ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ನಾಲ್ಕು ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಈ ವೇಳೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.
ಶಿಕ್ಷಣ ಇಲಾಖೆಯಲ್ಲಿ ಅತೀ ಹೆಚ್ಚು ದಾಖಲಾತಿ ಇರುವ ಆಯ್ದ 100 ಉರ್ದು ಮಾಧ್ಯಮದ ಶಾಲೆಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಮೂಲಸೌಕರ್ಯಗಳನ್ನು ಒದಗಿಸಿ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸುವ ಯೋಜನೆಯನ್ನು ಸಿಎಂ ಘೋಷಿಸಿದ್ದಾರೆ. ಒಟ್ಟಾರೆ 400 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನ. ಈ ವರ್ಷ 100 ಕೋಟಿ ರೂ. ಈಗಾಗಲೇ ಒದಗಿಸಲಾಗಿದೆ.
2023-24ನೇ ಸಾಲಿನಲ್ಲಿ ಪದವಿ ಪೂರ್ವ ತರಗತಿಗಳನ್ನು ಪ್ರಾರಂಭಿಸಲಾಗಿರುವ 62 ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗವನ್ನು ಪ್ರಾರಂಭಿಸುವುದಾಗಿ ಘೋಷಣೆ.
ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ ಯೋಜನೆಯಡಿ 1,000 ಕೋಟಿ ರೂ. ಕ್ರಿಯಾ ಯೋಜನೆಯನ್ನು ತಯಾರಿಸಲಾಗಿದ್ದು, ಕಾಮಗಾರಿಗಳನ್ನು 2025-26ನೇ ಸಾಲಿನಲ್ಲಿ ಅನುಷ್ಠಾನ ಮಾಡಲಾಗುತ್ತದೆ.
ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದೊಂದಿಗೆ ಔಪಚಾರಿಕ ಶಿಕ್ಷಣವನ್ನು ನೀಡಲು ಕಂಪ್ಯೂಟರ್, ಸ್ಮಾರ್ಟ್ ಬೋರ್ಡ್ ಇತ್ಯಾದಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಈ ವಿದ್ಯಾರ್ಥಿಗಳು NIOS ಮೂಲಕ SSLC ಪರೀಕ್ಷೆ ಬರೆಯಲು ಅವಕಾಶವಾಗುವಂತೆ ರೂಪಿಸಲಾಗುತ್ತದೆ.
ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸಲಾಗುವುದು.
ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು 2W% ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ಒಟ್ಟಾರೆ 100 ಕೋಟಿ ರೂ. ವೆಚ್ಚದ ಈ ಯೋಜನೆಯ ಶೇ.25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದಿಂದ ಭರಿಸಲಾಗುವುದು.
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಲಾಗುವುದು.
ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ತರ್ಕಬದ್ಧಗೊಳಿಸಿ 5000 ಹುದ್ದೆಗಳನ್ನ ಭರ್ತಿ ಮಾಡಲಾಗುವುದು ಎಂದು ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮದಡಿ 5 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು ಎಂದು ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ ಮಾಡಲಾಗಿದೆ. 60 ಸಾವಿರ ರೂ.ನಿಂದ 72 ಸಾವಿರಕ್ಕೆ ತಸ್ತೀಕ್ ಮೊತ್ತ ಏರಿಸಲಾಗುವುದು. ಕರ್ನಾಟಕ ದೇವಾಲಯ ವಸತಿ ಕೋಶ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ದೇವಾಲಯಗಳ ಛತ್ರಗಳಲ್ಲಿ ರೂಮ್ ಬುಕಿಂಗ್ಗೆ ವ್ಯವಸ್ಥೆ ಕಲ್ಪಿಸಲಾಗುವುದು. ರಾಜ್ಯದಲ್ಲಿ ಒತ್ತುವರಿಯಾಗಿರುವ ದೇಗುಲಗಳ ಆಸ್ತಿ ರಕ್ಷಿಸಲು, ಭೂವರಾಹ ಯೋಜನೆಯಡಿ ಸ್ಥಿರಾಸ್ತಿ ದಾಖಲೀಕರಣಗೊಳಿಸಲು ಕ್ರಮವಹಿಸಲಾಗುವುದು. ಪ್ರವಾಸೋದ್ಯೋಮ ತಾಣವಾಗಿ ಚಂದ್ರಗುತ್ತಿ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು.
ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು, ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ. ಮೀಸಲು, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಿಸಲಾಗುವುದು. ಕೆಇಎ ಮೂಲಕ ವೃತ್ತಿಪರ ಕೋರ್ಸ್ಗಳಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 5 ಲಕ್ಷ ರೂ. ಸೀಮಿತವಾಗಿದೆ. ಜೊತೆಗೆ ಶುಲ್ಕದಲ್ಲಿ ಶೇ.50 ರಷ್ಟು ಮರು ಪಾವತಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ತೊಗರಿ ಬೆಳೆಗಾರರಿಗೆ ಸಿದ್ದರಾಮಯ್ಯ ಬಂಪರ್ ಗಿಫ್ಟ್
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಸರ್ಕಾರ ನಿರ್ಧರಿಸಿದೆ. ಕ್ವಿಂಟಾಲ್ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದಿಂದ 450 ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದರಿಂದ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕೋಲಾರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಅನುಕೂಲವಾಗಲಿದೆ.
ನಕ್ಸಲ್ ಪೀಡಿತ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಕ್ಸಲ್ ಪ್ಯಾಕೇಜ್ ಘೋಷಣೆ ಮಾಡಿದ್ದು, 10 ಕೋಟಿ ರೂ. ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಟಾರ್ಗೆಟ್ ನೀಡಿದೆ. ಈ ಮೂಲಕ ರಾಜ್ಯದಲ್ಲಿ ಮದ್ಯದ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ. ರಾಜ್ಯ ಸರ್ಕಾರ ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದೆ.
ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣಕ್ಕಾಗಿ ಮತ್ತು ಮುಸ್ಲಿಂ ಸ್ಮಶಾನಗಳ ರಕ್ಷಣೆಗಾಗಿ ಮೂಲಸೌಕರ್ಯಕ್ಕಾಗಿ 150 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸಿನಿಮಾ ಕ್ಷೇತ್ರವನ್ನ ಸಿನಿಮಾ ಉದ್ಯಮ ಎಂದು ಪರಿಗಣಿಸಿ ಕೈಗಾರಿಕಾ ನೀತಿಯಡಿ ತರಲು ನಿರ್ಧಾರ ಮಾಡಲಾಗಿದೆ. ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಸಲು ನಿರ್ಧರಿಸಲಾಗಿದೆ. ಎಲ್ಲ ಚಿತ್ರಮಂದಿರಗಳಲ್ಲೂ ಸಿನಿಮಾ ಟಿಕೆಟ್ ದರ 200 ರೂ.ಗೆ ನಿಗದಿ ಪಡಿಸಲಾಗುವುದು. ಈ ಮೂಲಕ ಸರ್ಕಾರ ಮಲ್ಟಿಫ್ಲೆಕ್ಸ್ಗಳಲ್ಲಿ ಏಕರೂಪದ ದರನಿಗದಿಗೊಳಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯನ್ನು 6 ದಿನಕ್ಕೆ ವಿಸ್ತರಿಸಲಾಗುವುದು. ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲಿಡಲಾಗಿದ್ದು, ಅಜೀಂ ಪ್ರೇಮ್ಜಿ ಸಹಯೋಗದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು.
ಎಸ್ಸಿ, ಎಸ್ಟಿ ಸಮುದಾಯಕ್ಕೆ 2 ಕೋಟಿ ರೂಪಾಯಿಯವರೆಗಿನ ಕಾಮಗಾರಿಗಳಲ್ಲಿ ಮೀಸಲಾತಿ ನೀಡಲಾಗುವುದು. ಎಸ್ಸಿಪಿ ಟಿಎಸ್ಪಿ ಯೋಜನೆಗೆ 42018 ಕೋಟಿ ರೂ. ಮೀಸಲು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ಘೋಷಿಸಿದ್ದಾರೆ.
ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಸರ್ಕಾರ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ, ಬಜೆಟ್ನಲ್ಲಿ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ.
ರಾಜ್ಯ ಬಜೆಟ್: 2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿ ಇದೆ. ಕಳೆದ ಬಾರಿಯ ಬಜೆಟ್ ಗಾತ್ರ 3,71,383 ಕೋಟಿ ರೂ. ಇತ್ತು. ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿದ್ದು, ಕಳೆದ ಬಜೆಟ್ಗಿಂತ ಈ ಬಾರಿ 38,166 ಕೋಟಿ ಹೆಚ್ಚಳವಾಗಿದೆ.
