ್ಲಿದ್ದಾರೆ. ನಮ್ಮ ಪ್ರತಿಯೊಬ್ಬ ಕಾರ್ಯಕರ್ತರು ಹಗಲು- ರಾತ್ರಿ ನಿಖಿಲ್ ಕುಮಾರಸ್ವಾಮಿ ಅವರ ಗೆಲುವಿಗೆ ಶ್ರಮಿಸುವ ಭರವಸೆ ಕೊಟ್ಟಿದ್ದೇವೆ ಎಂದರು.
ಇವತ್ತು ಬಿಜೆಪಿ ಚನ್ನಪಟ್ಟಣ ಕ್ಷೇತ್ರದ ಪ್ರಮುಖರ ಸಭೆ ನಡೆಸಿದ್ದೇವೆ. ಈ ಸಭೆಯಲ್ಲಿ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜಣ್ಣ, ನಮ್ಮ ಪಕ್ಷದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತನಾರಾಯಣ್, ಎರಡೂ ಪಕ್ಷಗಳ ಮುಖಂಡರು ಭಾಗವಹಿಸಿದ್ದರು ಎಂದು ವಿವರಿಸಿದರು.
ಜೆಡಿಎಸ್ ಯುವ ಘಟಕದ ಅಧ್ಯಕ್ಷ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ, ಚನ್ನಪಟ್ಟಣ ಉಪ ಚುನಾವಣೆಯ ಕಳೆದೆರಡು ತಿಂಗಳುಗಳಿಂದ ರಾಜ್ಯದ ಗಮನ ಸೆಳೆದಿದೆ. ನಿನ್ನೆ ನಾಮಪತ್ರ ಸಲ್ಲಿಸಿದ್ದೇನೆ. ರೈತ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜೆಡಿಎಸ್ ನಾಯಕ ಮತ್ತು ನನ್ನ ತಂದೆ ಎಚ್.ಡಿ.ಕುಮಾರಸ್ವಾಮಿ, ಪಕ್ಷದ ವರಿಷ್ಠರಾದ ಎಚ್.ಡಿ.ದೇವೇಗೌಡರು ಕುಳಿತು ಚರ್ಚಿಸಿ ನನ್ನ ಸ್ಪರ್ಧೆ ಬಗ್ಗೆ ತೀರ್ಮಾನಿಸಿದ್ದಾರೆ ಎಂದರು.
ಬದಲಾದ ರಾಜಕಾರಣದ ಸನ್ನಿವೇಶದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ನನ್ನನ್ನು ಘೋಷಿಸಿದ್ದಾರೆ. ನಿನ್ನೆ ನಾಮಪತ್ರ ಸಲ್ಲಿಕೆಗೆ ಸಹಸ್ರಾರು ಸಂಖ್ಯೆಯಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಬಂದು ಆಶೀರ್ವಾದ ಮಾಡಿದ್ದಾರೆ. 3 ಕಡೆ ಎನ್ಡಿಎ ಅಭ್ಯರ್ಥಿಗಳ ಗೆಲುವಿಗೆ ಸ್ಪಷ್ಟ ಸಂದೇಶವನ್ನು ವಿಜಯೇಂದ್ರ ಅವರು ಕೊಟ್ಟಿದ್ದಾರೆ ಎಂದು ವಿವರಿಸಿದರು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತನಾರಾಯಣ್ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.