ಬೆಂಗಳೂರು : ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರ್ನಾಟಕ ಬಂದ್ ಕರೆದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಬಂದ್ ಹಿನ್ನಲೆಯಲ್ಲಿ ಬಹಳಷ್ಟು ಜಿಲ್ಲೆಗಳಲ್ಲಿ ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟು ಮುಚ್ಚಿದ್ದಾರೆ. ಬಹುತೇಕ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಜನಜೀವನ ಅಸ್ತವ್ಯಸ್ತವಾಗಿದೆ.
ಬೆಳಗ್ಗೆ 6 ಗಂಟೆಗೆ ಪ್ರಾರಂಭವಾಗಿರುವ ಬಂದ್ ಸಂಜೆಯವರೆಗೂ ನಡೆಯಲಿದೆ ಎನ್ನಲಾಗಿದೆ. ಬಂದ್ಗೆ ಸುಮಾರು 800 ಸಂಘಟನೆಗಳು ಬೆಂಬಲ ನೀಡಿದ್ದು, ಕೆ.ಆರ್.ಎಸ್., ಮಂಡ್ಯ, ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಕನ್ನಡ ಪರ ಸಂಘಟನೆಗಳು, ರೈತ ಸಂಘಟನೆಗಳು ಬೀದಿಗಿಳಿದು ಹೆದ್ದಾರಿ ತಡೆದು ಅಲ್ಲಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾರಣ ಬೆಂಗಳೂರು – ಮೈಸೂರು ಹೆದ್ದಾರಿ ಬಹುತೇಕ ಸ್ಥಬ್ದವಾಗಿದೆ. ಮೂಲಗಳ ಪ್ರಕಾರ ಕೆಲವೆಡೆ ವಾಹನಗಳಿಗೆ ಬೆಂಕಿ ಹಚ್ಚಿದ್ದು, ರಸ್ತೆ ತಡೆ ಉಂಟು ಮಾಡಿದ ಪ್ರಕರಣಗಳೂ ನಡೆದಿದೆ ಎನ್ನಲಾಗಿದೆ.
ಬಂದ್ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಬಾರದು, ಬಲವಂತದ ಬಂದ್ ಮಾಡಿಸಬಾರದು, ಶಾಂತಿಯುತವಾಗಿ ನಡೆಸಬೇಕು. ಇಲ್ಲದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಗೃಹ ರಕ್ಷಕ ದಳದ ಸಿಬ್ಬಂದಿಗಳು, ಡಿಸಿಪಿ, ಎಸಿಪಿ, ಎಎಸ್ಐ, ಎಎಸ್ಐ, ಹೊಯ್ಸಳ ವಾಹನಗಳು, ಪೇದೆಗಳು ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದ್ದಾರೆ. ಹೊಯ್ಸಳ ವಾಹನಗಳು ನಿರಂತರವಾಗಿ ಗಸ್ತು ತಿರುಗಲಿದ್ದು, ಎಲ್ಲೆಡೆ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.