ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಬಿಡುವ ವಿಚಾರದ ಕುರಿತು ವಿಧಾನಮಂಡಲ ಕೈಗೊಂಡ ತೀರ್ಮಾನಕ್ಕೆ ಬದ್ಧರಾಗಿಯೇ ಇರಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷಗಳು ಸಲಹೆ ನೀಡಿವೆ.
ಸುಪ್ರೀಂ ಕೋರ್ಟ್ ಕಾವೇರಿ ನೀರನ್ನು ತಮಿಳುನಾಡಿಗೆ ಮತ್ತೆ ಮೂರು ದಿನ ನೀರು ಬಿಡಬೇಕು ಎಂದು ಆದೇಶ ನೀಡಿದ ಹಿನ್ನೆಲೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಿತು. ಪ್ರಮುಖ ಪಕ್ಷಗಳಾದ ಬಿಜೆಪಿ, ಜೆಡಿಎಸ್ಗಳ ನಾಯಕರು ಪಾಲ್ಗೊಂಡು ವಿವಿಧ ವಿಚಾರ ಮಂಡಿಸಿದರು.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ, ತಮಿಳುನಾಡಿಗೆ ಮತ್ತೆ ಮೂರು ದಿನಗಳ ಕಾಲ ನೀರು ಬಿಡಬೇಕೆಂಬ ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸರ್ವಪಕ್ಷ ಸಭೆ ಮುಕ್ತಾಯಗೊಂಡಿದೆ. ಸರ್ವಪಕ್ಷ ನಾಯಕರ ಸಲಹೆಗಳನ್ನು ಸಂಗ್ರಹಿಸಿದ್ದೇವೆ. ಇಂದು ನಡೆಯಲಿರುವ ಮಂತ್ರಿ ಪರಿಷತ್ನಲ್ಲಿ ಸಿಎಂ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಇಂದು ನಡೆದ ಸರ್ವಪಕ್ಷ ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಸಭೆಯಲ್ಲಿ ಕಾನೂನು ತಜ್ಞರ ಸಲಹೆ, ವಿಪಕ್ಷಗಳ ಸಲಹೆ ಸಂಗ್ರಹಿಸಿದ್ದೇವೆ. ಈ ಬಗ್ಗೆ ಮಂತ್ರಿಪರಿಷತ್ ನಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ನಿರ್ಣಯಕ್ಕೆ ಬದ್ಧರಾಗಿ:
ಈ ಹಿಂದೆ ಸದನ ಕೈಗೊಂಡ ನಿರ್ಣಯಕ್ಕೆ ಬದ್ಧರಾಗಿರುವಂತೆ ನಾವು ಸಲಹೆ ನೀಡಿದ್ದೇವೆ ಎಂದು ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಹೇಳಿದರು. ಸರ್ಕಾರ ತೆಗೆದುಕೊಳ್ಳುವ ನಿರ್ಧಾರವನ್ನು ಕಾದು ನೋಡುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದಿನಿಂದ ಮೂರು ದಿನ ಒಟ್ಟು 18 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುವಂತೆ ಸುಪ್ರೀಂಕೋರ್ಟ್ ಮಂಗಳವಾರ ಆದೇಶ ನೀಡಿತ್ತು
ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡೋದು ಬೇಡ. ವಿಧಾನಮಂಡಲದ ನಿರ್ಣಯಕ್ಕೆ ಬದ್ಧರಾಗಿರುವಂತೆ ವಿಪಕ್ಷಗಳು ಸಲಹೆ ನೀಡಿದವು. ಆದರೆ ಸರ್ವಪಕ್ಷ ಸಭೆಯಲ್ಲಿನ ಸಲಹೆ ನಂತರ ಮಂತ್ರಿಪರಿಷತ್ ನಲ್ಲಿ ಚರ್ಚಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕ್ಷಮೆ ಯಾಚಿಸಿದ ಅಂಬಿ:
ಇದೇ ವೇಳೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಮಾಜಿ ಸಚಿವ, ಚಿತ್ರನಟ ಅಂಬರೀಷ್, ಕಾವೇರಿ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸದಿರುವುದಕ್ಕೆ ಕರ್ನಾಟಕದ ಜನತೆಯ ಕ್ಷಮೆಯಾಚಿಸುವುದಾಗಿ ಹೇಳಿದ್ದಾರೆ. ಜನರ ಬಗ್ಗೆ ನನಗೆ ಕಾಳಜಿ ಇದೆ. ನಾನು ಈ ಮಟ್ಟಕ್ಕೆ ಏರಲು ಮಂಡ್ಯ ಜಿಲ್ಲೆಯ ಜನರ ಪ್ರೀತಿಯೇ ಕಾರಣ. ಸೆ.30ರ ತೀರ್ಪು ನೋಡಿಕೊಂಡು ಮಂಡ್ಯಕ್ಕೆ ಭೇಟಿ ನೀಡುತ್ತೇನೆ ಎಂದರು.
ಸೆ.30ವರೆಗೆ ಸೆಕ್ಷನ್
ಬೆಂಗಳೂರು ಮತ್ತು ಸುತ್ತಮುತ್ತಿಲಿನ ಪ್ರದೇಶಗಳಲ್ಲಿ ಸೆ.30ವರೆಗೆ ಸೆ.144ರನ್ವಯ ನಿಷೇಧಾಜ್ಞೆ ಮುಂದುವರಿಯುತ್ತದೆ. ಕಾವೇರಿ ಕುರಿತ ಮಹತ್ವದ ತೀರ್ಮಾನ ಸೆ.30ರಂದು ಹೊರಬೀಳುವ ನಿರೀಕ್ಷೆ ಇರುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಕಾರ್ಯ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.