ಕೈಗಾರಿಕ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ ೧ ೨ಎ ಜತೆ ೨ಬಿ (ಮುಸ್ಲಿಂ) ಗೆ ಶೇಕಡಾ ೨೦ ರಷ್ಟು ಮೀಸಲಾತಿ ಘೋಷಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಜಿ.ಎಸ್. ಶಿವರುದ್ರಪ್ಪನವರ ಹೆಸರಿನಲ್ಲಿ ₹1 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗಲಿದೆ. ಘಟಪ್ರಭಾದಲ್ಲಿ ಸಾಹಿತಿ ಡಾ. ಹರ್ಡೀಕರವರ ಸ್ಮಾರಕವನ್ನು ನಿರ್ಮಿಸಲಾಗುತ್ತಿದೆ. ಮೈಸೂರಿನ ರಂಗಾಯಣಕ್ಕೆ ₹2 ಕೋಟಿ ಅನುದಾನ ನೀಡಲಾಗಿದೆ. ಸಾಹಿತಿ ಡಾ. ನರಸಿಂಹಯ್ಯನವರ ಸ್ಮರಣಾರ್ಥ ಪ್ರಾಧಿಕಾರವನ್ನು ಸ್ಥಾಪಿಸಲಾಗುವುದು.
ಶ್ರೇಷ್ಠ ಸಾಧಕರ ಜೀವನ ಚರಿತ್ರೆಗಳನ್ನು ಪರಿಚಯಿಸುವ ಪುಸ್ತಕಗಳನ್ನು ‘ಕನ್ನಡ ಭಾರತಿ ಪುಸ್ತಕ ಮಾಲಿಕೆ’ಯಡಿಯಲ್ಲಿ ಪ್ರಕಟಿಸಲಾಗುವುದು. ದಾವಣಗೆರೆಯ ಕೊಂಡಜ್ಜಿಯಲ್ಲಿ ರಂಗಭೂಮಿಗೆ ಸಂಬಂಧಿಸಿದ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲಾಗುತ್ತಿದೆ. ಕಲಾವಿದರಿಗೆ ನೀಡಲಾಗುತ್ತಿರುವ ಮಾಸಾಶನವನ್ನು ₹2000 ದಿಂದ ₹2500 ಕ್ಕೆ ಹೆಚ್ಚಿಸಲಾಗುವುದು.
ಕನ್ನಡ ಮತ್ತು ಸಂಸ್ಕೃತಿಗೆ ಸರ್ಕಾರ ವಿಶೇಷ ಒತ್ತು ನೀಡಿದ್ದು, ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿದೆ. ಬಾಗಲಕೋಟೆಯಲ್ಲಿ ನಡೆಯಲಿರುವ ಚಾಲುಕ್ಯ ಉತ್ಸವಕ್ಕೆ ₹2 ಕೋಟಿ ಮೀಸಲಿಡಲಾಗಿದೆ. ಬೆಂಗಳೂರಿನಲ್ಲಿ ಬಸವಣ್ಣನವರ ಆಧ್ಯಾತ್ಮಿಕ ಮತ್ತು ವಚನ ಸಾಹಿತ್ಯದ ಅಧ್ಯಯನಕ್ಕಾಗಿ ವಿಶೇಷ ಸ್ಥಾಪನೆ ನಿರ್ಮಾಣವಾಗಲಿದೆ. ಸ್ವಾತಂತ್ರ್ಯ ಹೋರಾಟದ ಕುರಿತಾದ ‘ಓಟ’ ಕಾದಂಬರಿಯನ್ನು ನಾಟಕ ರೂಪದಲ್ಲಿ ಪ್ರದರ್ಶಿಸಲಾಗುವುದು.
ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗಿ ಘೋಷಣೆಯಾಗಿದೆ. ಇದರೊಂದಿಗೆ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜಿಸಲಾಗುವುದು. ಶರಣಾದ ನಕ್ಸಲರಿಗೆ ಪುನರ್ವಸತಿ ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ 10 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ಸುಗಮಗೊಳಿಸಲು ಗಂಗಾ ಕಲ್ಯಾಣ ಯೋಜನೆಯಡಿ 25,971 ಬೋರ್ವೆಲ್ಗಳಿಗೆ ವಿದ್ಯುದ್ದೀಕರಣ ಮಾಡಲಾಗುವುದು. ಗ್ರಾಮ ಪಂಚಾಯಿತಿ ಮತ್ತು ನಗರಗಳಲ್ಲಿ ಬೀದಿ ದೀಪಗಳಿಗೆ ಅಳವಡಿಸಲಾಗಿರುವ ವಿದ್ಯುತ್ ಮೀಟರ್ಗಳ ಬಿಲ್ಗಳನ್ನು ಪಾವತಿಸಲು ಪೇಸ್ ವೇರ್ ವ್ಯವಸ್ಥೆ ಜಾರಿಗೆ ಬರಲಿದೆ
ಇಂಧನ ವಲಯಕ್ಕೆ ಈ ಬಾರಿ ಬಜೆಟ್ನಲ್ಲಿ ಹಲವು ಮಹತ್ವದ ಘೋಷಣೆಗಳು ಬಂದಿವೆ. ಮನೆಗಳಿಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ 10,100 ಕೋಟಿ ರೂಪಾಯಿ ಮೀಸಲಿಡಲಾಗಿದೆ. ವಿದ್ಯುತ್ ಸರಬರಾಜು ಸುಧಾರಿಸಲು 115 ಹೊಸ ಉಪಕೇಂದ್ರಗಳನ್ನು ಸ್ಥಾಪಿಸಲಾಗುವುದು. ರಾಜ್ಯದಲ್ಲಿ ಇಂಧನ ಶೇಖರಣಾ ಸಾಮರ್ಥ್ಯ ಹೆಚ್ಚಿಸಲು ಕೆಪಿಟಿಸಿಎಲ್ ಮೂಲಕ 7 ಹೊಸ ಸಬ್ ಸ್ಟೇಷನ್ಗಳನ್ನು ನಿರ್ಮಿಸಲಾಗುವುದು. ಇದಲ್ಲದೇ, 1846 ಕೋಟಿ ರೂಪಾಯಿ ವೆಚ್ಚದಲ್ಲಿ ಬೃಹತ್ ಬ್ಯಾಟರಿ ಶಕ್ತಿ ಶೇಖರಣಾ ವ್ಯವಸ್ಥೆಯನ್ನು ಸ್ಥಾಪಿಸಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಲಾಗಿದೆ.
ರೈತರಿಗೆ ಅನುಕೂಲವಾಗುವಂತೆ ಕೃಷಿ ಮಾರುಕಟ್ಟೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಬೆಂಗಳೂರಿನ ಹೊರವಲಯದಲ್ಲಿ ಹೊಸ ಸ್ಯಾಟಲೈಟ್ ಮಾರುಕಟ್ಟೆ ತೆರೆಯಲಾಗುತ್ತಿದೆ. ಮಾರುಕಟ್ಟೆಯಲ್ಲಿ ಪರವಾನಗಿ ಪಡೆದ ಶ್ರಮಿಕರು ಅಪಘಾತ ಅಥವಾ ಇತರೆ ಕಾರಣಗಳಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ ₹5 ಲಕ್ಷ ರೂಪಾಯಿ ವಿಮೆ ಸೌಲಭ್ಯ ನೀಡಲಾಗುವುದು. ಕೊಪ್ಪಳದಲ್ಲಿ ಕುರಿ ಮತ್ತು ಮೇಕೆ ಮಾರುಕಟ್ಟೆ ಅಭಿವೃದ್ಧಿಗಾಗಿ ₹25 ಕೋಟಿ ಹಾಗೂ ಕಲಬುರಗಿಯಲ್ಲಿ ನೂತನ ಮೆಗಾ ಡೈರಿ ನಿರ್ಮಾಣಕ್ಕೆ ₹50 ಕೋಟಿ ಮೀಸಲಿಡಲಾಗಿದೆ. ರೈತರು ತಮ್ಮ ಉತ್ಪನ್ನಗಳನ್ನು ಸುರಕ್ಷಿತವಾಗಿ ಸಂಗ್ರಹಿಸಲು ಗ್ರಾಮೀಣ ಭಾಗಗಳಲ್ಲಿ ಉಗ್ರಾಣಗಳ ನಿರ್ಮಾಣಕ್ಕೆ ₹60 ಕೋಟಿ ವೆಚ್ಚ ಮಾಡಲಾಗುವುದು. ಬೆಂಗಳೂರಿನಲ್ಲಿ ಆಧುನಿಕ ಸೌಲಭ್ಯಗಳನ್ನು ಹೊಂದಿದ ಕುರಿ ಮತ್ತು ಮೇಕೆ ಮಾರುಕಟ್ಟೆ ಸ್ಥಾಪಿಸಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ. ಕೆಜಿಎಫ್ನಲ್ಲಿ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ.
