ಮಂಗಳೂರು : ಸರಕಾರಿ ಪ್ರಾಥಮಿಕ ಶಾಲೆಗಳ ಹೆಚ್ಚುವರಿ ಶಿಕ್ಷಕರುಗಳ ಹುದ್ದೆಗಳ ಸ್ಥಳಾಂತರ ಪ್ರಕ್ರಿಯೆಯಲ್ಲಿ ಸಾಕಷ್ಟು ನ್ಯೂನತೆಗಳಿದ್ದು, ಅವುಗಳನ್ನು ಸರಿಪಡಿಸುವವರೆಗೆ ಸ್ಥಳ ನಿಯೋಜನೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸುವಂತೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ರವರು ಶಿಕ್ಷಣ ಸಚಿವರನ್ನು ಒತ್ತಾಯಿಸಿದ್ದಾರೆ. ಹೆಚ್ಚುವರಿ ಶಿಕ್ಷಕರ ಸ್ಥಳಾಂತರ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರೆಸಿದ್ದು, ಇದರಿಂದ ಶಿಕ್ಷಕರಿಗೆ ತೀವ್ರ ಅನ್ಯಾಯವಾಗುತ್ತಿದೆ.
ಈ ಹಿಂದೆ ಶಿಕ್ಷಣ ಸಚಿವರೊಂದಿಗೆ ನಡೆಸಿದ ಚರ್ಚೆಯಲ್ಲಿ ನಿರ್ಣಯಿಸಿದಂತೆ ಮಲೆನಾಡಿನ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳನ್ನು ಗುರುತಿಸುವಾಗ ಮಲೆನಾಡು ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ಬರುವ ತಾಲ್ಲೂಕುಗಳಿಗೆ ಅನ್ವಯಿಸುವಂತೆ ಗುರುತಿಸುವುದಾಗಿ ನಿರ್ಣಯಿಸಿದ್ದರೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ತಾಲ್ಲೂಕುಗಳಿಗೆ ಮಲೆನಾಡಿನ ಅನುಪಾತವನ್ನು ಅನ್ವಯಿಸದಿರುವುದರಿಂದ ಈ ಜಿಲ್ಲೆಗಳ ಶಿಕ್ಷಕರು ತೊಂದರೆ ಅನುಭವಿಸುತ್ತಿದ್ದಾರೆ. ಇದಲ್ಲದೆ ಮಾಜಿ ಸೈನಿಕರ ಪತ್ನಿಯರಿಗೆ ಇರುವ ಅವಕಾಶಗಳನ್ನು ನಿರಾಕರಿಸುವುದು ಸಹ ಬೆಳ್ತಂಗಡಿ ತಾಲ್ಲೂಕಿನಿಂದ ವರದಿಯಾಗಿರುತ್ತದೆ. ಹೆಚ್ಚುವರಿ ಶಿಕ್ಷಕರ ಸ್ಥಳಾಂತರ ಪ್ರಕ್ರಿಯೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸುವವರೆಗೆ ಈ ಪ್ರಕ್ರಿಯೆಯನ್ನು ಕೂಡಲೇ ರದ್ದುಮಾಡುವಂತೆ ಎಲ್ಲಾ ಜಿಲ್ಲೆಗಳ ವಿದ್ಯಾಂಗ ಉಪನಿರ್ದೇಶಕರಿಗೆ ಸೂಕ್ತ ನಿರ್ದೇಶನವನ್ನು ನೀಡುವಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರನ್ನು ಆಗ್ರಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.