ಬಾಗಲಕೋಟೆ: ಭಾರತ ರತ್ನ ಪ್ರಶಸ್ತಿಗೆ ಸಂಬಂಧಿಸಿದಂತೆ ಸಿದ್ದಗಂಗಾ ಶ್ರೀಗಳ ಸುಳ್ಳು ಆರೋಪ ಮಾಡಿರುವ ಕೂಡಲ ಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತೀವ್ರ ವಾಗ್ದಾಳಿ ನಡೆಸಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದಗಂಗಾ ಶ್ರೀಗಳು ಗೌರವಾನ್ವಿತರು, ಎಲ್ಲರೂ ಅವರನ್ನು ಪೂಜನೀಯ ಭಾವನೆಯಿಂದ ಕಾಣುತ್ತಿರುವಾಗ, ಶ್ರೀಗಳ ವಿರುದ್ಧದ ಆರೋಪದಿಂದ ಮಾತೆ ಮಾಹಾದೇವಿ ಅವರ ಯೋಗ್ಯತೆ ಏನು ಎನ್ನುವುದು ಸಮಾಜಕ್ಕೆ ಗೊತ್ತಾಗಿದೆ ಎಂದು ಹೇಳಿದರು.
ಕೆಂಪಯ್ಯ ವಿರುದ್ಧ ಗರಂ: ನಿವೃತ್ತ ಪೊಲೀಸ್ ಅಧಿಕಾರ ಕೆಂಪಯ್ಯ ಅವರನ್ನು ಮುಂದಿಟ್ಟುಕೊಂಡು ತಮ್ಮ ವಿರುದ್ಧ ಸಲ್ಲದ ಆರೋಪಗಳನ್ನು ಮಾಡಲಾಗುತ್ತಿದೆ. ಇದಾವುದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ.
ಸಿಎಂ ಹಾಗೂ ಕೆಲ ಸಚಿವರ ವಿರುದ್ಧ ಚಾರ್ಜ್ ಸೀಟ್ ಬಗ್ಗೆ ಹಗುರವಾಗಿ ಮಾತನಾಡಿರುವ ಅಂಶ ಗಮನಕ್ಕೆ ಬಂದಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ಬಿಡುಗಡೆ ಮಾಡಲಿರುವ ಚಾರ್ಜ್ ಸೀಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದಿಯಾಗಿ ಕೆಲ ಸಚಿವರ ಹಗರಣ ಬಯಲಾಗಿದೆ. ಅಲ್ಲಿಯವರೆಗೂ ಕಾಯ್ದುನೋಡಿ. ಈ ಬಗ್ಗೆ ಹಗುರವಾಗಿ ಮಾತನಾಡಿದವರೇ ಸೂಕ್ತ ಉತ್ತರ ಕೊಡಬೇಕಾಗುತ್ತದೆ ಎಂದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡು ಬಿಜೆಪಿ ಚುನಾವಣೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಅದರ ಭಾಗವಾಗಿಯೆ ಬಾಗಲಕೋಟೆಯಲ್ಲಿ ಉತ್ತರ ಕರ್ನಾಟಕದ ಆಯ್ದ ಪ್ರಮುಖ ಕಾರ್ಯಕರ್ತರ ಸಭೆ ನಡೆಯುತ್ತಿದೆ. ಸಭೆಯಲ್ಲಿ ಬೂತ್ ಮಟ್ಟದಲ್ಲಿ ಸಂಘಟನೆ ಬಲಪಡಿಸುವ ಕುರಿತು ಹೆಚ್ಚಿನ ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದರು.
ಈಗಾಗಲೇ 60 ವಿಸ್ತಾರಕರು ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಮುಂದಾಗಿದ್ದಾರೆ. ಪ್ರಧಾನಿ ಮೋದಿ ಅವರ ಕಾಂಗ್ರೆಸ್ ಮುಕ್ತ ಭಾರತ ಕನಸು ನನಸು ಮಾಡುವ ಕೆಲಸ ಕರ್ನಾಟಕದಿಂದಲೇ ಆರಂಭಗೊಳ್ಳಲಿದೆ ಎಂದು ಅವರು ಹೇಳಿದರು.
ಶಾಸಕ ಗೋವಿಂದ ಕಾರಜೋಳ, ಮಾಜಿ ಸಚಿವ ಮುರಗೇಶ ನಿರಾಣಿ ಇತರರು ಇದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.