ವಿಜಯಪುರ : ಮಂಗಳೂರು ಚಲೋ ರ್ಯಾಲಿ ನಡೆಸಲು ಅನುಮತಿ ನಿರಾಕರಣೆ ಹಾಗೂ ಬೆಂಗಳೂರಿನಿಂದ ಬೈಕ್ ರ್ಯಾಲಿ ನಡೆಸಲು ಅಣಿಯಾದ ಬಿಜೆಪಿ ನಾಯಕರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಸೋಲಾಪುರ ಬೈಪಾಸ್ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಒಂದೂವರೆ ಗಂಟೆಗೂ ಅಧಿಕ ಕಾಲ ರಸ್ತೆ ನಡೆಸಿದ 50 ಕ್ಕೂ ಹೆಚ್ಚು ಕಾರ್ಯಕರ್ತರು ಪೊಲೀಸರು ತಮ್ಮ ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಾಯಕರು, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರ ಧೋರಣೆ ಅನುಸರಿಸುತ್ತಿದೆ. ಅನ್ಯಾಯವಾದಾಗ ಪ್ರತಿಭಟನೆ ಮಾಡುವುದು ನಮ್ಮ ಸಂವಿಧಾನವೇ ಕರುಣಿಸಿರುವ ಹಕ್ಕು, ಆದರೆ ಈ ಹಕ್ಕನ್ನೇ ರಾಜ್ಯ ಸರ್ಕಾರ ಕಸಿದುಕೊಳ್ಳಲು ಹೊರಟಿದೆ ಆ ಮೂಲಕ ಪ್ರಜಾಪ್ರಭುತ್ವವನ್ನು ಗಾಳಿಗೆ ತೂರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪಿಎಫ್ಐ ಮೊದಲಾದ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಮಂಗಳೂರಿನಲ್ಲಿ ಬೃಹತ್ ರ್ಯಾಲಿ ಸಂಘಟಿಸಲಾಗಿತ್ತು, ಆ ಸಮಾವೇಶದಲ್ಲಿ ಪಾಲ್ಗೊಳ್ಳಲು ವಿವಿಧ ಕಡೆಗಳಲ್ಲಿ ಬೃಹತ್ ಬೈಕ್ ರ್ಯಾಲಿ ಸಂಘಟಿಸಲಾಗಿತ್ತು, ಆದರೆ ರಾಜ್ಯ ಸರ್ಕಾರ ಈ ರ್ಯಾಲಿಗೆ ಅನುಮತಿ ನಿರಾಕರಿಸುವ ಮೂಲಕ ಹಕ್ಕುಗಳನ್ನು ದಮನಗೊಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ. ಬೆಂಗಳೂರಿನಲ್ಲಿ ಶಾಂತಿಯುತವಾಗಿ ಬೈಕ್ ರ್ಯಾಲಿ ನಡೆಸಲು ಅಣಿಯಾಗುತ್ತಿದ್ದ ಬಿಜೆಪಿ ಹಿರಿಯ ನಾಯಕರನ್ನು ಬಂಧಿಸಲಾಗಿದೆ. ಈ ರೀತಿ ಪ್ರತಿಪಕ್ಷಗಳ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನದಲ್ಲಿ ಕಾಂಗ್ರೆಸ್ ಸರ್ಕಾರ ತೊಡಗಿಸಿಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಕೂಡಲೇ ತನ್ನ ಈ ನೀತಿಯನ್ನು ಕೈ ಬಿಡಬೇಕು, ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪಿಎಫ್ಐ ಮೊದಲಾದ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಹಿರಿಯ ಮುಖಂಡ ವಿಜುಗೌಡ ಪಾಟೀಲ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ರವಿ ಖಾನಾಪುರ, ಯುವ ಮೋರ್ಚಾ ರಾಜ್ಯ ಕಾರ್ಯದರ್ಶಿ ಶರತ್ ಬಿರಾದಾರ, ಡಾ.ಪ್ರಶಾಂತ ಕಟಕೋಳ, ಸೋಮನಗೌಡ ಪಾಟೀಲ ಸಾಸನೂರ, ಭೀಮಾಶಂಕರ ಹದನೂರ, ಆನಂದ ಮುಚ್ಚಂಡಿ, ಈರಣ್ಣ ಪಟ್ಟಣಶೆಟ್ಟಿ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.