ಸಹಕಾರ ಇಲಾಖೆ 37 ಲಕ್ಷ ರೈತರಿಗೆ ಒಟ್ಟು ₹28,000 ಕೋಟಿ ಸಾಲ ನೀಡಿದೆ. ರೈತರಿಗೆ ಅನುಕೂಲವಾಗುವಂತೆ, ಡಿಸಿಸಿ ಬ್ಯಾಂಕ್ಗಳು ಮತ್ತು ಪಿಕಾರ್ಡ್ ಬ್ಯಾಂಕ್ಗಳು ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಿವೆ. ಈ ಎರಡೂ ಬ್ಯಾಂಕುಗಳಲ್ಲಿ ಸುಮಾರು ₹240 ಕೋಟಿ ಮೌಲ್ಯದ ರೈತರ ಸಾಲದ ಬಡ್ಡಿ ಮನ್ನಾ ಆಗಿದೆ. ಯಶಸ್ವಿನಿ ಯೋಜನೆಯಡಿ ಈಗ 700 ನೆಟ್ವರ್ಕ್ ಆಸ್ಪತ್ರೆಗಳು ಸೇರ್ಪಡೆಯಾಗಿವೆ. ಇದರಿಂದ ಈಗಾಗಲೇ 59,000 ಜನ ಫಲಾನುಭವಿಗಳು ಚಿಕಿತ್ಸೆ ಪಡೆದಿದ್ದಾರೆ. ರೈತರ ಬೆಳೆಗೆ ಪ್ರೋತ್ಸಾಹ ನೀಡಲು ತೊಗರಿ ಖರೀದಿಗೆ ಪ್ರತಿ ಕ್ವಿಂಟಾಲ್ಗೆ ₹450 ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಸಹಕಾರ ಬ್ಯಾಂಕ್ಗಳಲ್ಲಿ ನಡೆಯುವ ಅವ್ಯವಹಾರಗಳನ್ನು ತಡೆಯಲು ಸಹಾಯವಾಣಿಯನ್ನು (ಹೆಲ್ಲೈನ್) ಸ್ಥಾಪಿಸಲಾಗಿದೆ. ಸಹಕಾರ ಸಂಘಗಳನ್ನು ಡಿಜಿಟಲೀಕರಣಗೊಳಿಸುವ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ. ಕಲಬುರಗಿಯಲ್ಲಿ ಪ್ರಾದೇಶಿಕ ಸಹಕಾರ ಭವನ ನಿರ್ಮಾಣಕ್ಕೆ ₹10 ಕೋಟಿ ಅನುದಾನ ಮಂಜೂರು ಮಾಡಲಾಗಿದೆ.
ವಿಜಯಪುರದಲ್ಲಿ ಈ ವರ್ಷದಲ್ಲಿ ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಲಿದೆ. ರಾಜ್ಯದಲ್ಲಿ ಹೊಸ ರೈಲ್ವೆ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಸರ್ಕಾರವೇ ನಡೆಸಲಿದ್ದು, ಈ ಉದ್ದೇಶಕ್ಕಾಗಿ 9,847 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಇದಲ್ಲದೆ ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣಕ್ಕೆ 50 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.
ನೇಕಾರರ ಅಭಿವೃದ್ಧಿಗೆ ‘ನೇಕಾರರ ಪ್ಯಾಕೇಜ್ 2.0’ ಘೋಷಿಸಲಾಗಿದ್ದು, ಉಚಿತ ಮತ್ತು ರಿಯಾಯಿತಿ ದರದಲ್ಲಿ ವಿದ್ಯುತ್ ನೀಡಲು 100 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.
