ಉಡುಪಿ : ಮಣಿಪಾಲ ವೈದ್ಯಕೀಯ ವಿದ್ಯಾರ್ಥಿನಿಯನ್ನು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 1.10 ಲಕ್ಷ ರೂಪಾಯಿಗಳ ದಂಡವನ್ನು ವಿಧಿಸಿ ಇಲ್ಲಿನ ಸ್ಥಳೀಯ ನ್ಯಾಯಾಲಯ ಅಕ್ಟೋಬರ್ 15 , ಗುರುವಾರ ತೀರ್ಪಿತ್ತಿದೆ.
ಅತ್ಯಾಚಾರ ಆರೋಪದಡಿಯಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಪ್ರಮುಖ ಆರೋಪಿಗಳಾಗಿದ್ದ ಯೋಗೇಶ್, ಆನಂದ್ ಮತ್ತು ಹರಿಪ್ರಸಾದ್ ಅವರಿಗೆ ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿ ತೀರ್ಪನ್ನು ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷ್ಯನಾಶ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿದ್ದ ಬಾಲಚಂದ್ರ ಮತ್ತು ಹರೀಂದ್ರ ಅವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ ತಲಾ 5 ಸಾವಿರ ರೂಪಾಯಿ ದಂಡವನ್ನು ವಿಧಿಸಿದೆ.
2013ರ ಜೂನ್ 20ರಂದು ಮಣಿಪಾಲದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಆಟೋ ರಿಕ್ಷಾದಲ್ಲಿ ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಸಾಮೂಹಿಕವಾಗಿ ಅತ್ಯಾಚಾರವೆಸಗಲಾಗಿತ್ತು. ಈ ಪ್ರಕರಣವನ್ನು ಘಟನೆ ನಡೆದು ಒಂದು ವಾರದೊಳಗೆ ಬೇಧಿಸುವಲ್ಲಿ ಸಫಲರಾಗಿದ್ದ ಮಣಿಪಾಲ ಪೊಲೀಸರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದರು ಮತ್ತು ಘಟನೆಗೆ ಸಂಬಂಧಿಸಿ ಹಲವರನ್ನು ವಿಚಾರಣೆಗೊಳಪಡಿಸಿದ್ದರು. ಘಟನೆ ನಡೆದ ಎರಡೂವರೆ ವರ್ಷಗಳ ಒಳಗೆ ಈ ತೀರ್ಪು ಹೊರಬಂದಿರುವುದು ವಿಶೇಷವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.