ಬೆಂಗಳೂರು: ಮಾನ್ಯ ಸಿದ್ದರಾಮಯ್ಯನವರೇ, ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ. ಅದಕ್ಕಾಗಿಯೇ ₹50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸಿಎಂ ಆರೋಪಕ್ಕೆ ಪ್ರತ್ಯುತ್ತರ ನೀಡಿದ್ದಾರೆ..
ಇದು ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ ಅವಮಾನವಾಗಿದೆ. ನಿಮ್ಮ ಈ ಹೇಳಿಕೆ ರಾಜ್ಯದ ಕಾಂಗ್ರೆಸ್ ಘಟಕವು ಶಾಸಕರುಗಳನ್ನು ಅಂಕೆಯಲ್ಲಿ ಇಟ್ಟುಕೊಳ್ಳಲು ಹಾಗೂ ನಿಮ್ಮನ್ನು ಸುತ್ತುವರೆದಿರುವ ಭ್ರಷ್ಟಾಚಾರದ ಹಗರಣಗಳನ್ನು ಮುಚ್ಚಿಕೊಳ್ಳಲು ಹೆಣೆದಿರುವ ಹತಾಶೆಯ ಸುಳ್ಳಿನ ಕಂತೆ ಎನ್ನುವುದು ಕನಿಷ್ಠ ರಾಜಕೀಯ ಜ್ಞಾನ ಇರುವವರಿಗೂ ಅರಿವಾಗುತ್ತದೆ ಎಂದು ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹಂಚಿಕೊಂಡ ಪೋಸ್ಟ್ನಲ್ಲಿ ತಿಳಿಸಿದ್ದಾರೆ.
‘ಸುಳ್ಳು, ಭಂಡತನ, ಕಪೋಲ ಕಲ್ಪಿತ ಸುದ್ದಿಗಳನ್ನು ಹರಿಬಿಡುವುದು ನಿಮ್ಮ ಹಾಗೂ ನಿಮ್ಮ ಪಕ್ಷದ ನಿತ್ಯ ಮಂತ್ರವಾಗಿದೆ. ನೀವು ನಡೆಸಿರುವ ಸರಣಿ ಹಗರಣಗಳ ಹಿನ್ನೆಲೆಯ ಉರುಳು ಬಿಗಿಯಾಗುತ್ತಿರುವಷ್ಟೂ ನಿದ್ದೆಗೆಡುತ್ತಿರುವ ನಿಮ್ಮ ಮನಸ್ಸು ಅಸ್ಥಿರಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಚಲಿತ ಬೆಳವಣಿಗೆಯನ್ನು ವಿಚಲಿತಗೊಳಿಸುವುದು ಹೇಗೆ ಎಂಬುದರತ್ತಲೇ ನೀವು ನಿಗಾ ಇಟ್ಟಿರುವಂತೆ ಕಾಣುತ್ತಿದೆ’ ಎಂದು ತಿಳಿಸಿದ್ದಾರೆ.
‘ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ನೀವು ಅದರ ಘನತೆಯನ್ನು ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದೀರಿ, ನಿಮ್ಮದೇ ಸರ್ಕಾರವಿದೆ, ನಿಮ್ಮದೇ ತನಿಖಾ ಸಂಸ್ಥೆಗಳಿವೆ, ₹50 ಕೋಟಿ ಆಮಿಷದ ಮೂಲ ಯಾವುದು ಎನ್ನುವುದನ್ನು ಜನರ ಮುಂದೆ ಬಹಿರಂಗಪಡಿಸುವುದು ನಿಮ್ಮ ನೈತಿಕ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದರೆ ನಿಮ್ಮ ಹೇಳಿಕೆ ಪುಡಾರಿಗಳು ನೀಡುವ ಬಾಲಿಶ ರಾಜಕೀಯ ಹೇಳಿಕೆಯಾಗುತ್ತದೆಯಷ್ಟೇ’ ಎಂದು ಎಚ್ಚರಿಸಿದ್ದಾರೆ.
ಒಂದು ಕಡೆ ನಿಮ್ಮ ಪುತ್ರ ನ್ಯಾಯಾಂಗ ವ್ಯವಸ್ಥೆಯನ್ನೇ ಅಪಮಾನಿಸುವ ಆರೋಪ ಮಾಡಿದರೆ, ಮತ್ತೊಂದೆಡೆ ನೀವು ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಹತಾಶೆಯಿಂದ ವರ್ತಿಸುತ್ತಿದ್ದೀರಿ. ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದರೆ ಜನ ಸುಮ್ಮನೆ ಬಿಡುವುದಿಲ್ಲ ಎಂದು ಅಬ್ಬರಿಸುತ್ತಿದ್ದೀರಿ; ಆದರೆ ವಾಸ್ತವ ಸಂಗತಿ ಏನೆಂದರೆ, ಕರ್ನಾಟಕದ ಜನತೆ ನಿಮ್ಮಂಥ ಭ್ರಷ್ಟ ಮುಖ್ಯಮಂತ್ರಿ ಇನ್ನೂ ಅಧಿಕಾರದಿಂದ ಕೆಳಗಿಳಿಯದೇ ಭಂಡತನ ಪ್ರದರ್ಶಿಸುತ್ತಿದ್ದಾರಲ್ಲ ಎಂದು ರಸ್ತೆಯಲ್ಲಿ ನಿಂತು ಮಾತನಾಡಿಕೊಳ್ಳುತ್ತಿದ್ದಾರೆ ಎಂದು ಗಮನ ಸೆಳೆದಿದ್ದಾರೆ.
ನಿಮ್ಮ ಗುಪ್ತಚರ ಇಲಾಖೆ ಈ ವಿಷಯವನ್ನು ನಿಮಗೆ ಮುಟ್ಟಿಸಿರಲೇಬೇಕು. ಆದ್ದರಿಂದಲೇ ನೀವು ಇಷ್ಟೊಂದು ವಿಚಲಿತರಾದಂತೆ ಕಪೆÇೀಲ ಕಲ್ಪಿತ ಕಥೆಗಳನ್ನು ಸೃಷ್ಟಿಸಿಕೊಂಡು ಬಡಬಡಿಸುತ್ತಿದ್ದೀರಿ ಎಂದಿದ್ದಾರೆ.
ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತು 50 ಕೋಟಿ ಆಮಿಷದ ಗಂಭೀರ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಸರ್ಕಾರ ಬೀಳಿಸಲು ಸಾವಿರಾರು ಕೋಟಿ ಬಂಡವಾಳ ಹೂಡಲು ತಯಾರಾಗಿರುವವರು ಯಾರು? ಎಂಬುದು ಬಹಿರಂಗವಾಗಬೇಕಿದೆ. ಈ ನಿಟ್ಟಿನಲ್ಲಿ ಇ.ಡಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಕೂಡಲೇ ತನಿಖೆ ನಡೆಸುವುದು ತುರ್ತು ಅಗತ್ಯವಿದೆ, ರಾಜ್ಯದ ಜನತೆಗೆ ಸತ್ಯ ತಿಳಿಯಬೇಕಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.