ರಾಜ್ಯದಲ್ಲಿ ಕೈಗಾರಿಕಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ವಿಜಯಪುರದ ಕಿಡಗುಂಡಿಯಲ್ಲಿ ಪ್ಲಗ್ & ಪ್ಲೇ ಫ್ಲ್ಯಾಟ್ ಫ್ಯಾಕ್ಟರಿ, ಕೋಲಾರದ ಶಿವಾರ ಕೈಗಾರಿಕಾ ಪ್ರದೇಶದಲ್ಲಿ ಬಹು ವಲಯದ ನೆಟ್ ಝೀರೋ ಸಸ್ಟೇನಿಬಿಲಿಟಿ ಇಂಡಸ್ಟ್ರಿಯಲ್ ಪಾರ್ಕ್ ಮತ್ತು ತುಮಕೂರಿನಲ್ಲಿ ಜಪಾನೀಸ್ ಇಂಡಸ್ಟ್ರಿಯಲ್ ಪಾರ್ಕ್ ಸ್ಥಾಪಿಸಲಾಗುತ್ತಿದೆ. ಇದಲ್ಲದೆ, ಬಿದರಿ ಮತ್ತು ಶ್ರೀಗಂಧ ಕಲಾಕೃತಿಗಳ ಕಚ್ಚಾವಸ್ತುಗಳಿಗೆ 1 ಕೋಟಿ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು. ಖನಿಜಗಳ ಸಾಗಣಿಕೆ ಪರವಾನಗಿ ಮತ್ತು ಸಮನ್ವಯತೆಗಾಗಿ ಪ್ರತ್ಯೇಕ ತಂತ್ರಾಂಶ ಅಭಿವೃದ್ಧಿಪಡಿಸಲಾಗುತ್ತಿದೆ. ಸಕ್ಕರೆ ಕಾರ್ಖಾನೆಗಳ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ 20 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.
ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಕಂಪನಿಗಳು ಕೆಲವು ನಿಯಮಗಳನ್ನು ಉಲ್ಲಂಘಿಸಿದರೆ ಇನ್ನು ಮುಂದೆ ಕ್ರಿಮಿನಲ್ ಮೊಕದ್ದಮೆ ಹೂಡುವುದಿಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಈ ಮೂಲಕ ಕರ್ನಾಟಕ ದೇಶದಲ್ಲೇ ಮೊದಲ ರಾಜ್ಯವಾಗಿದೆ. ಇದರ ಜೊತೆಗೆ, ರಾಜ್ಯದಲ್ಲಿ ‘ಕ್ಲೀನ್ ಮೊಬಿಲಿಟಿ’ಗೆ 50 ಸಾವಿರ ಕೋಟಿ ಹೂಡಿಕೆ ಮಾಡುವ ಗುರಿ ಹೊಂದಲಾಗಿದೆ. ಈ ಮೂಲಕ 1 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ಯೋಜನೆಯ ಭಾಗವಾಗಿ ಬೆಂಗಳೂರಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ವಿದ್ಯುತ್ ವಾಹನ ಕ್ಲಸ್ಟರ್ ಸ್ಥಾಪನೆಗೆ 25 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.
ರಾಜ್ಯದಲ್ಲಿ 2,500 ಕಿ.ಮೀ. ಉದ್ದದ ಕೋರ್ ರೋಡ್ ನೆಟ್ವರ್ಕ್ ನಿರ್ಮಾಣಕ್ಕೆ 9,000 ಕೋಟಿ ರೂಪಾಯಿಗಳ ಬೃಹತ್ ಯೋಜನೆ ಹಾಕಿಕೊಳ್ಳಲಾಗಿದೆ. ರಾಯಚೂರು ಮತ್ತು ಬೈಲಹೊಂಗಲ ಪಟ್ಟಣಗಳಿಗೆ ರಿಂಗ್ ರೋಡ್ ನಿರ್ಮಿಸಲಾಗುವುದು. ಮದ್ದೂರು ನಗರದಲ್ಲಿ ರಸ್ತೆ ಅಗಲೀಕರಣ ಕಾರ್ಯ ಕೈಗೆತ್ತಿಕೊಳ್ಳಲಾಗುವುದು.
ಲೋಕೋಪಯೋಗಿ ಇಲಾಖೆಯು ರಾಜ್ಯದಾದ್ಯಂತ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿಗೆ ಭರ್ಜರಿ ಯೋಜನೆಗಳನ್ನು ರೂಪಿಸಿದೆ. 1,850 ಕಿ.ಮೀ. ರಾಜ್ಯ ಹೆದ್ದಾರಿ ಮತ್ತು 2,570 ಕಿ.ಮೀ. ಜಿಲ್ಲಾ ಮುಖ್ಯ ರಸ್ತೆಗಳ ಅಭಿವೃದ್ಧಿ ಕಾರ್ಯ ನಡೆಯಲಿದೆ. ಈ ಯೋಜನೆಗಳಿಗೆ ಸುಮಾರು 4,848 ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಇದಲ್ಲದೆ, ರಾಜ್ಯದಲ್ಲಿ ಶಿಥಿಲಾವಸ್ಥೆಯಲ್ಲಿರುವ 39 ಸೇತುವೆಗಳ ದುರಸ್ತಿಗೆ 1,000 ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು.
