ನವದೆಹಲಿ: ಎಎಪಿ ಸಮಾವೇಶದಲ್ಲಿ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಗುರುವಾರ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿತು. ವಿವಿಧ ಪಕ್ಷಗಳ ನಾಯಕರುಗಳು ಒಬ್ಬರ ಮೇಲೊಬ್ಬರು ಗೂಬೆ ಕೂರಿಸಲು ಪ್ರಯತ್ನಿಸಿದರು. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ಏರ್ಪಟ್ಟಿತು.
ಆತ್ಮಹತ್ಯೆಯ ಬಗೆಗಿನ ಚರ್ಚೆಗೆ ಅನುವು ಮಾಡಿಕೊಡಬೇಕೆಂದು ಕಾಂಗ್ರೆಸ್ ಆಗ್ರಹಿಸಿತು.
ಪ್ರಕರಣದ ಬಗ್ಗೆ ಪರಾಮರ್ಶೆ ನಡೆಸುವ ಅಗತ್ಯವಿದೆ, ರಾಜಕೀಯ ಮುಖಂಡರು, ಪತ್ರಕರ್ತರು ಆಗುವ ಮುಂಚೆ ನಾವೆಲ್ಲರೂ ಮನುಷ್ಯರು. ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಾಗ ಅದನ್ನು ಯಾಕೆ ತಡೆಯಲು ಸಾಧ್ಯವಾಗಲಿಲ್ಲ. ನಮ್ಮ ಸಮಾಜ ಸೂಕ್ಷ್ಮತೆಯನ್ನು ಕಳೆದುಕೊಂಡಿದೆ ಎಂಬುದು ಇದರಿಂದ ತಿಳಿದು ಬರುತ್ತದೆ ಎಂದು ಕಾಂಗ್ರೆಸ್ ಮುಖಂಡ ದೀಪೇಂದ್ರ ಎಸ್. ಹೂಡಾ ಹೇಳಿದರು.
ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಸದನದಲ್ಲಿ ಹೇಳಿಕೆ ನೀಡಬೇಕೆಂದು ಅವರು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡ ವೆಂಕಯ್ಯ ನಾಯ್ಡು, ಇದೊಂದು ಗಂಭೀರ ಪ್ರಕರಣವಾಗಿದ್ದು, ಇದನ್ನು ರಾಜಕೀಯಗೊಳಿಸಬಾರದು ಎಂದು ಕೈಮುಗಿದು ಮನವಿ ಮಾಡಿಕೊಂಡರು.
ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ನಡೆಯಬೇಕೆಂದು ಕೆಲ ಸದಸ್ಯರು ಆಗ್ರಹಿಸಿದರು.
ಕಾಂಗ್ರೆಸ್ ಮುಖಂಡ ಗುಲಾಮ್ ನಬಿ ಅಜಾದ್ ಘಟನೆಗೆ ಎಎಪಿ ಮತ್ತು ಕೇಂದ್ರ ಕಾರಣ ಎಂದು ಆರೋಪಿಸಿದರು.
ಚರ್ಚೆಯ ಕಾವು ಏರತೊಡಗಿದಂತೆ ಸದನದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಇದರಿಂದಾಗಿ 15 ನಿಮಿಷಗಳ ಕಾಲ ಕಲಾಪವನ್ನು ಮುಂದೂಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.