ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ಜಿಲ್ಲಾ ಅಧ್ಯಕ್ಷರು, ರಾಜ್ಯದ ಎಲ್ಲ ಪದಾಧಿಕಾರಿಗಳು ಈ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ನುಡಿದರು.
ಅಧಿವೇಶನ ಮುಗಿಯುವ ಕೊನೆಯ ದಿನ ಗೌರವಾನ್ವಿತ ಸ್ಪೀಕರ್ ಅವರು ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿದ್ದಾರೆ. ಸ್ಪೀಕರ್ ಅವರ ಸರ್ವಾಧಿಕಾರಿ ಧೋರಣೆ ಸರಿಯಲ್ಲ; 2ರಂದು ಬೆಳಿಗ್ಗೆ ವಿಧಾನಸೌಧ ಮುಂಭಾಗದ ಕೆಂಗಲ್ ಪ್ರತಿಮೆಯ ಮುಂದೆ ನಮ್ಮೆಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು ಪ್ರತಿಭಟನೆ ಮಾಡುತ್ತೇವೆ. ಸ್ಪೀಕರ್ ಅವರಿಗೆ ಮನವಿ ಸಲ್ಲಿಸುತ್ತೇವೆ ಎಂದು ವಿಜಯೇಂದ್ರ ಅವರು ತಿಳಿಸಿದರು.
ಸ್ಪೀಕರ್ ಅವರ ತೀರ್ಮಾನವು ಮತದಾರರಿಗೆ ಮಾಡಿದ ಅವಮಾನ ಎಂದು ತಿಳಿಸಿದರು. 18 ಶಾಸಕರ ಅಮಾನತನ್ನು ಹಿಂದಕ್ಕೆ ಪಡೆಯುವವರೆಗೆ ಬಿಜೆಪಿಯ ಶಾಸಕರು, ವಿಧಾನಪರಿಷತ್ ಸದಸ್ಯರು ಕಮಿಟಿ ಮೀಟಿಂಗ್ಗಳಿಗೆ ಹಾಜರಾಗುವುದಿಲ್ಲ ಎಂದು ನಿರ್ಧರಿಸಲಾಗಿದೆ ಎಂದು ವಿವರಿಸಿದರು. 4ರಂದು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ, 5ರಂದು ಎಲ್ಲ ಮಂಡಲಗಳಲ್ಲಿ ಸಹ ಬೆಲೆ ಏರಿಕೆಯ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ಮಾಡಲಿದ್ದೇವೆ ಎಂದರು.
ಪಕ್ಷದ ಎಲ್ಲ ಮುಖಂಡರು ಕುಳಿತು ಅನೇಕ ವಿಚಾರಗಳನ್ನು ಚರ್ಚಿಸಿದ್ದೇವೆ. ವಿಶೇಷವಾಗಿ ರಾಜ್ಯ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿ ನೀಡಿದೆ. ನೀರಿನ ದರ ಏರಿಸಿದರು. ಪೆಟ್ರೋಲ್ ದರ ಹೆಚ್ಚಿಸಿದರು. ಹಾಲಿನ ದರವನ್ನೂ ಮೂರನೇ ಬಾರಿಗೆ ಜಾಸ್ತಿ ಮಾಡಿದ್ದಾರೆ. ಹಾಲಿನ ಬೆಲೆ ಏರಿಕೆ ಜನರಿಗೆ ಯುಗಾದಿ ಕೊಡುಗೆಯಂತಿದೆ ಎಂದು ವ್ಯಂಗ್ಯವಾಡಿದರು.
ಬೆಲೆ ಏರಿಕೆ ಸರಕಾರದ ವಿರುದ್ಧ ಜನಾಂದೋಲನ ಮಾಡಲಿದ್ದೇವೆ. ಜನರಲ್ಲಿ ಜಾಗೃತಿ ಮೂಡಿಸಲಿದ್ದೇವೆ. ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ ಎಂದರು.
ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರವು ಸರಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ ನೀಡಿದ್ದು, ಇದು ಒಂದು ಕಣ್ಣಿಗೆ ಸುಣ್ಣ ಇನ್ನೊಂದು ಕಣ್ಣಿಗೆ ಬೆಣ್ಣೆಯಂತಿದೆ. ಹಿಂದೂಗಳಿಗೆ ಮಾಡಿದ ಈ ಅವಮಾನದ ವಿರುದ್ಧ ಜನಜಾಗೃತಿ ಮೂಡಿಸುತ್ತೇವೆ. ಈ ನಿಟ್ಟಿನಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಿಗೆ ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದರು.
ಕೇಂದ್ರದ ವರಿಷ್ಠರು ಹಲವು ಬಾರಿ ಬಸನಗೌಡಪಾಟೀಲ ಯತ್ನಾಳರಿಗೆ ನೋಟಿಸ್ ಕೊಟ್ಟು ಅವರನ್ನು ತಿದ್ದುವ ಪ್ರಯತ್ನ ಮಾಡಿದ್ದಾರೆ. ರಾಜ್ಯಾಧ್ಯಕ್ಷನಾಗಿ ನಾನು ಪಕ್ಷದ ಮುಖಂಡರ ಜೊತೆ ಯತ್ನಾಳರನ್ನು ಭೇಟಿ ಮಾಡಿ ಪಕ್ಷದ ಹಿತದೃಷ್ಟಿಯಿಂದ ಸಣ್ಣಪುಟ್ಟ ಗೊಂದಲ ಸರಿಪಡಿಸಿಕೊಳ್ಳೋಣ ಎಂದಿದ್ದೆ. ಸದನ ಇದ್ದಾಗ ಭೋಜನಕೂಟಕ್ಕೂ ನಾನೇ ಆಹ್ವಾನಿಸಿದ್ದೆ ಎಂದು ಪ್ರಶ್ನೆಗೆ ಉತ್ತರಿಸಿದರು.
ನಾನು ಹಿಂದೊಂದು ಮುಂದೊಂದು ಮಾತನಾಡುವ ವ್ಯಕ್ತಿಯಲ್ಲ; ಯಡಿಯೂರಪ್ಪನವರು ಅನೇಕರನ್ನು ಬೆಳೆಸಿದ್ದಾರೆ. ಅವರು ತಮ್ಮ ಜೀವನದಲ್ಲಿ ಮತ್ತೊಬ್ಬರನ್ನು ತುಳಿಯುವ ಕೆಲಸ ಮಾಡಿಲ್ಲ. ರಾಜ್ಯಾಧ್ಯಕ್ಷನಾಗಿ ನನ್ನ ಕರ್ತವ್ಯದ ಅರಿವು ನನಗೂ ಇದೆ. ಎಲ್ಲವನ್ನೂ ಸರಿಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ವಿವರಿಸಿದರು. ಪಕ್ಷದ ಕೇಂದ್ರದ ವರಿಷ್ಠರು ಸಾಕಷ್ಟು ಸಮಯ ಕಾದಿದ್ದಾರೆ. ವರಿಷ್ಠರು ಇದೆಲ್ಲವನ್ನೂ ಗಮನಿಸಿ ಉಚ್ಚಾಟನೆಯ ಅಂತಿಮ ನಿರ್ಧಾರ ಪ್ರಕಟಿಸಿದ್ದಾರೆ ಎಂದರು.
ರಾಜ್ಯದಲ್ಲಿ ಬಿಜೆಪಿಯನ್ನು ಸ್ವಂತ ಬಲದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ನನಗೆ ಈ ಜವಾಬ್ದಾರಿ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಆಗಬೇಕೆಂದು ಅಲ್ಲ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.