ರಾಜ್ಯದಲ್ಲಿ ಶಾಲೆಗೆ ಹೋಗುವ 53 ಲಕ್ಷ ಮಕ್ಕಳಿಗೆ ಮೊಟ್ಟೆ ಮತ್ತು ಬಾಳೆಹಣ್ಣು ನೀಡುವ ಯೋಜನೆಯನ್ನು ಸರ್ಕಾರ ವಿಸ್ತರಿಸಿದೆ. ಈ ಹಿಂದೆ ವಾರದಲ್ಲಿ ಎರಡು ದಿನ ನೀಡಲಾಗುತ್ತಿದ್ದ ಈ ಸೌಲಭ್ಯವನ್ನು ಇದೀಗ 6 ದಿನಗಳಿಗೆ ಹೆಚ್ಚಿಸಲಾಗಿದೆ. ಅಜೀಮ್ ಪ್ರೇಮ್ ಜೀ ಫೌಂಡೇಶನ್ ಸಹಯೋಗದೊಂದಿಗೆ ಈ ಯೋಜನೆಯನ್ನು ರೂಪಿಸಲಾಗಿದ್ದು, ಮಕ್ಕಳ ಪೌಷ್ಟಿಕ ಆಹಾರದ ಕೊರತೆಯನ್ನು ನೀಗಿಸುವುದು ಇದರ ಉದ್ದೇಶವಾಗಿದೆ.
ಯಶಸ್ವಿನಿ ಯೋಜನೆ ಅಡಿಯಲ್ಲಿ 700 ನೆಟ್ವರ್ಕ್ ಆಸ್ಪತ್ರೆಗಳನ್ನ ಸ್ಥಾಪಿಸಲು ಹಾಗೂ ಯಶಸ್ವಿನಿ ಯೋಜನೆ ಅಡಿ 59,000 ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಘೋಷಣೆ ಮಾಡಲಾಗಿದೆ.
ಸಹಕಾರ ಬ್ಯಾಂಕ್ಗಳಲ್ಲಿ ಅವ್ಯವಹಾರ ತಡೆಗೆ ಹೆಲ್ಪ್ಲೈನ್ ಸ್ಥಾಪಿಸಲು ಸೂಚನೆ ನೀಡಲಾಗಿದೆ. ಸಹಕಾರ ಸಂಘಗಳ ಡಿಜಿಟಲೀಕರಣಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಮುದ್ದೇಬಿಹಾಳದಲ್ಲಿ ಕೃಷಿ ಸಂಶೋಧನಾ ಕೇಂದ್ರ, ಅಥಣಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆ ಮತ್ತು ಗದಗ ಜಿಲ್ಲೆಯ ಡಂಬಳದಲ್ಲಿ ತೋಟಗಾರಿಕಾ ಕಾಲೇಜ್ ಸ್ಥಾಪನೆ ಮಾಡಲು ಘೋಷಣೆ
ಕೊಪ್ಪಳದಲ್ಲಿ ಕುರಿ-ಮೇಕೆ ಮಾರುಕಟ್ಟೆ ಅಭವೃದ್ಧಿಗೆ ₹25 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಕಲಬುರಗಿಯಲ್ಲಿ ನೂತನ ಮೆಗಾ ಡೈರಿಗೆ ₹50 ಕೋಟಿ ಅನುದಾನ, ಗ್ರಾಮೀಣ ಉಗ್ರಾಣಗಳ ನಿರ್ಮಾಣಕ್ಕೆ ₹60 ಕೋಟಿ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಸುಸಜ್ಜಿತ ಕುರಿ-ಮೇಕೆ ಮಾರುಕಟ್ಟೆ ತೆರೆಯಲು ಘೋಷಿಸಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ಹೈಟೆಕ್ ಹೂವಿನ ಮಾರುಕಟ್ಟೆ ಮತ್ತು ಕೆಜಿಎಫ್ನಲ್ಲಿ ಆಧುನಿಕ ಮಾರುಕಟ್ಟೆ ನಿರ್ಮಾಣ ಘೋಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.